ನ್ಯೂಜಿಲೆಂಡ್ ಸರಣಿಗೆ ಭಾರತ ತಂಡ ಪ್ರಕಟ: ಅಯ್ಯರ್ ಕಂಬ್ಯಾಕ್
ಬಹು ನಿರೀಕ್ಷಿತ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ವೇಳೆ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದ ಶುಭಮನ್ ಗಿಲ್, ಮತ್ತೆ ತಂಡ ಸೇರಿಕೊಂಡಿದ್ದಾರೆ. ಅಲ್ಲದೆ ತಂಡವನ್ನು ಮುನ್ನಡೆಸುವ ಜವಾಬ್ದಾರಿಯನ್ನು ಸಹ ಅವರೆ ಹೊತ್ತಿದ್ದಾರೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಂಡದಲ್ಲಿ ಸ್ಥಾನ ಪಡೆಯಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಈ ಆಸೆಗೆ ಪೆಟ್ಟು ಬಿದ್ದಿದೆ.
ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಮೂರು ಏಕದಿನ ಪಂದ್ಯಗಳಲ್ಲಿ ಇಬ್ಬರು ವಿಕೆಟ್ ಕೀಪರ್‌ಗಳು ಸ್ಥಾನ ಪಡೆದಿದ್ದಾರೆ. ನಿರೀಕ್ಷೆಯಂತೆ ಕೆಎಲ್ ರಾಹುಲ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗಿ ಕಾಣಿಸಿಕೊಂಡರೆ, ರಿಷಭ್ ಪಂತ್ ಎರಡನೇ ಆಯ್ಕೆಯ ವಿಕೆಟ್ ಕೀಪರ್ ಆಗಿ ಕಾಣಿಸಿಕೊಂಡಿದ್ದಾರೆ. ತಂಡದಿಂದ ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರಿತ್ ಬುಮ್ರಾ ಹೊರನಡೆದಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೂರನೇ ಪಂದ್ಯದ ವೇಳೆ ಕ್ಯಾಚ್ ಹಿಡಿಯುವಾಗ ಗಂಭೀರ ಗಾಯಕ್ಕೆ ತುತ್ತಾಗಿದ್ದ ಶ್ರೇಯಸ್ ಅಯ್ಯರ್, ಈಗ ಗಾಯದಿಂದ ಚೇತರಿಸಿಕೊಂಡಿದ್ದು ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ. ಎಂದಿನಂತೆ ಇವರಿಗೆ ಉಪನಾಯಕನ ಪಟ್ಟವನ್ನು ಕಟ್ಟಲಾಗಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಅಭಿಮಾನಿಗಳನ್ನು ರಂಜಿಸಿದ್ದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ. ಇವರಿಬ್ಬರೂ ವಿಜಯ್ ಹಜಾರೆ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ತಮ್ಮ ತಮ್ಮ ರಾಜ್ಯಗಳ ಪರ ಆಡಿ ಸ್ಥಿರ ಪ್ರದರ್ಶನ ನೀಡಿದ್ದರು. ಅಭಿಮಾನಿಗಳು ಇವರ ಆಟವನ್ನು ಕಣ್ಣು ತುಂಬಿಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಯಲ್ಲಿ ಆರಂಭಿಕರಾಗಿ ಆಡುವ ಅವಕಾಶವನ್ನು ಪಡೆದಿದ್ದ ಯಶಸ್ವಿ ಜೈಸ್ವಾಲ್ ಬ್ಯಾಕ್ ಅಪ್ ಓಪನರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.
3 ಆಲ್‌ರೌಂಡರ್ಸ್‌ಗೆ ಸ್ಥಾನ
ಭಾರತ ತಂಡ ಏಕದಿನ ಸರಣಿಗೆ ಪ್ರಕಟಿಸಿದ ತಂಡದಲ್ಲಿ ನಾಲ್ಕು ಜನ ಆಲ್‌ರೌಂಡರ್‌ಗಳಿಗೆ ಸ್ಥಾನ ನೀಡಿದೆ. ಭರವಸೆಯ ಆಟಗಾರ ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ ಆಲ್‌ರೌಂಡರ್ ರೂಪದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನುರಿತ ಸ್ಪಿನ್ ಬೌಲರ್ ಆಗಿ ಕುಲ್‌ದೀಪ್ ಯಾದವ್ ಸ್ಥಾನ ಪಡೆದಿದ್ದಾರೆ.
4 ವೇಗದ ಬೌಲರ್‌ಗಳಿಗೆ ಸ್ಥಾನ
ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸುವ ಜವಾಬ್ದಾರಿಯನ್ನು ಅನುಭವಿ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರಿಗೆ ನೀಡಲಾಗಿದೆ. ಇವರೊಂದಿಗೆ ಕನ್ನಡಿಗ ಪ್ರಸಿದ್ಧ ಕೃಷ್ಣ, ಹರ್ಷಿತ್ ರಾಣಾ ಹಾಗೂ ಅರ್ಷದೀಪ್ ಸಿಂಗ್ ಸಹ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ತಂಡದಲ್ಲಿ ಇಬ್ಬರು ಕನ್ನಡಿಗರು
ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ತಂಡವನ್ನು ಪ್ರಕಟಿಸುವಾಗ ಇಬ್ಬರು ಕನ್ನಡಿಗರಿಗೆ ಸ್ಥಾನ ನೀಡಲಾಗಿದೆ. ವಿಕೆಟ್ ಕೀಪರ್ ಬ್ಯಾಟರ್ ರೂಪದಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಂಡರೆ, ವೇಗದ ಬೌಲರ್ ರೂಪದಲ್ಲಿ ಪ್ರಸಿದ್ಧ್ ಕೃಷ್ಣ ಕಾಣಿಸಿಕೊಂಡಿದ್ದಾರೆ. ಆದರೆ ವಿಜಯ್ ಹಜಾರೆ ಏಕದಿನ ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ಕರ್ನಾಟಕದ ದೇವದತ್ ಪಡಿಕ್ಕಲ್ ಅವರಿಗೆ ಸ್ಥಾನ ನೀಡಲಾಗಿಲ್ಲ.
ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಗೆ ಭಾರತ ತಂಡ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ಉಪನಾಯಕ), ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ರಿಷಭ್ ಪಂತ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications