CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್‌ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
ಮಂಗಳವಾರ, ಏಪ್ರಿಲ್ 23ರಂದು ಚೆನ್ನೈನ ಐಕಾನಿಕ್ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 39ನೇ ರೋಚಕ ಪಂದ್ಯದಲ್ಲಿ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡವು 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.
ಈ ಮೂಲಕ ಐಪಿಎಲ್ 2024ರಲ್ಲಿ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಆಡಿದ 8 ಪಂದ್ಯಗಳಲ್ಲಿ 5 ಪಂದ್ಯಗಳಲ್ಲಿ ಗೆಲುವು ಮತ್ತು 3 ಪಂದ್ಯಗಳಲ್ಲಿ ಸೋತಿದ್ದು, ಪ್ರಸ್ತುತ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ.

ಮತ್ತೊಂದೆಡೆ, ರುತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈವರೆಗೆ ಆಡಿದ 8 ಪಂದ್ಯಗಳಲ್ಲಿ 4 ಗೆಲುವು ಮತ್ತು 4 ಸೋಲುಗಳೊಂದಿಗೆ ಪ್ರಸ್ತುತ ಐಪಿಎಲ್ 2024ರ ಅಂಕಪಟ್ಟಿಯಲ್ಲಿ ಅಗ್ರ 5ನೇ ಸ್ಥಾನಕ್ಕೆ ಇಳಿದಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ರುತುರಾಜ್ ಗಾಯಕ್ವಾಡ್ ಅವರ ಭರ್ಜರಿ ಶತಕ ಮತ್ತು ಶಿವಂ ದುಬೆ ಅವರ ಸ್ಫೋಟಕ ಅರ್ಧಶತಕ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 210 ರನ್ ಗಳಿಸಿತ್ತು.
211 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಮಾರ್ಕಸ್ ಸ್ಟೋಯಿನಿಸ್ ಅವರ ಭರ್ಜರಿ ಶತಕದ ಸಹಾಯದಿಂದ 19.3 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 213 ರನ್ ಗಳಿಸಿ ಗೆಲುವಿನ ಕೇಕೆ ಹಾಕಿತು ಮತ್ತು ಚೆಪಾಕ್‌ನಲ್ಲಿ ನೆರೆದಿದ್ದ ಯೆಲ್ಲೋ ಜನಸಾಗರವನ್ನು ತಣ್ಣಗಾಗುವಂತೆ ಮಾಡಿತು.

ಅಸಾಧಾರಣವಾಗಿದ್ದ ಗುರಿ ಬೆನ್ನಟ್ಟಿದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಕೊನೆಯ ಓವರ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಮಾರ್ಕಸ್ ಸ್ಟೋಯಿನಿಸ್ ಗೆಲುವು ತಂದುಕೊಟ್ಟರು. ಅಲ್ಲದೆ, ಐಪಿಎಲ್‌ನಲ್ಲಿ ತಮ್ಮ ಚೊಚ್ಚಲ ಶತಕ ಸಿಡಿಸಿ ಸಂಭ್ರಮಿಸಿದರು.
ಲಕ್ನೋ ಸೂಪರ್ ಜೈಂಟ್ಸ್ ಇನ್ನಿಂಗ್ಸ್ ಆರಂಭಿಸಿದ ನಾಯಕ ಕೆಎಲ್ ರಾಹುಲ್ ಮತ್ತು ಕ್ವಿಂಟನ್ ಡಿ ಕಾಕ್ ಉತ್ತಮ ಆರಂಭ ನೀಡಲಿಲ್ಲ. ಏಕೆಂದರೆ, ಕ್ವಿಂಟನ್ ಡಿ ಕಾಕ್ ಮೊದಲ ಓವರ್‌ನ ಮೂರನೇ ಎಸೆತದಲ್ಲೇ ಕ್ಲೀನ್ ಬೌಲ್ಡ್ ಆದರು. ಇನ್ನು ಕೆಎಲ್ ರಾಹುಲ್ 14 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ ಕೇವಲ 16 ರನ್ ಗಳಿಸಿ ಔಟಾದರು.
ನಂತರ ಬಂದ ದೇವದತ್ ಪಡಿಕ್ಕಲ್ 19 ಎಸೆತಗಳಲ್ಲಿ 13 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ಆ ಬಳಿಕ ನಿಕೋಲಸ್ ಪೂರನ್ 15 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಮೇತ 34 ರನ್ ಗಳಿಸಿ ಪೆವಿಲಿಯನ್ ಸೇರಿದರು.

ಇನ್ನು ಎರಡನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದ ಮಾರ್ಕಸ್ ಸ್ಟೋಯಿನಿಸ್ ಕೇವಲ 63 ಎಸೆತಗಳನ್ನು ಎದುರಿಸಿ 13 ಬೌಂಡರಿ ಹಾಗೂ 6 ಸಿಕ್ಸರ್‌ಗಳ ನೆರವಿನಿಂದ ಅಜೇಯ 124 ರನ್ ಬಾರಿಸಿ ಗೆಲುವಿನ ರೂವಾರಿ ಎನಿಸಿದರು. ಇವರಿಗೆ ಸಾಥ್ ನೀಡಿದ ದೀಪಕ್ ಹೂಡಾ 6 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ ಅಜೇಯ 17 ರನ್ ಗಳಿಸಿದರು.
ಬೌಲಿಂಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಮತೀಶ್ ಪತಿರಾನ 4 ಓವರ್‌ಗಳಲ್ಲಿ 35 ರನ್ ನೀಡಿ 2 ವಿಕೆಟ್ ಪಡೆದರೆ, ದೀಪಕ್ ಚಹಾರ್ 2 ಓವರ್‌ಗಳಲ್ಲಿ 11 ರನ್ ನೀಡಿ 1 ವಿಕೆಟ್ ಪಡೆದರು. ಉಳಿದಂತೆ ಮುಸ್ತಾಫಿಜುರ್ ರಹಮಾನ್ 3.3 ಓವರ್‌ಗಳಲ್ಲಿ 51 ರನ್ ನೀಡಿ 1 ವಿಕೆಟ್ ತಮ್ಮದಾಗಿಸಿಕೊಂಡರು.
ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ನಾಯಕ ರುತುರಾಜ್ ಗಾಯಕ್ವಾಡ್ ಮತ್ತು ಅಜಿಂಕ್ಯ ರಹಾನೆ ಉತ್ತಮ ಆರಂಭ ನೀಡಲಿಲ್ಲ. ತಂಡದ ಮೊತ್ತ 4 ರನ್‌ಗಳಾಗಿದ್ದಾಗ 1 ರನ್ ಗಳಿಸಿದ್ದ ಅಜಿಂಕ್ಯ ರಹಾನೆ ಔಟಾದರು.
ನಂತರ ಬಂದ ಡೇರಿಲ್ ಮಿಚೆಲ್ 11 ರನ್ ಗಳಿಸಿ ವಿಕೆಟ್ ಒಪಿಸಿದರೆ, ಆ ಬಳಿಕ ರವೀಂದ್ರ ಜಡೇಜಾ 16 ರನ್ ಗಳಿಸಿ ಪೆವಿಲಿಯನ್ ಸೇರಿದರು. ಆಗ ಕ್ರೀಸ್‌ಗೆ ಆಗಮಿಸಿದ ಶಿವಂ ದುಬೆ ಕೇವಲ 27 ಎಸೆತಗಳಲ್ಲಿ 3 ಬೌಂಡರಿ ಹಾಗೂ 7 ಸಿಕ್ಸರ್‌ಗಳ ಸಮೇತ 66 ರನ್ ಗಳಿಸಿ ಕೊನೆಯ ಓವರ್‌ನಲ್ಲಿ ಔಟಾದರು.

ಇನ್ನು ಸಿಎಸ್‌ಕೆ ನಾಯಕ ರುತುರಾಜ್ ಗಾಯಕ್ವಾಡ್ ಐಪಿಎಲ್‌ನಲ್ಲಿ ತಮ್ಮ 2ನೇ ಶತಕ ಸಿಡಿಸಿದರು. ಆರಂಭಿಕರಾಗಿ ಬಂದು ಕೊನೆಯವರೆಗೂ ಆಡಿ ಅಜೇಯರಾಗುಳಿದರು. ರುತುರಾಜ್ ಕೇವಲ 60 ಎಸೆತಗಳಲ್ಲಿ 12 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಮೂಲಕ 108 ರನ್‌ಗಳ ಶತಕ ಬಾರಿಸಿದರು.
ಮಾಜಿ ನಾಯಕ ಎಂಎಸ್ ಧೋನಿ ಕ್ರೀಸ್‌ಗೆ ಬರುತ್ತಿದ್ದಂತೆಯೇ ಕ್ರೀಡಾಂಗಣದಲ್ಲಿ ನೆರೆದಿದ್ದ ಪ್ರೇಕ್ಷಕರ ಚೀರಾಟ ದುಪ್ಪಟ್ಟಾಗಿತ್ತು. ಇನ್ನಿಂಗ್ಸ್‌ನ ಕೊನೆಯ ಎಸೆತ ಎದುರಿಸಿದ ಧೋನಿ ಬೌಂಡರಿ ಮೂಲಕ ಮುಗಿಸಿದರು.
ಬೌಲಿಂಗ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಮ್ಯಾಟ್ ಹೆನ್ರಿ 4 ಓವರ್‌ಗಳಲ್ಲಿ 28 ರನ್ ನೀಡಿ 1 ವಿಕೆಟ್ ಪಡೆದರೆ, ಮೊಹ್ಸಿನ್ ಖಾನ್ ಮತ್ತು ಯಶ್ ಠಾಕೂರ್ ತಲಾ ಒಂದೊಂದು ವಿಕೆಟ್ ಪಡೆದರೂ ಹೆಚ್ಚಿನ ರನ್ ಬಿಟ್ಟುಕೊಟ್ಟರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications