IND vs AUS 3rd ODI: 5 ಪಂದ್ಯಗಳ ಸೋಲಿನ ಬಳಿಕ ಗೆಲುವಿನ ಹಳಿಗೆ ಮರಳಿದ ಆಸ್ಟ್ರೇಲಿಯಾ; ಭಾರತಕ್ಕೆ ಏಕದಿನ ಸರಣಿ
ಬುಧವಾರ, ಸೆಪ್ಟೆಂಬರ್ 27ರಂದು ರಾಜ್‌ಕೋಟ್‌ನಲ್ಲಿ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಆತಿಥೇಯ ಭಾರತ ತಂಡದ ವಿರುದ್ಧ ಪ್ರವಾಸಿ ಆಸ್ಟ್ರೇಲಿಯಾ ತಂಡವು ಭರ್ಜರಿ ಗೆಲುವು ದಾಖಲಿಸುವ ಮೂಲಕ ಗೆಲುವಿನ ಹಳಿಗೆ ಮರಳಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ್ದ ಆಸ್ಟ್ರೇಲಿಯಾ ತಂಡ ನಾಲ್ವರು ಬ್ಯಾಟ್ಸ್‌ಮನ್‌ಗಳ ಭರ್ಜರಿ ಅರ್ಧಶತಕಗಳ ನೆರವಿನಿಂದ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 352 ರನ್‌ಗಳನ್ನು ಕಲೆಹಾಕಿತ್ತು.

353 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಭಾರತ ತಂಡ 49.4 ಓವರ್‌ಗಳಲ್ಲಿ 286 ರನ್‌ಗಳಿಗೆ ಸರ್ವಪತನ ಕಂಡಿತು. ಈ ಮೂಲಕ 66 ರನ್‌ಗಳ ಸೋಲು ಕಂಡಿತು. ಆದಾಗ್ಯೂ, ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ ತಂಡ 2-1 ಅಂತರದಲ್ಲಿ ವಶಪಡಿಸಿಕೊಂಡಿದೆ.
ಈ ಮೊದಲು ದಕ್ಷಿಣ ಆಫ್ರಿಕಾ ವಿರುದ್ಧ ಸತತ 3 ಮತ್ತು ಭಾರತ ವಿರುದ್ಧ ಸತತ 2 ಪಂದ್ಯಗಳ ಸೋಲಿನ ಬಳಿಕ ಆಸ್ಟ್ರೇಲಿಯಾ ತಂಡ ಗೆಲುವು ಸಾಧಿಸಿದೆ. ಈ ಮೂಲಕ ವಿಶ್ವಕಪ್‌ಗೆ ಗೆಲುವಿನೊಂದಿಗೆ ಸಾಗುತ್ತಿದೆ.
ಇನ್ನು 353 ರನ್‌ಗಳ ಚೇಸಿಂಗ್‌ನಲ್ಲಿ ಭಾರತ ತಂಡ ಉತ್ತಮ ಆರಂಭ ಪಡೆದರೂ, ಅದನ್ನು ಇನ್ನಿಂಗ್ಸ್‌ನುದ್ದಕ್ಕೂ ಮುಂದುವರೆಸಲಾಗಲಿಲ್ಲ. ಆರಂಭಿಕರಾದ ನಾಯಕ ರೋಹಿತ್ ಶರ್ಮಾ ಮತ್ತು ವಾಷಿಂಗ್ಟನ್ ಸುಂದರ್ ಮೊದಲ ವಿಕೆಟ್‌ಗೆ 10.5 ಓವರ್‌ಗಳಲ್ಲಿ 74 ರನ್‌ಗಳ ಜೊತೆಯಾಟ ನೀಡಿದರು.
30 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 18 ರನ್ ಗಳಿಸಿದ್ದ ವಾಷಿಂಗ್ಟನ್ ಸುಂದರ್ ಔಟಾದರು. ನಂತರ ಬಂದ ವಿರಾಟ್ ಕೊಹ್ಲಿ ನಿಧಾನಗತಿಯಲ್ಲಿ ಬ್ಯಾಟಿಂಗ್ ಆರಂಭಿಸಿ, ನಂತರ ಆಕ್ರಮಣಕಾರಿ ಆಟಕ್ಕಿಳಿದರು.
ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಎರಡನೇ ವಿಕೆಟ್‌ಗೆ 70 ರನ್‌ಗಳ ಜೊತೆಯಾಟ ನಿರ್ಮಿಸಿದರು. ಈ ವೇಳೆ 57 ಎಸೆತಗಳಲ್ಲಿ 5 ಬೌಂಡರಿ ಮತ್ತು 6 ಭರ್ಜರಿ ಸಿಕ್ಸರ್ ಸಮೇತ 81 ರನ್ ಗಳಿಸಿ ಆಡುತ್ತಿದ್ದ ರೋಹಿತ್ ಶರ್ಮಾ ಗ್ಲೆನ್ ಮ್ಯಾಕ್ಸ್‌ವೆಲ್‌ಗೆ ವಿಕೆಟ್ ಒಪ್ಪಿಸಿದರು.
ಆ ಬಳಿಕ 61 ಎಸೆತಗಳನ್ನೆದುರಿಸಿ 5 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 56 ರನ್ ಗಳಿಸಿ ಆಡುತ್ತಿದ್ದ ವಿರಾಟ್ ಕೊಹ್ಲಿ ಕೂಡ ಗ್ಲೆನ್ ಮ್ಯಾಕ್ಸ್‌ವೆಲ್ ಬೌಲಿಂಗ್‌ನಲ್ಲಿ ಔಟಾದರು.
ಈ ವೇಳೆ ಜೊತೆಯಾದ ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ನಿಧಾನಗತಿ ಬ್ಯಾಟಿಂಗ್ ಮೂಲಕ ಇನ್ನಿಂಗ್ಸ್ ಕಟ್ಟಲು ಪ್ರಯತ್ನಿಸಿದರು. 30 ಎಸೆತಗಳಲ್ಲಿ 2 ಬೌಂಡರಿ ಸಮೇತ 26 ರನ್ ಗಳಿಸಿದ್ದಾಗ ಮಿಚೆಲ್ ಸ್ಟಾರ್ಕ್ ಪೆವಿಲಿಯನ್ ದಾರಿ ತೋರಿಸಿದರು.
ನಂತರ ಬಂದ ಸೂರ್ಯಕುಮಾರ್ ಯಾದವ್ ಹೆಚ್ಚು ಹೊತ್ತು ನಿಲ್ಲದೆ 8 ರನ್ ಗಳಿಸಿ ಔಟಾದರು. ಇವರು ಹಿಂದೆಯೇ 43 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 48 ರನ್ ಬಾರಿಸಿ ಆಡುತ್ತಿದ್ದ ಶ್ರೇಯಸ್ ಅಯ್ಯರ್ ಕೂಡ ವಿಕೆಟ್ ಒಪ್ಪಿಸಿದರು.
ಕೊನೆಯಲ್ಲಿ ಆಲ್‌ರೌಂಡರ್ ರವೀಂದ್ರ ಜಡೇಜಾ 36 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 35 ರನ್ ಗಳಿಸಿದರು. ಉಳಿದ ಯಾವ ಬ್ಯಾಟರ್‌ಗಳೂ ಎರಡಂಕಿ ಮೊತ್ತ ದಾಟಲಿಲ್ಲ.
ಇನ್ನು ಆಸ್ಟ್ರೇಲಿಯಾ ತಂಡದ ಪರ ಬೌಲಿಂಗ್‌ನಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ 10 ಓವರ್‌ಗಳಲ್ಲಿ 40 ರನ್ ನೀಡಿ 4 ವಿಕೆಟ್ ಕಬಳಿಸಿ ಗೆಲುವಿನ ರೂವಾರಿಯಾದರು. ಉಳಿದಂತೆ ಜೋಶ್ ಹೇಝಲ್‌ವುಡ್ 2 ವಿಕೆಟ್ ಪಡೆದರೆ, ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್, ಕ್ಯಾಮೆರಾನ್ ಗ್ರೀನ್ ಮತ್ತು ತನ್ವೀರ್ ಸಂಘ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ಅಂತಿಮವಾಗಿ ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ, ಭಾರತದ ಶುಭ್ಮನ್ ಗಿಲ್ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications