ಭಾನುವಾರ, ಅಕ್ಟೋಬರ್ 15ರಂದು ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 13ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡದ ವಿರುದ್ಧ ಅಫ್ಘಾನಿಸ್ತಾನ ತಂಡ ಸವಾಲಿನ ಮೊತ್ತ ಕಲೆಹಾಕಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ ರಹಮಾನುಲ್ಲಾ ಗುರ್ಬಾಜ್ ಮತ್ತು ಇಕ್ರಮ್ ಅಲಿಖಿಲ್ ಅವರ ಅರ್ಧಶತಕದ ನೆರವಿನಿಂದ 49.5 ಓವರ್‌ಗಳಲ್ಲಿ 284 ರನ್‌ಗಳಿಗೆ ಆಲೌಟ್ ಆಗಿದ್ದು, ಇಂಗ್ಲೆಂಡ್ ತಂಡಕ್ಕೆ 285 ರನ್‌ಗಳ ಗುರಿ ನೀಡಲಾಗಿದೆ.

ಅಫ್ಘಾನಿಸ್ತಾನದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ರಹಮಾನುಲ್ಲಾ ಗುರ್ಬಾಜ್ ಮತ್ತು ಇಬ್ರಾಹಿಂ ಝದ್ರಾನ್ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 16.4 ಓವರ್‌ಗಳಲ್ಲಿ 114 ರನ್‌ಗಳ ಜೊತೆಯಾಟ ನೀಡಿತು.
48 ಎಸೆತಗಳಲ್ಲಿ 3 ಬೌಂಡರಿ ಸಮೇತ 28 ರನ್ ಗಳಿಸಿದ್ದ ಇಬ್ರಾಹಿಂ ಝದ್ರಾನ್ ಆದಿಲ್ ರಶೀದ್‌ಗೆ ವಿಕೆಟ್ ಒಪ್ಪಿಸಿದರು. ನಂತರ ಬಂದ ರಹಮತ್ ಶಾ ಕೂಡ ಕೇವಲ 3 ರನ್ ಗಳಿಸಿ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿದರು.
ಇನ್ನು ಆರಂಭಿಕ ರಹಮಾನುಲ್ಲಾ ಗುರ್ಬಾಜ್ ಅವರು 57 ಎಸೆತಗಳಲ್ಲಿ 8 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಮೂಲಕ 80 ರನ್ ಬಾರಿಸಿದರು. ನಾಯಕ ಹಶ್ಮತುಲ್ಲಾ ಶಾಹಿದಿ 14 ರನ್ ಗಳಿಸಿದರೆ, ಅಜ್ಮತುಲ್ಲಾ ಒಮರ್ಜಾಯ್ ರನ್ ಗಳಿಸಿದರು.

ಮಧ್ಯಮ ಕ್ರಮಾಂಕದ ಬ್ಯಾಟರ್ ಇಕ್ರಮ್ ಅಲಿಖಿಲ್ 66 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 58 ರನ್ ಗಳಿಸಿದರು. ಇನ್ನು ಮೊಹಮ್ಮದ್ ನಬಿ ಕೇವಲ 9 ರನ್‌ಗೆ ಔಟಾದರು.
ಕೊನೆಯಲ್ಲಿ ರಶೀದ್ ಖಾನ್ 22 ಎಸೆತಗಳಲ್ಲಿ 23 ರನ್, ಮುಜೀಬ್-ಉರ್-ರೆಹಮಾನ್ 16 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಸಹಾಯದಿಂದ 28 ರನ್ ಬಾರಿಸಿದರು. ಉಳಿದಂತೆ ನವೀನ್ ಉಲ್ ಹಕ್ 5 ರನ್ ಮತ್ತು ಫಜಲ್ಹಕ್ ಫಾರೂಕಿ 2 ರನ್ ಗಳಿಸಿ ತಂಡದ ಮೊತ್ತ 280ರ ಗಡಿ ದಾಟಿಸಿದರು.
ಬೌಲಿಂಗ್‌ನಲ್ಲಿ ಇಂಗ್ಲೆಂಡ್ ತಂಡದ ಪರ ಆದಿಲ್ ರಶೀದ್ 10 ಓವರ್‌ಗಳಲ್ಲಿ 42 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ಮಾರ್ಕ್ ವುಡ್ 9 ಓವರ್‌ಗಳಲ್ಲಿ 50 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ರೀಸ್ ಟೋಪ್ಲೆ, ಲಿಯಾಮ್ ಲಿವಿಂಗ್‌ಸ್ಟೋನ್ ಮತ್ತು ಜೋ ರೂಟ್ ತಲಾ ಒಂದೊಂದು ವಿಕೆಟ್ ಪಡೆದರು.