
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಟೆಸ್ಟ್ ಸರಣಿಯ ಅಂತಿಮ ಎರಡು ಪಂದ್ಯಗಳಿಗೆ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟಗೊಳಿಸಲಾಗಿದೆ. ಭಾನುವಾರ ಬಿಸಿಸಿಐ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ನಾಲ್ಕು ಪಂದ್ಯಗಳ ಪೈಕಿ ಮೊಲದ ಎರಡು ಪಂದ್ಯಗಳಿಗೆ ಮಾತ್ರವೇ ಈ ಮುನ್ನ ಭಾರತ ತಂಡವನ್ನು ಪ್ರಕಟಿಸಲಾಗಿತ್ತು.
ಟೆಸ್ಟ್ ಸರಣಿಯ ಅಂತಿಮ ಎರಡು ಪಂದ್ಯಗಳಿಗೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಕೊಳ್ಳದೆ ತಂಡವನ್ನು ಪ್ರಕಟಿಸಲಾಗಿದೆ. ಈ ಮುನ್ನ ಟೀಮ್ ಇಂಡಿಯಾದ ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬೂಮ್ರಾ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ ಎನ್ನಲಾಗಿತ್ತು. ಆದರೆ ಬೂಮ್ರಾಗೆ ಮತ್ತಷ್ಟು ದಿನಗಳ ವಿಶ್ರಾಂತಿ ನೀಡಲಾಗಿದ್ದು ಮುಂಬರುವ ಐಪಿಎಲ್ ಟೂರ್ನಿಯಲ್ಲಿಯೇ ವೇಗಿ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಲಿದ್ದಾರೆ.
ಬಾರ್ಡರ್-ಗವಾಸ್ಕರ್ ಟ್ರೋಪಿಯ ಮೊದಲ ಎರಡು ಪಂದ್ಯಗಳು ನಾಗ್ಪುರ ಹಾಗೂ ದೆಹಲಿಯಲ್ಲಿ ನಡೆದಿತ್ತು. ಅಂತಿಮ ಎರಡು ಪಂದ್ಯಗಳು ಇಂದೋರ್ ಹಾಗೂ ಅಹ್ಮದಾಬಾದ್‌ನಲ್ಲಿ ನಡೆಯಲಿದೆ. ಸರಣಿಯ ಮೂರನೇ ಪಂದ್ಯ ಇಂದೋರ್‌ನಲ್ಲಿರುವ ಹೋಲ್ಕರ್ ಕ್ರೀಡಾಂಗಣದಲ್ಲಿ ನಡೆದರೆ ಅಂತಿಮ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಭರ್ಜರಿ ಮುನ್ನಡೆಯಲ್ಲಿ ಭಾರತ: ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಮೊದಲ ಎರಡು ಪಂದ್ಯಗಳಲ್ಲಿಯೂ ಭರ್ಜರಿ ಗೆಲುವು ಸಾಧಿಸಿದೆ. ಹೀಗಾಗಿ ಸರಿಯಲ್ಲಿ 2-0 ಅಂತರದಿಂದ ಮುನ್ನಡೆಯಲ್ಲಿದ್ದು ಆಸ್ಟ್ರೇಲಿಯಾದ ಸರಣಿ ಗೆಲ್ಲುವ ಕನಸನ್ನು ಮತ್ತೊಮ್ಮೆ ಭಗ್ನಗೊಳಿಸಿದೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮೇಲೆ ಕಣ್ಣು: ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಈಗಾಗಲೇ ಮೊದಲ ಎರಡು ಪಂದ್ಯಗಳನ್ನು ಗೆದ್ದುಕೊಂಡಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಆಡುವ ಅವಕಾಶವನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ. ಮುಂದಿನ ಎರಡು ಪಂದ್ಯಗಳಲ್ಲಿ ಭಾರತ ತಂಡಕ್ಕೆ ಕೇವಲ ಒಂದು ಗೆಲವಿನ ಅಗತ್ಯ ಮಾತ್ರವೇ ಇದ್ದು ಅದು ಸಾಧ್ಯವಾದರೆ ಭಾರತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಮತ್ತೊಮ್ಮೆ ಸೆಣೆಸಾಡುವ ಅವಕಾಶ ಪಡೆಯಲಿದೆ.
ಅಂತಿಮ ಎರಡು ಪಂದ್ಯಗಳಿಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್‌ದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್ , ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನದ್ಕಟ್