ಬುಧವಾರ, ಏಪ್ರಿಲ್ 24ರಂದು ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 40ನೇ ಪಂದ್ಯದಲ್ಲಿ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಗುಜರಾತ್ ಟೈಟನ್ಸ್ ತಂಡದ ವಿರುದ್ಧ ಸವಾಲಿನ ಮೊತ್ತ ಪೇರಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಕ್ಷರ್ ಪಟೇಲ್ ಮತ್ತು ನಾಯಕ ರಿಷಭ್ ಪಂತ್ ಅವರ ಭರ್ಜರ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 224 ರನ್ ಗಳಿಸಿದ್ದು, ಗುಜರಾತ್ ಟೈಟನ್ಸ್ ತಂಡಕ್ಕೆ 225 ರನ್‌ಗಳ ಗುರಿ ನೀಡಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಪೃಥ್ವಿ ಶಾ ಮತ್ತು ಜೇಕ್ ಫ್ರೇಸರ್-ಮೆಕ್‌ಗುರ್ಕ್ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 3.2 ಓವರ್‌ಗಳಲ್ಲಿ 35 ರನ್‌ಗಳ ಜೊತೆಯಾಟ ನೀಡಿದರು.
ಈ ವೇಳೆ ಪೃಥ್ವಿ ಶಾ 11 ರನ್ ಮತ್ತು ಜೇಕ್ ಫ್ರೇಸರ್-ಮೆಕ್‌ಗುರ್ಕ್ 14 ಎಸೆತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಮೇತ 23 ರನ್ ಗಳಿಸಿ ಒಬ್ಬರ ಹಿಂದೆ ಒಬ್ಬರು ಔಟಾದರು. ನಂತರ ಬಂದ ಶಾಯ್ ಹೋಪ್ ಕೇವಲ 5 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ಆಗ ಜೊತೆಗೂಡಿದ ಅಕ್ಷರ್ ಪಟೇಲ್ ಮತ್ತು ನಾಯಕ ರಿಷಭ್ ಪಂತ್ ಕುಸಿದಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಸರೆಯಾದರು ಹಾಗೂ ಗುಜರಾತ್ ಟೈಟನ್ಸ್ ಬೌಲರ್‌ಗಳಿಗೆ ಬೆವರಿಳಿಸಿದರು. ಬೌಂಡರಿ ಮತ್ತು ಸಿಕ್ಸರ್‌ಗಳ ಮೂಲಕ ತಂಡದ ಸ್ಕೋರ್ ಬೋರ್ಡ್ ಹೆಚ್ಚಿಸಿದರು. ಈ ಜೋಡಿ 4ನೇ ವಿಕೆಟ್‌ಗೆ 113 ರನ್‌ಗಳ ಜೊತೆಯಾಟ ನಿರ್ಮಿಸಿತು.

ಆಲ್‌ರೌಂಡರ್ ಅಕ್ಷರ್ ಪಟೇಲ್ 43 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಸಮೇತ 66 ರನ್ ಗಳಿಸಿದರು ಮತ್ತು ಐಪಿಎಲ್‌ನಲ್ಲಿ ಎರಡನೇ ಅರ್ಧಶತಕ ಬಾರಿಸಿದರು.
ನಾಯಕ ರಿಷಭ್ ಪಂತ್ ತಮ್ಮ ಹಳೆಯ ಟಿ20 ಆಟಕ್ಕೆ ಮರಳಿದರು. ಕೇವಲ 43 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ ಅಜೇಯ 88 ರನ್ ಸಿಡಿಸಿದರು. ಇನ್ನು ಕೊನೆಯಲ್ಲಿ ಟ್ರಿಸ್ಟಾನ್ ಸ್ಟಬ್ಸ್ 7 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಮೇತ ಅಜೇಯ 26 ರನ್ ಗಳಿಸಿ ಬೃಹತ್ ಮೊತ್ತ ಕಲೆಹಾಕಲು ನೆರವಾದರು.
ಬೌಲಿಂಗ್‌ನಲ್ಲಿ ಗುಜರಾತ್ ಟೈಟನ್ಸ್ ಪರ ಸಂದೀಪ್ ವಾರಿಯರ್ 3 ಓವರ್‌ಗಳಲ್ಲಿ 15 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ನೂರ್ ಅಹ್ಮದ್ 3 ಓವರ್‌ಗಳಲ್ಲಿ 36 ರನ್ ನೀಡಿ ಒಂದು ವಿಕೆಟ್ ಪಡೆದರು. ಇನ್ನು ಮೋಹಿತ್ ಶರ್ಮಾ ತಮ್ಮ 4 ಓವರ್‌ಗಳ ಕೋಟಾದಲ್ಲಿ 73 ರನ್‌ಗಳನ್ನು ಬಿಟ್ಟುಕೊಡುವ ಮೂಲಕ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ನೀಡಿದ ಬೌಲರ್ ಎನಿಸಿದರು.