
ಗುರುವಾರ, ಮಾರ್ಚ್ 9ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪ್ರಾರಂಭವಾಗುವ ನಾಲ್ಕನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ.
ಕಳೆದ ವಾರ ಇಂದೋರ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಒಂಬತ್ತು ವಿಕೆಟ್‌ಗಳ ಸೋಲು ಕಂಡ ನಂತರವೂ, ಸರಣಿಯನ್ನು 2-1 ಅಂತರದಲ್ಲಿ ಭಾರತ ಮುನ್ನಡೆ ಗಳಿಸಿದೆ. ಮೂರನೇ ಪಂದ್ಯದ ಸೋಲಿನ ನಂತರ ಭಾರತ ತಂಡ ಪುಟಿದೇಳಲು ಎದುರು ನೋಡುತ್ತಿದೆ.
ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ಆದರೆ ಭಾರತದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯಕ್ಕೆ ಅರ್ಹತೆ ಪಡೆಯಬೇಕೆಂದರೆ, ಆಸ್ಟ್ರೇಲಿಯಾ ವಿರುದ್ಧ ಕೊನೆಯ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
ಕೊನೆಯ ಟೆಸ್ಟ್ ಪಂದ್ಯದಲ್ಲಿ ಗೆದ್ದ ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಪಡೆಯಿತು. ಗುರುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್‌ನಲ್ಲಿ ಭಾರತ ತಂಡವು ಗೆದ್ದು, ಫೈನಲ್ ಸ್ಥಾನವನ್ನು ಖಚಿತಪಡಿಸಿಕೊಳ್ಳಬೇಕಿದೆ.

ಇನ್ನು ಸರಣಿ ನಿರ್ಣಾಯಕ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಒಂದು ದೊಡ್ಡ ಬದಲಾವಣೆಗೆ ಕೈ ಹಾಕಲಿದೆ. ಇನ್‌ಫಾರ್ಮ್ ವೇಗದ ಬೌಲರ್ ಮೊಹಮ್ಮದ್ ಶಮಿ ಅವರನ್ನು ಆಡುವ 11ರ ಬಳಗಕ್ಕೆ ವಾಪಸ್ ತರಲಿದೆ.
ಇಂದೋರ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯಕ್ಕೆ ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಿ, ಅವರ ಬದಲಿಯಾಗಿ ಉಮೇಶ್ ಯಾದವ್‌ರನ್ನು ಆಯ್ಕೆ ಮಾಡಲಾಗಿತ್ತು. ಅನುಭವಿ ವೇಗಿ ಮೊಹಮ್ಮದ್ ಶಮಿ ಮೊದಲ 2 ಟೆಸ್ಟ್ ಪಂದ್ಯಗಳಲ್ಲಿ 14ರ ಅತ್ಯುತ್ತಮ ಸರಾಸರಿಯಲ್ಲಿ 7 ವಿಕೆಟ್ ಪಡೆದಿದ್ದಾರೆ.
ಈ ಸರಣಿಯ 3 ಟೆಸ್ಟ್ ಪಂದ್ಯಗಳಲ್ಲಿ ಕೇವಲ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿರುವ ಮೊಹಮ್ಮದ್ ಸಿರಾಜ್ ಅವರ ಬದಲಾಗಿ ಮೊಹಮ್ಮದ್ ಶಮಿ ಸ್ಥಾನ ಪಡೆಯಲಿದ್ದಾರೆ. ಉಮೇಶ್ ಯಾದವ್ ಇಂದೋರ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 3 ವಿಕೆಟ್‌ಗಳನ್ನು ಕಬಳಿಸಿದರು.
ಮೊಹಮ್ಮದ್ ಶಮಿ 62 ಟೆಸ್ಟ್ ಪಂದ್ಯಗಳಲ್ಲಿ 27.04 ಸರಾಸರಿಯಲ್ಲಿ ಆರು ಬಾರಿ 5 ವಿಕೆಟ್‌ಗಳ ಸಾಧನೆಯೊಂದಿಗೆ 223 ವಿಕೆಟ್‌ಗಳನ್ನು ಪಡೆದಿದ್ದಾರೆ. ಇನ್ನು ಈ ಸರಣಿಯಲ್ಲಿ ಭಾರತ ತಂಡವು ಮುಖ್ಯವಾಗಿ ಅವಳಿ ಸ್ಪಿನ್ನರ್‌ಗಳಾದ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಅವರನ್ನು ನೆಚ್ಚಿಕೊಂಡಿದೆ. ಈ ಜೋಡಿ ಪ್ರಸ್ತುತ ಸರಣಿಯಲ್ಲಿ ಕ್ರಮವಾಗಿ 21 ಮತ್ತು 18 ವಿಕೆಟ್‌ಗಳನ್ನು ಪಡೆದಿದ್ದಾರೆ.

ಇನ್ನು ಬ್ಯಾಟಿಂಗ್ ವಿಭಾಗವು ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಕಳೆದ ಮೂರು ಪಂದ್ಯಗಳಲ್ಲಿ ಅಗ್ರ ಕ್ರಮಾಂಕದ ಭಾರತೀಯ ಬ್ಯಾಟರ್‌ಗಳ ವೈಫಲ್ಯ ಅನುಭವಿಸಿದ್ದಾರೆ. ಮೊದಲ ಎರಡು ಪಂದ್ಯಗಳಲ್ಲಿ ಆರಂಭಿಕ ಕೆಎಲ್ ರಾಹುಲ್ ಕಳಪೆ ಪ್ರದರ್ಶನ ನೀಡಿದರೆ, ಮೂರನೇ ಪಂದ್ಯದಲ್ಲಿ ಬದಲಿಯಾಗಿ ಬಂದ ಶುಭ್ಮನ್ ಗಿಲ್ ಸಹ ರನ್ ಗಳಿಸಲು ವಿಫಲರಾದರು. ಕೆಎಲ್ ರಾಹುಲ್ ಮತ್ತು ಶುಭ್ಮನ್ ಗಿಲ್ ಅವರ ನಡುವೆ ಯಾರು ರೋಹಿತ್ ಶರ್ಮಾರೊಂದಿಗೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂದು ಕಾದು ನೋಡಬೇಕಿದೆ.
ನಾಲ್ಕನೇ ಹಾಗೂ ಸರಣಿ ನಿರ್ಣಾಯಕ ಟೆಸ್ಟ್ ಪಂದ್ಯದಲ್ಲಿ ಹೆಚ್ಚುವರಿ ಬ್ಯಾಟರ್‌ನೊಂದಿಗೆ ಆಡಲು ಭಾರತ ತಂಡ ನಿರ್ಧರಿಸಿದರೆ, ಉಮೇಶ್ ಯಾದವ್ ಅವರ ಬದಲಿಯಾಗಿ ಸೂರ್ಯಕುಮಾರ್ ಯಾದವ್ ಮೈದಾನಕ್ಕೆ ಇಳಿಯುವ ಸಾಧ್ಯತೆ ಇದೆ.
ಆಸ್ಟ್ರೇಲಿಯಾ ವಿರುದ್ಧ 4ನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಸಂಭಾವ್ಯ ಆಡುವ 11ರ ಬಳಗ
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್/ ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್/ ಉಮೇಶ್ ಯಾದವ್, ರವೀಂದ್ರ ಜಡೇಜಾ, ಶ್ರೀಕರ್ ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ.