
ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವೆ ಸದ್ಯ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ನಡೆಯುತ್ತಿದ್ದು, ಟೀಮ್ ಇಂಡಿಯಾ 2-0 ಅಂತರದಿಂದ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಹೌದು, ಭಾರತ ಪ್ರವಾಸವನ್ನು ಕೈಗೊಂಡಿರುವ ಶ್ರೀಲಂಕಾ ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿದ್ದು, ಮೊದಲಿಗೆ ಟಿ ಟ್ವೆಂಟಿ ಸರಣಿಯಲ್ಲಿ ಸೋಲನ್ನು ಅನುಭವಿಸಿದೆ. ಇತ್ತ ಇದಕ್ಕೂ ಮುನ್ನ ಭಾರತ ಪ್ರವಾಸವನ್ನು ಕೈಗೊಂಡಿದ್ದ ವೆಸ್ಟ್ ಇಂಡೀಸ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದು ವೈಟ್ ವಾಷ್ ಸಾಧನೆ ಮಾಡಿದ್ದ ಟೀಮ್ ಇಂಡಿಯಾ ಇದೀಗ ಶ್ರೀಲಂಕಾ ವಿರುದ್ಧವೂ ಸಹ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ.
ಹೌದು, ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವಿನ ಈ ಟಿ ಟ್ವೆಂಟಿ ಸರಣಿಯ ಚೊಚ್ಚಲ ಪಂದ್ಯದಲ್ಲಿ 62 ರನ್‌ಗಳ ಭರ್ಜರಿ ಜಯ ಸಾಧಿಸುವುದರ ಮೂಲಕ ಮುನ್ನಡೆಯನ್ನು ಕಾಯ್ದುಕೊಂಡಿದ್ದ ಟೀಮ್ ಇಂಡಿಯಾ ಫೆಬ್ರವರಿ 26ರ ಶನಿವಾರದಂದು ನಡೆದ ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ 7 ವಿಕೆಟ್‍ಗಳ ಭರ್ಜರಿ ಜಯ ಸಾಧಿಸುವುದರ ಮೂಲಕ 2-0 ಅಂತರದ ಮುನ್ನಡೆ ಕಾಯ್ದುಕೊಂಡು ಸರಣಿ ಕೈವಶ ಪಡಿಸಿಕೊಂಡಿದೆ. ಇನ್ನು ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆದ ಇತ್ತಂಡಗಳ ನಡುವಿನ ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ ರೋಹಿತ್ ಶರ್ಮಾ ಟೀಮ್ ಇಂಡಿಯಾ ಬ್ಯಾಟಿಂಗ್ ವೇಳೆ ಕಾಫಿ ಕುಡಿಯುತ್ತಾ ಪಂದ್ಯ ವೀಕ್ಷಿಸುತ್ತಿದ್ದರು. ಇದೇ ವೇಳೆ ಈ ದೃಶ್ಯವನ್ನು ಸೆರೆಹಿಡಿಯಲು ಛಾಯಾಗ್ರಾಹಕನೋರ್ವ ಮುಂದಾಗಿದ್ದರು. ಹೀಗೆ ತಾನು ಕಾಫಿ ಕುಡಿಯುತ್ತಿರುವ ದೃಶ್ಯವನ್ನು ಸೆರೆಹಿಡಿಯಲು ಮುಂದಾದ ಛಾಯಾಗ್ರಾಹಕನಿಗೆ ರೋಹಿತ್ ಶರ್ಮಾ ತಾವು ಕುಡಿಯುತ್ತಿದ್ದ ಕಾಫಿಯನ್ನು ತೋರಿಸಿ ಕಾಫಿ ಕುಡಿಯುತ್ತೀರಾ ಎಂದು ಸನ್ನೆ ಮೂಲಕ ಕೇಳುತ್ತಾ ಆಹ್ವಾನವನ್ನು ನೀಡಿದ್ದಾರೆ. ಸದ್ಯ ಛಾಯಾಗ್ರಾಹಕನಿಗೆ ರೋಹಿತ್ ಶರ್ಮಾ ನೀಡಿದ ಈ ಪ್ರತಿಕ್ರಿಯೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಭಾರತ vs ಶ್ರೀಲಂಕಾ ದ್ವಿತೀಯ ಟಿ ಟ್ವೆಂಟಿ ಪಂದ್ಯದ ಫಲಿತಾಂಶ:
ಇನ್ನು ಇತ್ತಂಡಗಳ ನಡುವಿನ ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ದುಕೊಂಡು ಎದುರಾಳಿ ಶ್ರೀಲಂಕಾ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 183 ರನ್ ಕಲೆಹಾಕಿ ಟೀಮ್ ಇಂಡಿಯಾಗೆ ಗೆಲ್ಲಲು 184 ರನ್‌ಗಳ ಗುರಿ ನೀಡಿತು. ಇತ್ತ ಶ್ರೀಲಂಕಾ ನೀಡಿದ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾದ ಆರಂಭಿಕ ಆಟಗಾರರಾದ ಇಶಾನ್ ಕಿಶನ್ ಮತ್ತು ರೋಹಿತ್ ಶರ್ಮಾ ಅವರನ್ನು ವೇಗವಾಗಿ ಪೆವಿಲಿಯನ್ ಕಡೆಗೆ ಕಳುಹಿಸಿದ ಶ್ರೀಲಂಕಾ ಬೌಲಿಂಗ್ ಪಡೆ ನಂತರ ಮಂಕಾಯಿತು. ಹೌದು, ರೋಹಿತ್ ಶರ್ಮಾ 1 ರನ್ ಗಳಿಸಿ ಔಟ್ ಆದರೆ, ಇಶಾನ್ ಕಿಶನ್ 16 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ನಂತರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶ್ರೇಯಸ್ ಅಯ್ಯರ್ 44 ಎಸೆತಗಳಲ್ಲಿ 74 ರನ್ ಬಾರಿಸಿ ಅಜೇಯರಾಗಿ ಉಳಿದರು. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ 25 ಎಸೆತಗಳಲ್ಲಿ 39 ರನ್ ಬಾರಿಸಿದರೆ, ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರವೀಂದ್ರ ಜಡೇಜಾ 18 ಎಸೆತಗಳಲ್ಲಿ ಅಜೇಯ 45 ರನ್ ಕಲೆ ಹಾಕಿದರು. ಈ ಮೂಲಕ ಭಾರತ 17.1 ಓವರ್‌ಗಳಲ್ಲಿಯೇ 186 ರನ್ ಬಾರಿಸುವುದರ ಮೂಲಕ ಇನ್ನೂ 17 ಎಸೆತಗಳು ಬಾಕಿ ಇರುವಾಗಲೇ 7 ವಿಕೆಟ್‍ಗಳ ಅಂತರದ ಜಯದೊಂದಿಗೆ ವಿಜಯ ಪತಾಕೆಯನ್ನು ಹಾರಿಸಿತು.
ಭಾರತ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಹಾಲ್
ಶ್ರೀಲಂಕಾ ಪ್ಲೇಯಿಂಗ್ 11: ಪಾತುಮ್ ನಿಸ್ಸಾಂಕ, ಕಮಿಲ್ ಮಿಶ್ರಾ, ಚರಿತ್ ಅಸಲಂಕ, ದನುಷ್ಕ ಗುಣತಿಲಕ, ದಿನೇಶ್ ಚಂಡಿಮಲ್(ವಿಕೆಟ್ ಕೀಪರ್), ದಸುನ್ ಶನಕ(ನಾಯಕ), ಚಾಮಿಕ ಕರುಣಾರತ್ನೆ, ದುಷ್ಮಂತ ಚಮೀರ, ಪ್ರವೀಣ್ ಜಯವಿಕ್ರಮ, ಬಿನೂರ ಫೆರ್ನಾಂಡೋ, ಲಹಿರು ಕುಮಾರ