IND vs AFG: ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ; ರೋಹಿತ್-ಕೊಹ್ಲಿ ವಾಪಸ್!
ಇದೇ ಜನವರಿ 11ರಿಂದ ಆರಂಭವಾಗಲಿರುವ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ 16 ಸದಸ್ಯರ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾನುವಾರ, ಜನವರಿ 7ರಂದು ಪ್ರಕಟಿಸಿದೆ.
ಮುಂಬೈನಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ನೇತೃತ್ವದಲ್ಲಿ ಸುದೀರ್ಘ ಸಭೆ ನಡೆಸಿದ ನಂತರ, ಭಾರತ ಟಿ20 ತಂಡವನ್ನು ಪ್ರಕಟಿಸಲಾಗಿದ್ದು, ಇದು ಮುಂಬರುವ 2024ರ ಟಿ20 ವಿಶ್ವಕಪ್ ಮೇಲೆ ಬೆಳಕು ಚೆಲ್ಲಲಿದೆ.

ಗಮನಾರ್ಹವಾಗಿ, 14 ತಿಂಗಳುಗಳ ನಂತರ ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ಟಿ20 ತಂಡಕ್ಕೆ ಪುನರಾಗಮನ ಮಾಡಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಸರಣಿಗೆ ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ.
ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಬ್ಬರೂ ಆಟಗಾರರು 2022ರ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವು ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತ ನಂತರ ಟಿ20 ಪಂದ್ಯಗಳನ್ನು ಆಡಿರಲಿಲ್ಲ.
ಇದೇ ವೇಳೆ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಅವರಿಗೆ ಅಫ್ಘಾನಿಸ್ತಾನ ವಿರುದ್ಧದ ಸರಣಿಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ತಂಡದಲ್ಲಿ ಯುವ ವೇಗಿಗಳಾಗಿ ಅರ್ಷದೀಪ್ ಸಿಂಗ್, ಅವೇಶ್ ಖಾನ್ ಮತ್ತು ಮುಖೇಶ್ ಕುಮಾರ್ ಸೇರ್ಪಡೆಗೊಂಡಿದ್ದಾರೆ.
ಜಿತೇಶ್ ಶರ್ಮಾ ಮತ್ತು ಸಂಜು ಸ್ಯಾಮ್ಸನ್ ಅವರು ಬಿಸಿಸಿಐ ಪ್ರಕಟಿಸಿದ ಭಾರತ ತಂಡದಲ್ಲಿ ವಿಕೆಟ್ ಕೀಪರ್‌ಗಳಾಗಿದ್ದು, ಅನುಭವಿ ಕೆಎಲ್ ರಾಹುಲ್‌ರನ್ನು ಹೊರಗಿಡಲಾಗಿದೆ.
ಗಾಯಾಳುಗಳಾದ ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್ ಮತ್ತು ರುತುರಾಜ್ ಗಾಯಕ್ವಾಡ್ ಅವರನ್ನು ಕೂಡ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಿಂದ ಕೈಬಿಡಲಾಗಿದೆ. ರುತುರಾಜ್ ಗಾಯಕ್ವಾಡ್ ಅವರು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಅರ್ಧದಷ್ಟು ಪಂದ್ಯಗಳನ್ನು ಕಳೆದುಕೊಳ್ಳಬಹುದು ಎನ್ನಲಾಗಿದೆ.
ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಶ್‌ದೀಪ್ ಸಿಂಗ್.
ಭಾರತ vs ಅಫ್ಘಾನಿಸ್ತಾನ ಟಿ20 ಸರಣಿಯ ವೇಳಾಪಟ್ಟಿ
ಜನವರಿ 11: ಮೊದಲ ಟಿ20 ಪಂದ್ಯ - ಪಂಜಾಬ್ ಕ್ರಿಕೆಟ್ ಸಂಸ್ಥೆ ಐಎಸ್ ಬಿಂದ್ರಾ ಸ್ಟೇಡಿಯಂ, ಮೊಹಾಲಿ
ಜನವರಿ 14: ಎರಡನೇ ಟಿ20 ಪಂದ್ಯ - ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂ, ಇಂದೋರ್
ಜನವರಿ 17: ಮೂರನೇ ಟಿ20 ಪಂದ್ಯ - ಎಂ ಚಿನ್ನಸ್ವಾಮಿ ಸ್ಟೇಡಿಯಂ, ಬೆಂಗಳೂರು
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications