ಭಾನುವಾರ, ಮೇ 12ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 61ನೇ ಪಂದ್ಯದಲ್ಲಿ ಪ್ರವಾಸಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಈ ಮೂಲಕ ರುತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್ 2024ರಲ್ಲಿ ತನ್ನ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಕೊನೆಯ ಪಂದ್ಯದಲ್ಲಿ ಆರ್‌ಸಿಬಿ ತಂಡವನ್ನು ಬೆಂಗಳೂರಿನಲ್ಲಿ ಎದುರಿಸಲಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ ರಿಯಾನ್ ಪರಾಗ್ ಅವರ ಅಮೋಘ ಆಟದಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 141 ರನ್ ಗಳಿಸಿತ್ತು.
142 ರನ್‌ಗಳ ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ರುತುರಾಜ್ ಗಾಯಕ್ವಾಡ್ ಅವರ ನಿರ್ಣಾಯಕ ಪ್ರದರ್ಶನದ ನೆರವಿನಿಂದ 18.2 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 145 ರನ್ ಗಳಿಸಿ ಗೆಲುವಿನ ಗಡಿ ತಲುಪಿತು.
ಚೆನ್ನೈ ಸೂಪರ್ ಕಿಂಗ್ಸ್ ತಂಡ ಬ್ಯಾಟಿಂಗ್ ಆರಂಭಿಸಿದ ರುತುರಾಜ್ ಗಾಯಕ್ವಾಡ್ ಮತ್ತು ರಚಿನ್ ರವೀಂದ್ರ ಉತ್ತಮ ಆರಂಭ ಒದಗಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 3.4 ಓವರ್‌ಗಳಲ್ಲಿ 32 ರನ್‌ಗಳ ಜೊತೆಯಾಟ ನೀಡಿತು. ಈ ವೇಳೆ 18 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಮೂಲಕ 27 ರನ್ ಗಳಿಸಿ ಔಟಾದರು.

ನಂತರ ಬಂದ ಡ್ಯಾರಿಲ್ ಮಿಚೆಲ್ ಕೂಡ ಉತ್ತಮ ಸಾಥ್ ನೀಡಿದರು ಮತ್ತು 13 ಎಸೆತಗಳಲ್ಲಿ 4 ಬೌಂಡರಿ ಸಮೇತ 22 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಮೊಯಿನ ಅಲಿ 10 ರನ್ ಗಳಿಸಿದರೆ, ಶಿವಂ ದುಬೆ 11 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 18 ರನ್ ಬಾರಿಸಿದರು.
ರವೀಂದ್ರ ಜಡೇಜಾ 5 ರನ್ ಗಳಿಸಿದ್ದಾಗ ಫೀಲ್ಡಿಂಗ್‌ಗೆ ಅಡ್ಡಿಪಡಿಸಿದ್ದಕ್ಕಾಗಿ ಔಟ್ ಆದರು. ಇನ್ನು ನಾಯಕ ರುತುರಾಜ್ ಗಾಯಕ್ವಾಡ್ 41 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ಸಹಾಯದಿಂದ ಅಜೇಯ 42 ರನ್ ಬಾರಿಸಿದರೆ, ಸಮೀರ್ ರಿಜ್ವಿ 8 ಎಸೆತಗಳಲ್ಲಿ 3 ಬೌಂಡರಿ ಮೂಲಕ ಅಜೇಯ 15 ರನ್ ಗಳಿಸಿ ತಂಡವನ್ನು ಗೆಲ್ಲಿಸಿದರು.
ಬೌಲಿಂಗ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ 4 ಓವರ್‌ಗಳಲ್ಲಿ 35 ರನ್ ನೀಡಿ 2 ವಿಕೆಟ್ ಕಬಳಿಸಿದರೆ, ನಾಂದ್ರೆ ಬರ್ಗರ್ ಮತ್ತು ಯುಜ್ವೇಂದ್ರ ಚಹಾಲ್ ತಲಾ ಒಂದೊಂದು ವಿಕೆಟ್ ಪಡೆದರು.

ಇದಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ತಂಡ ಬ್ಯಾಟಿಂಗ್ ಆರಂಭಿಸಿದ ಜೋಸ್ ಬಟ್ಲರ್ ಮತ್ತು ಯಶಸ್ವಿ ಜೈಸ್ವಾಲ್ ದೊಡ್ಡ ಆರಂಭ ನೀಡಲು ಪ್ರಯತ್ನಿಸಿದರೂ, ಅದನ್ನು ಮುಂದುವರೆಸಲು ಸಾಧ್ಯವಾಗಲಿಲ್ಲ. ಈ ಜೋಡಿ ಮೊದಲ ವಿಕೆಟ್‌ಗೆ 6.2 ಓವರ್‌ಗಳಲ್ಲಿ 43 ರನ್‌ಗಳ ಜೊತೆಯಾಟ ನೀಡಿದರು.
ಈ ವೇಳೆ ಯಶಸ್ವಿ ಜೈಸ್ವಾಲ್ 21 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 24 ರನ್ ಗಳಿಸಿ ಔಟಾದರೆ, ಜೋಸ್ ಬಟ್ಲರ್ 25 ಎಸೆತಗಳಲ್ಲಿ 2 ಬೌಂಡರಿ ಮೂಲಕ 21 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಂತರ ಬಂದ ನಾಯಕ ಸಂಜು ಸ್ಯಾಮ್ಸನ್ 19 ಎಸೆತಗಳಲ್ಲಿ 15 ರನ್ ಗಳಿಸಿ ಪೆವಿಲಿಯನ್ ಸೇರಿದರು.

ಕಡಿಮೆ ಮೊತ್ತಕ್ಕೆ ಕುಸಿಯುತ್ತಿದ್ದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ರಿಯಾನ್ ಪರಾಗ್ ನೆರವಾದರು. ರಿಯಾನ್ ಪರಾಗ್ 35 ಎಸೆತಗಳನ್ನು ಎದುರಿಸಿ 1 ಬೌಂಡರಿ ಹಾಗೂ 3 ಸಿಕ್ಸರ್ ಸಮೇತ ಅಜೇಯ 47 ರನ್ ಬಾರಿಸಿದರು. ಇನ್ನು ಧ್ರುವ್ ಜುರೆಲ್ 18 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 28 ರನ್ ಗಳಿಸಿದರು.
ಇನ್ನು ಬೌಲಿಂಗ್‌ನಲ್ಲಿ ಸಿಎಸ್‌ಕೆ ತಂಡದ ಪರ ಸಿಮರ್ಜಿತ್ ಸಿಂಗ್ 4 ಓವರ್‌ಗಳಲ್ಲಿ 26 ರನ್ ನೀಡಿ 3 ವಿಕೆಟ್ ಪಡೆದರೆ, ತುಷಾರ್ ದೇಶಪಾಂಡೆ 4 ಓವರ್‌ಗಳಲ್ಲಿ 30 ರನ್ ನೀಡಿ 2 ವಿಕೆಟ್ ಕಬಳಿಸಿದರು.