
ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ರನ್ನರ್ ಅಪ್ ಆಗಿ ಹೊರಹೊಮ್ಮಿದ ನಂತರ ಭಾರತ ಪ್ರವಾಸವನ್ನು ಕೈಗೊಂಡಿರುವ ನ್ಯೂಜಿಲೆಂಡ್ ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿದಿದೆ. ಇತ್ತಂಡಗಳ ನಡುವೆ ಮೊದಲಿಗೆ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ನಡೆದಿದ್ದು, ಈ ಎಲ್ಲಾ 3 ಪಂದ್ಯಗಳಲ್ಲಿಯೂ ನ್ಯೂಜಿಲೆಂಡ್ ವಿರುದ್ಧ ಭಾರತ ಜಯ ಸಾಧಿಸುವುದರ ಮೂಲಕ ವೈಟ್ ವಾಷ್ ಸಾಧನೆ ಮಾಡಿತು. ನಂತರ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಕಾನ್ಪುರದಲ್ಲಿ ನಡೆದ ಪ್ರಥಮ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತ್ತು.
ಹೀಗಾಗಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳೆರಡು ಮುಂಬೈನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯವನ್ನು ಗೆಲ್ಲುವುದರ ಮೂಲಕ ಸರಣಿ ಕೈವಶ ಮಾಡಿಕೊಳ್ಳುವ ಯೋಜನೆಯಲ್ಲಿದ್ದವು. ಮೊದಲಿಗೆ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾ ಪರ ಶುಬ್ ಮನ್ ಗಿಲ್ ಮತ್ತು ಮಯಾಂಕ್ ಅಗರ್ವಾಲ್ ಉತ್ತಮ ಆರಂಭವನ್ನು ಕಟ್ಟಿಕೊಟ್ಟಿದ್ದರು. ಅದರೆ ನಂತರ ಕಣಕ್ಕಿಳಿದ ಮಧ್ಯಮ ಕ್ರಮಾಂಕದ ಆಟಗಾರರು ಯಾರೂ ಕೂಡ ಹೇಳಿಕೊಳ್ಳುವಂತಹ ಉತ್ತಮ ಪ್ರದರ್ಶನ ನೀಡಲಿಲ್ಲ. ಆದರೆ ಮಯಾಂಕ್ ಅಗರ್ವಾಲ್ ಮಾತ್ರ ಏಕಾಂಗಿ ಹೋರಾಟ ನಡೆಸಿ 150 ರನ್ ಗಳಿಸಿದರೆ ಅಂತಿಮವಾಗಿ ಅಕ್ಷರ್ ಪಟೇಲ್ ಅರ್ಧಶತಕ ಬಾರಿಸಿದರು.
ಹೀಗೆ ಟೀಮ್ ಇಂಡಿಯಾ ಮೊದಲನೇ ಇನ್ನಿಂಗ್ಸ್‌ನಲ್ಲಿ 325 ರನ್‌ಗಳಿಗೆ ಆಲ್ ಔಟ್ ಆಯಿತು. ನ್ಯೂಜಿಲೆಂಡ್ ಪರ ಅಜಾಜ್ ಪಟೇಲ್ 10 ವಿಕೆಟ್ ಗೊಂಚಲು ಪಡೆಯುವ ಮೂಲಕ ಹೀರೋ ಆಗಿ ಮಿಂಚಿದರು.
ಟೀಮ್ ಇಂಡಿಯಾ ಆಟಗಾರರನ್ನು 325 ರನ್‌ಗಳಿಗೆ ಕಟ್ಟಿ ಹಾಕಿ ತನ್ನ ಪಾಲಿನ ಮೊದಲನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್ ಭಾರತೀಯ ಬೌಲರ್‌ಗಳ ದಾಳಿಗೆ ಅಕ್ಷರಷಃ ತತ್ತರಿಸಿದೆ. 28.1 ಓವರ್‌ಗಳಲ್ಲಿ ಕೇವಲ 62 ರನ್‌ಗಳಿಗೆ ನ್ಯೂಜಿಲೆಂಡ್ ಆಲ್ಔಟ್ ಆಗಿದೆ. ಟೀಮ್ ಇಂಡಿಯಾ ಪರ ರವಿಚಂದ್ರನ್ ಅಶ್ವಿನ್ 4 ವಿಕೆಟ್, ಮೊಹಮ್ಮದ್ ಸಿರಾಜ್ 3 ವಿಕೆಟ್, ಅಕ್ಷರ್ ಪಟೇಲ್ 2 ವಿಕೆಟ್ ಮತ್ತು ಜಯಂತ್ ಯಾದವ್ 1 ವಿಕೆಟ್ ಪಡೆದರು.