ಗುರುವಾರ, ನವೆಂಬರ್ 16ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 2ನೇ ಸೆಮಿಫೈನಲ್ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ತಂಡಕ್ಕೆ ಚೋಕರ್ಸ್ ಕುಖ್ಯಾತಿಯ ದಕ್ಷಿಣ ಆಫ್ರಿಕಾ ತಂಡವು ಸವಾಲೊಡ್ಡಲಿದೆ.
ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡರು. ಹೀಗಾಗಿ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡ ಮೊದಲು ಫೀಲ್ಡಿಂಗ್ ಮಾಡಲಿದೆ.

ಟೆಂಬಾ ಬಾವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡವು ಆಡಿದ ಒಂಬತ್ತು ಲೀಗ್ ಪಂದ್ಯಗಳಲ್ಲಿ ಒಟ್ಟು ಏಳು ಗೆಲುವುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನ ಗಳಿಸಿ ಉಪಾಂತ್ಯಕ್ಕೆ ಪ್ರವೇಶ ಪಡೆಯಿತು.
ಅಲ್ಲದೆ, ದಕ್ಷಿಣ ಆಫ್ರಿಕಾ ತಂಡಕ್ಕೆ ಚೋಕರ್ಸ್ ಎಂಬ ಹಣೆಪಟ್ಟಿಯೊಂದಿಗೆ ಕಣಕ್ಕಿಳಿಯಲಿದೆ. ಈವರೆಗೆ ಐದು ಬಾರಿ ಸೆಮಿಫೈನಲ್ ತಲುಪಿದ್ದು, ಒಮ್ಮೆಯೂ ಫೈನಲ್‌ಗೆ ಪ್ರವೇಶ ಪಡೆದಿಲ್ಲ. ಈ ಪಂದ್ಯದಲ್ಲಿ ಗೆದ್ದು ಆ ಹಣೆಪಟ್ಟಿಯನ್ನು ಕಳಚಲು ಎದುರು ನೋಡುತ್ತಿದೆ.

ಮತ್ತೊಂದೆಡೆ, ಆಸ್ಟ್ರೇಲಿಯಾ ತಂಡವು ಲೀಗ್ ಹಂತದಲ್ಲಿ ಆಡಿದ 9 ಪಂದ್ಯಗಳಿಂದ 7 ಗೆಲುವು 2 ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿತು. ವಿಶ್ವಕಪ್ ಇತಿಹಾಸದಲ್ಲಿ ಐದು ಬಾರಿ ಚಾಂಪಿಯನ್ ಆಗಿರುವ ಆಸೀಸ್ ಪಡೆ, 8ನೇ ಬಾರಿಗೆ ಫೈನಲ್ ತಲುಪಲು ಹೋರಾಟ ನಡೆಸಲಿದೆ.
ಈ ಪಂದ್ಯದಲ್ಲಿ ಗೆಲ್ಲುವ ತಂಡವು ಭಾನುವಾರ, ನವೆಂಬರ್ 19ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ವಿಶ್ವಕಪ್‌ನ ಫೈನಲ್ ಹಣಾಹಣಿಯಲ್ಲಿ ಆತಿಥೇಯ ಭಾರತ ತಂಡದ ವಿರುದ್ಧ ಸೆಣಸಲಿದೆ.
ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಾಸ್ಸೀ ವ್ಯಾನ್ ಡೆರ್ ಡುಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಜೆರಾಲ್ಡ್ ಕೋಟ್ಜಿ, ಕಗಿಸೊ ರಬಾಡ, ತಬ್ರೈಜ್ ಶಮ್ಸಿ.
ಆಸ್ಟ್ರೇಲಿಯಾ ತಂಡ: ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್.