
3 ಪಂದ್ಯಗಳ ಟೆಸ್ಟ್ ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಯನ್ನಾಡಲು ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡಿರುವ ಟೀಮ್ ಇಂಡಿಯಾ ಹರಿಣಗಳ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿದೆ. ಹೌದು, ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಮೊನ್ನೆಯಷ್ಟೇ ಮುಕ್ತಾಯವಾಗಿರುವ ಸೆಂಚುರಿಯನ್ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 113 ರನ್‌ಗಳ ಬೃಹತ್ ಜಯವನ್ನು ಸಾಧಿಸುವುದರ ಮೂಲಕ ದಾಖಲೆ ಬರೆದಿದೆ.
ಹೀಗೆ ಸೆಂಚೂರಿಯನ್ ಕ್ರೀಡಾಂಗಣದಲ್ಲಿ ಇದೇ ಮೊದಲ ಬಾರಿಗೆ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿದ ದಾಖಲೆ ಬರೆದ ಟೀಮ್ ಇಂಡಿಯಾ ಇದೀಗ ಮುಂಬರುವ 2 ಪಂದ್ಯಗಳನ್ನು ಗೆಲ್ಲುವುದರ ಮೂಲಕ ಇಡೀ ಸರಣಿಯನ್ನು ಕೈವಶ ಮಾಡಿಕೊಳ್ಳುವ ತವಕದಲ್ಲಿದೆ. ಈ ಟೆಸ್ಟ್ ಸರಣಿ ಮುಗಿಯುತ್ತಿದ್ದಂತೆ ಜನವರಿ 19ರಿಂದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿ ಆರಂಭವಾಗಲಿದ್ದು 3 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಮತ್ತು ಹರಿಣಗಳ ನಡುವೆ ಹಣಾಹಣಿ ನಡೆಯಲಿದೆ.
ಇತ್ತಂಡಗಳ ನಡುವೆ ಮೊದಲಿಗೆ ಟೆಸ್ಟ್ ಸರಣಿ ಆಯೋಜನೆಯಾಗಿದ್ದ ಕಾರಣ ಬಿಸಿಸಿಐ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಮಾತ್ರ ಭಾರತ ತಂಡವನ್ನು ಪ್ರಕಟಿಸಿತ್ತು. ವಿರಾಟ್ ಕೊಹ್ಲಿ ನೇತೃತ್ವದ ಟೆಸ್ಟ್ ತಂಡವನ್ನು ಪ್ರಕಟಿಸಿದ ಬಿಸಿಸಿಐ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ರೋಹಿತ್ ಶರ್ಮಾ ಅವರನ್ನು ನೂತನ ನಾಯಕನನ್ನಾಗಿ ಆಯ್ಕೆ ಮಾಡಿರುವುದಾಗಿ ಮಾತ್ರ ಸುದ್ದಿಯನ್ನು ನೀಡಿತ್ತು. ಹೀಗೆ ನಾಯಕನಾಗಿ ಆಯ್ಕೆಯಾಗಿದ್ದ ರೋಹಿತ್ ಶರ್ಮಾ ಗಾಯದ ಸಮಸ್ಯೆಗೆ ಒಳಗಾದ ಕಾರಣ ದಕ್ಷಿಣ ಆಫ್ರಿಕಾ ಏಕದಿನ ಸರಣಿಯಿಂದಲೂ ಕೂಡ ಹೊರ ಬಿದ್ದಿದ್ದು ಇದೀಗ ನೂತನ ನಾಯಕನಾಗಿ ಕೆಎಲ್ ರಾಹುಲ್ ಆಯ್ಕೆಯಾಗಿದ್ದಾರೆ. ಹೌದು, ಡಿಸೆಂಬರ್ 31ರಂದು ಬಿಸಿಸಿಐ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದ್ದು ಕೆಎಲ್ ರಾಹುಲ್ ನಾಯಕ ಮತ್ತು ಜಸ್ಪ್ರೀತ್ ಬುಮ್ರಾ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. ಜತೆಗೆ ಶಿಖರ್ ಧವನ್ ಹಾಗೂ ಯುಜುವೇಂದ್ರ ಚಾಹಲ್ ಮತ್ತೆ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದು ಕೆಲ ಯುವ ಆಟಗಾರರಿಗೂ ಕೂಡ ಸ್ಥಾನವನ್ನು ನೀಡಲಾಗಿದೆ.
ಅದರಲ್ಲಿಯೂ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ಪರ ಅತ್ಯುತ್ತಮ ಪ್ರದರ್ಶನ ನೀಡಿದ ವೆಂಕಟೇಶ್ ಅಯ್ಯರ್ ಈ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿರುವುದರ ಕುರಿತು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದರ ಜತೆಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಮಿಂಚಿದ್ದ ರುತುರಾಜ್ ಗಾಯಕ್ವಾಡ್ ಅವರಿಗೂ ಸ್ಥಾನ ಲಭಿಸಿರುವುದರ ಕುರಿತು ಕೂಡ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಹಾಗೂ ವಿಜಯ್ ಹಜಾರೆ ಟ್ರೋಫಿಯಲ್ಲಿ ಈ ಇಬ್ಬರು ಕಷ್ಟಪಟ್ಟು ಪ್ರದರ್ಶನ ನೀಡುವುದರ ಮೂಲಕ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ. ಹಾಗೂ ಈ ಸ್ಥಾನಗಳಿಗೆ ಇವರು ಹೆಚ್ಚು ಅರ್ಹರು ಎಂದು ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಬಿಸಿಸಿಐ ಭಾರತ ತಂಡವನ್ನು ತನ್ನ ಅಧಿಕೃತ ಟ್ವಿಟ್ಟರ್ ಖಾತೆಯ ಮೂಲಕ ಪ್ರಕಟಿಸಿದ್ದು, ಇದಕ್ಕೆ ಹಲವಾರು ನೆಟ್ಟಿಗರು ಕಾಮೆಂಟ್ ಮಾಡುವುದರ ಮೂಲಕ ರುತುರಾಜ್ ಗಾಯಕ್ವಾಡ್ ಮತ್ತು ವೆಂಕಟೇಶ್ ಅಯ್ಯರ್ ಅವರಿಗೆ ಅವಕಾಶ ನೀಡಿದ್ದಕ್ಕೆ ಹರ್ಷ ವ್ಯಕ್ತಪಡಿಸುತ್ತಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಪ್ರಕಟಿಸಲಾಗಿರುವ ಭಾರತ ತಂಡ: ಕೆ.ಎಲ್ ರಾಹುಲ್ (ಸಿ), ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶನ್ ಕಿಶನ್ (ವಿಕೆಟ್ ಕೀಪರ್), ಯುಜವೇಂದ್ರ ಚಾಹಲ್, ಆರ್. ಅಶ್ವಿನ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ (ಉಪನಾಯಕ) , ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಪ್ರಸಿದ್ಧ ಕೃಷ್ಣ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್