ಕಟಕ್: ಭರವಸೆಯ ಬೌಲರ್‌ಗಳ ಬಿಗುವಿನ ದಾಳಿಯ ನೆರವಿನಿಂದ ಭಾರತ ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 101 ರನ್‌ಗಳಿಂದ ಮಣಿಸಿ, 5 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ದಕ್ಷಿಣ ಆಫ್ರಿಕಾ ಸ್ಪರ್ಧಾತ್ಮಕ ಮೊತ್ತವನ್ನು ಹಿಂಬಾಲಿಸುವಲ್ಲಿ ವಿಫಲವಾಗಿದೆ. ಹಾರ್ದಿಕ್ ಪಾಂಡ್ಯ ಮೊದಲ ಪಂದ್ಯದ ಗೆಲುವಿನ ಹೀರೋ ಆದರು.
176 ರನ್‌ಗಳ ಗುರಿಯನ್ನು ಹಿಂಬಾಲಿಸಿದ ದಕ್ಷಿಣ ಆಫ್ರಿಕಾ ತಂಡದ ಆರಂಭ ಕಳಪೆಯಾಗಿತ್ತು. ಭರವಸೆಯ ಬ್ಯಾಟರ್ ಕ್ವಿಂಟನ್ ಡಿಕಾಕ್ ಹಾಗೂ ಮಧ್ಯಮ ಕ್ರಮಾಂಕದಲ್ಲಿ ಟ್ರಿಸ್ಟನ್ ಸ್ಟಬ್ಸ್ (14) ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ನಾಯಕ ಎಡೆನ್ ಮಾರ್ಕ್ರಮ್ 1 ಬೌಂಡರಿ, 1 ಸಿಕ್ಸರ್ ಸಹಾಯದಿಂದ 14 ರನ್ ಬಾರಿಸಿ ಅಕ್ಷರ್ ಪಟೇಲ್ ತೋಡಿದ ಖೆಡ್ಡಾಗೆ ಬಲಿಯಾದರು.

ಮಧ್ಯಮ ಕ್ರಮಾಂಕದಲ್ಲಿ ಡೇವಿಡ್ ಮಿಲ್ಲರ್ ಹಾಗೂ ಡೊನೊವನ್ ಫೆರೀರಾ ತಂಡಕ್ಕೆ ವಿಶೇಷ ಕೊಡುಗೆ ನೀಡುವಲ್ಲಿ ವಿಫಲರಾದರು. ಟೆಸ್ಟ್ ಹಾಗೂ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ ಬೌಲರ್‌ಗಳನ್ನು ಕಾಡಿದ ಮಾರ್ಕೊ ಜಾನ್ಸನ್ ಅವರು ವರುಣ್ ಚಕ್ರವರ್ತಿ (12) ಅವರ ಎಸೆತವನ್ನು ಗ್ರಹಿಸುವಲ್ಲಿ ವಿಫಲರಾದರು. ಮಧ್ಯಮ ಕ್ರಮಾಂಕದಲ್ಲಿ ಡೆವಾಲ್ಡ್ ಬ್ರೇವಿಸ್ 14 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಹಾಯದಿಂದ 22 ರನ್ ಬಾರಿಸಿ ಸೋಲಿನ ಅಂತರವನ್ನು ಕಡಿಮೆ ಮಾಡಿದರು. ಉಳಿದ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. ಅಂತಿಮವಾಗಿ ದಕ್ಷಿಣ ಆಫ್ರಿಕಾ 12.3 ಓವರ್‌ಗಳಲ್ಲಿ 74 ರನ್‌ಗಳಿಗೆ ಆಲೌಟ್ ಆಯಿತು.
ಟೀಮ್ ಇಂಡಿಯಾದ ಪರ ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅಕ್ಷರ್ ಪಟೇಲ್ ತಲಾ 2 ವಿಕೆಟ್ ಪಡೆದರು. ಹಾರ್ದಿಕ್ ಪಾಂಡ್ಯ, ಶಿವಂ ದುಬೆ ತಲಾ 1 ವಿಕೆಟ್ ಕಬಳಿಸಿದರು.

ಭಾರತ ತಂಡ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿತು. ಈ ವೇಳೆ ಆರಂಭಿಕರಾದ ಅಭಿಷೇಕ್ ಶರ್ಮಾ (17), ಉಪನಾಯಕ ಶುಭಮನ್ ಗಿಲ್ (4), ನಾಯಕ ಸೂರ್ಯಕುಮಾರ್ ಯದವ್ (12) ದೊಡ್ಡ ಇನಿಂಗ್ಸ್ ಕಟ್ಟುವಲ್ಲಿ ವಿಫಲರಾದರು. ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ 32 ಎಸೆತಗಳಲ್ಲಿ 26 ರನ್ ಸಿಡಿಸಿದರು. ಇನ್ನು ಆಲ್‌ರೌಂಡರ್ ಅಕ್ಷರ್ ಪಟೇಲ್ 1 ಬೌಂಡರಿ ನೆರವಿನಿಂದ 23 ರನ್ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು. ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ ವೇಳೆ ಗಾಯಕ್ಕೆ ತುತ್ತಾಗಿದ್ದ ಹಾರ್ದಿಕ್ ಪಾಂಡ್ಯ, ಈಗ ಚೇತರಿಸಕೊಂಡಿದ್ದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದ್ದಾರೆ. ಹಾರ್ದಿಕ್ ಪಾಂಡ್ಯ 28 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ಸಹಾಯದಿಂದ ಅಜೇಯ 59 ರನ್ ಸಿಡಿಸಿ ಮಿಂಚಿದರು. ಅಂತಿಮವಾಗಿ ಭಾರತ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 175 ರನ್ ಸೇರಿಸಿತು. ದಕ್ಷಿಣ ಆಫ್ರಿಕಾದ ಪರ ಲುಂಗಿ ಎನ್‌ಗಿಡಿ ಮೂರು ವಿಕೆಟ್ ಕಬಳಿಸಿದರು.