ಶನಿವಾರ, ಸೆಪ್ಟೆಂಬರ್ 9ರಂದು ನಡೆದ ಮಂಗಾಂಗ್ ಓವಲ್ ಮೈದಾನದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಡೇವಿಡ್ ವಾರ್ನರ್ ಮತ್ತು ಮಾರ್ನಸ್ ಲ್ಯಾಬುಸ್ಚಾಗ್ನೆ ಶತಕಗಳ ನೆರವಿನಿಂದ 392 ರನ್‌ಗಳ ಬೃಹತ್ ಮೊತ್ತ ದಾಖಲಿಸಿದೆ.
ಈ ವೇಳೆ ಆಸ್ಟ್ರೇಲಿಯಾ ತಂಡದ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ ಏಕದಿನ ಕ್ರಿಕೆಟ್‌ನಲ್ಲಿ ತಮ್ಮ 20ನೇ ಶತಕ ಬಾರಿಸುವ ಮೂಲಕ ದಾಖಲೆ ನಿರ್ಮಿಸಿದರು. ಆರಂಭಿಕರಾಗಿ 20 ಶತಕಗಳನ್ನು ತಲುಪಿದ ಆಸ್ಟ್ರೇಲಿಯಾದ ಮೊದಲ ಆಟಗಾರ ಎನಿಸಿದರು.

ಇನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಆಸ್ಟ್ರೇಲಿಯಾ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಹೊಸ ವಿಶ್ವದಾಖಲೆ ನಿರ್ಮಿಸಿದರು. ಅದು ಕೂಡ ಭಾರತದ ಲೆಜೆಂಡ್ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿ ಹಾಕುವುದರ ಮೂಲಕ ಎಂಬುದು ಮತ್ತೊಂದು ವಿಶೇಷ.
ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡದ ಪರ ಆರಂಭಿಕನಾಗಿ ಇನ್ನಿಂಗ್ಸ್ ಆರಂಭಿಸಿದ ಡೇವಿಡ್ ವಾರ್ನರ್ 93 ಎಸೆತಗಳಲ್ಲಿ 12 ಬೌಂಡರಿ ಮತ್ತು 3 ಭರ್ಜರಿ ಸಿಕ್ಸರ್‌ಗಳ ಮೂಲಕ 106 ರನ್ ಬಾರಿಸಿದರು.
ಈ ಶತಕದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ಶತಕ ಬಾರಿಸಿದ ಆರಂಭಿಕ ಆಟಗಾರ ಎಂಬ ವಿಶ್ವದಾಖಲೆಯನ್ನು ಡೇವಿಡ್ ವಾರ್ನರ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಭಾರತದ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.

ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆರಂಭಿಕನಾಗಿ ಬ್ಯಾಟಿಂಗ್ ಮಾಡಿ ಒಟ್ಟು 45 ಶತಕಗಳನ್ನು ಗಳಿಸಿದ್ದರು. ಇದೀಗ ಈ ವಿಶ್ವದಾಖಲೆಯನ್ನು ಮುರಿದು ಡೇವಿಡ್ ವಾರ್ನರ್ ಅಗ್ರಸ್ಥಾನಕ್ಕೇರಿದರು.
ಇದೇ ವೇಳೆ ಡೇವಿಡ್ ವಾರ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆರಂಭಿಕನಾಗಿ ಬ್ಯಾಟಿಂಗ್ ಮಾಡಿ ಒಟ್ಟು 46 ಶತಕಗಳನ್ನು ಬಾರಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 20 ಶತಕ ಗಳಿಸಿದ್ದರೆ, ಟೆಸ್ಟ್ ಕ್ರಿಕೆಟ್‌ನಲ್ಲಿ 25 ಶತಕಗಳು ಸೇರಿವೆ. ಅಲ್ಲದೆ, 1 ಟಿ20 ಶತಕವನ್ನು ಕೂಡ ಗಳಿಸಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯುವಲ್ಲಿ ಡೇವಿಡ್ ವಾರ್ನರ್ ಯಶಸ್ವಿಯಾದರು.
ಈ ಪಟ್ಟಿಯಲ್ಲಿ ಡೇವಿಡ್ ವಾರ್ನರ್, ಸಚಿನ್ ತೆಂಡೂಲ್ಕರ್ ನಂತರ ಮೂರನೇ ಸ್ಥಾನದಲ್ಲಿ ವೆಸ್ಟ್ ಇಂಡೀಸ್ ದಂತಕತೆ ಕ್ರಿಸ್ ಗೇಲ್ ಇದ್ದಾರೆ. ಗೇಲ್ ಆರಂಭಿಕನಾಗಿ ಬ್ಯಾಟಿಂಗ್ ಮಾಡಿ ಒಟ್ಟು 42 ಶತಕಗಳನ್ನು ಬಾರಿಸಿದ್ದಾರೆ.
ಅಲ್ಲದೆ, ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ಶತಕ ಬಾರಿಸಿರುವ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನೂ ಕೂಡ ಡೇವಿಡ್ ವಾರ್ನರ್ ಸರಿಗಟ್ಟಿದರು.
ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು ದಕ್ಷಿಣ ಆಫ್ರಿಕಾ ವಿರುದ್ಧ 5 ಶತಕಗಳನ್ನು ಬಾರಿಸಿ ದಾಖಲೆ ನಿರ್ಮಿಸಿದ್ದರು. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧ ತಮ್ಮ 5ನೇ ಶತಕ ಪೂರೈಸುವ ಮೂಲಕ ಡೇವಿಡ್ ವಾರ್ನರ್ ಅವರು ಭಾರತೀಯನ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸಮಬಲಗೊಳಿಸಿದರು.
ಬಹಳ ದಿನಗಳ ನಂತರ ಏಕದಿನ ಕ್ರಿಕೆಟ್‌ನಲ್ಲಿ ಭರ್ಜರಿ ಶತಕ ಸಿಡಿಸಿದ ಡೇವಿಡ್ ವಾರ್ನರ್ ಅವರು ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಒಂದು ವಿಶ್ವದಾಖಲೆಯನ್ನು ಮುರಿದರೆ, ಇನ್ನೊಂದು ದಾಖಲೆಯನ್ನು ಸರಿಗಟ್ಟಿದರು.