ಏಷ್ಯಾಕಪ್ ಮುಗಿಯುವ ಮುನ್ನವೇ ಭಾರತ vs ಆಸ್ಟ್ರೇಲಿಯಾ ಟಿ20 ಸರಣಿಯ ತಂಡ ಘೋಷಣೆ; ವೇಳಾಪಟ್ಟಿ ಇಲ್ಲಿದೆ

ಸದ್ಯ ಟೀಮ್ ಇಂಡಿಯಾ ಯುಎಇಯಲ್ಲಿ ನಡೆಯುತ್ತಿರುವ ಏಷ್ಯಾಕಪ್ ಟೂರ್ನಿಯಲ್ಲಿ ನಿರತವಾಗಿದೆ. ಟೂರ್ನಿಯಲ್ಲಿನ ತನ್ನ ಚೊಚ್ಚಲ ಪಂದ್ಯದಲ್ಲಿಯೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 5 ವಿಕೆಟ್‍ಗಳ ರೋಚಕ ಜಯವನ್ನು ದಾಖಲಿಸಿರುವ ಟೀಮ್ ಇಂಡಿಯಾ ಮುಂದಿನ ಸುತ್ತಿಗೆ ಅರ್ಹತೆ ಪಡೆದುಕೊಳ್ಳುವ ಹಾದಿಯನ್ನು ಸುಲಭ ಮಾಡಿಕೊಂಡಿದೆ.
ಹೀಗೆ ಪಾಕಿಸ್ತಾನದ ವಿರುದ್ಧ ಗೆದ್ದಿರುವ ಟೀಮ್ ಇಂಡಿಯಾ ಆಗಸ್ಟ್ 31ರಂದು ನಡೆಯಲಿರುವ ಪಂದ್ಯದಲ್ಲಿ ಹಾಂಗ್ ಕಾಂಗ್ ವಿರುದ್ಧ ಸೆಣಸಾಟ ನಡೆಸಲಿದೆ. ಇನ್ನು ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯ ಸೆಪ್ಟೆಂಬರ್ 11ರಂದು ಜರುಗಲಿದ್ದು, ಈ ಟೂರ್ನಿ ಮುಕ್ತಾಯವಾದ ತಿಂಗಳ ಬಳಿಕ ಅಕ್ಟೋಬರ್ 16ರಿಂದ ಬಹುನಿರೀಕ್ಷಿತ ಐಸಿಸಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆಸ್ಟ್ರೇಲಿಯಾ ನೆಲದಲ್ಲಿ ಶುರುವಾಗಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳ ವಿರುದ್ಧ ಟಿ ಟ್ವೆಂಟಿ ಸರಣಿಯನ್ನು ಆಡಲಿದ್ದು, ಸದ್ಯ ಮೊದಲಿಗೆ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಕುರಿತಾದ ಸುದ್ದಿಯೊಂದು ಇದೀಗ ಹೊರಬಿದ್ದಿದೆ.
ಕ್ರೀಡಾ ವೆಬ್ ತಾಣವಾದ ಇನ್ ಸೈಡ್ ಸ್ಪೋರ್ಟ್ಸ್ ಜತೆ ಬಿಸಿಸಿಐನ ಹಿರಿಯ ಅಧಿಕಾರಿಯೋರ್ವರು ಮಾತನಾಡಿದ್ದು, ಆಸ್ಟ್ರೇಲಿಯಾ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಟೀಮ್ ಇಂಡಿಯಾ ಯಾವಾಗ ಪ್ರಕಟಗೊಳ್ಳಲಿದೆ ಎಂಬ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆಸ್ಟ್ರೇಲಿಯಾ ಭಾರತ ಪ್ರವಾಸವನ್ನು ಕೈಗೊಳ್ಳಲಿದ್ದು, ಸೆಪ್ಟೆಂಬರ್ 20ರಿಂದ ಈ ಸರಣಿ ಆರಂಭಗೊಳ್ಳಲಿದೆ. ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೂ ಮುನ್ನ ನಡೆಯಲಿರುವ ಈ ಟಿ ಟ್ವೆಂಟಿ ಸರಣಿ ಬೃಹತ್ ಟೂರ್ನಿಗಾಗಿ ಸಿದ್ಧತೆ ನಡೆಸಿಕೊಳ್ಳಲು ಸಿಗುವ ಉತ್ತಮ ವೇದಿಕೆಯಾಗಿದ್ದು, ಈ ಪ್ರಮುಖ ಸರಣಿಯ ವೇಳಾಪಟ್ಟಿ ಹಾಗೂ ಸರಣಿಗೆ ಟೀಮ್ ಇಂಡಿಯಾ ಯಾವಾಗ ಪ್ರಕಟವಾಗಲಿದೆ ಎಂಬುದರ ಕುರಿತಾದ ಮಾಹಿತಿ ಕೆಳಕಂಡಂತಿದೆ.

ಏಷ್ಯಾಕಪ್ ಮುಗಿಯುವ ಮುನ್ನವೇ ಪ್ರಕಟಗೊಳ್ಳಲಿದೆ ಟೀಮ್ ಇಂಡಿಯಾ
ಪ್ರಸ್ತುತ ನಡೆಯುತ್ತಿರುವ ಏಷ್ಯಾಕಪ್ ಟೂರ್ನಿ ಮುಕ್ತಾಯಗೊಳ್ಳುವ ಮುನ್ನವೇ ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಲಿದೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೋರ್ವರು ಮಾಹಿತಿ ನೀಡಿದ್ದಾರೆ. ಈ ಸರಣಿಗೆ 15 ಆಟಗಾರರ ತಂಡದ ಬದಲಾಗಿ 17 ಅಥವಾ 18 ಆಟಗಾರರ ತಂಡವನ್ನು ಬಿಸಿಸಿಐ ಪ್ರಕಟಿಸಲಿದೆ ಹಾಗೂ ಈ ಸರಣಿಗೆ ಪ್ರಕಟವಾಗುವ ತಂಡವೇ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೂ ಆಯ್ಕೆಯಾಗುವ ಸಾಧ್ಯತೆಗಳು ಬಹುತೇಕ ಹೆಚ್ಚಿವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇನ್ನು ಮುಂದಿನ ವಾರವೇ ಆಸ್ಟ್ರೇಲಿಯಾ ವಿರುದ್ಧದ ಈ ಸರಣಿಗೆ ಭಾರತ ತಂಡ ಪ್ರಕಟವಾಗಲಿದೆ ಎಂದೂ ಸಹ ಅವರು ಮಾಹಿತಿ ನೀಡಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯ ವೇಳಾಪಟ್ಟಿ
• 20 ಸೆಪ್ಟೆಂಬರ್ 2022, ಪ್ರಥಮ ಟಿ ಟ್ವೆಂಟಿ ಪಂದ್ಯ ಮೊಹಾಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ
• 23 ಸೆಪ್ಟೆಂಬರ್ 2022, ದ್ವಿತೀಯ ಟಿ ಟ್ವೆಂಟಿ ಪಂದ್ಯ ನಾಗಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆಯಲಿದೆ.
• 25 ಸೆಪ್ಟೆಂಬರ್ 2022, ತೃತೀಯ ಟಿ ಟ್ವೆಂಟಿ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಆಸ್ಟ್ರೇಲಿಯಾ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಈ ಆಟಗಾರರು ಬಹುತೇಕ ಖಚಿತ
ನಾಯಕ ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ದೀಪಕ್ ಹೂಡಾ, ಯುಜುವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್ ಹಾಗೂ ಅರ್ಷದೀಪ್ ಸಿಂಗ್ ಈ ಆಟಗಾರರು ಆಸ್ಟ್ರೇಲಿಯಾ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಪ್ರಕಟವಾಗುವ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಆಯ್ಕೆಗಾರರು ದಿನೇಶ್ ಕಾರ್ತಿಕ್ ಅವರನ್ನು ಪ್ರಮುಖ ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಿಕೊಂಡರೆ ರಿಷಭ್ ಪಂತ್ ಮೀಸಲು ವಿಕೆಟ್ ಕೀಪರ್ ಆಗಿ ಆಯ್ಕೆಯಾಗಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications