
ಇತ್ತೀಚೆಗಷ್ಟೇ ಯುಎಇಯಲ್ಲಿ ನಡೆಯುತ್ತಿದ್ದ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದಿದ್ದು, ಇದರ ಬೆನ್ನಲ್ಲೇ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗುತ್ತಿದೆ. ಮೊದಲಿಗೆ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಆರಂಭವಾಗಲಿದ್ದು, ಮೊದಲನೇ ಟಿ ಟ್ವೆಂಟಿ ಪಂದ್ಯ ನವೆಂಬರ್ 17ರ ಬುಧವಾರದಂದು ರಾಜಸ್ತಾನದ ಜೈಪುರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಇನ್ನು ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಸೆಮಿಫೈನಲ್ ಪ್ರವೇಶಿಸುವುದರಲ್ಲಿಯೂ ವಿಫಲವಾಗಿ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿತ್ತು. ಅತ್ತ ನ್ಯೂಜಿಲೆಂಡ್ ಸೂಪರ್ 12 ಹಂತದಲ್ಲಿ ಟೀಮ್ ಇಂಡಿಯಾಗೆ ಸೋಲುಣಿಸುವುದರ ಮೂಲಕ ಸೆಮಿಫೈನಲ್ ಸುತ್ತಿಗೆ ಲಗ್ಗೆ ಹಾಕುವಲ್ಲಿ ಯಶಸ್ವಿಯಾಗಿತ್ತು, ನಂತರ ಸೆಮಿಫೈನಲ್ ಪಂದ್ಯದಲ್ಲಿ ಹಾಲಿ ಏಕದಿನ ವಿಶ್ವಕಪ್ ಚಾಂಪಿಯನ್ ಎನಿಸಿಕೊಂಡಿರುವ ಇಂಗ್ಲೆಂಡ್ ತಂಡಕ್ಕೆ ಮಣ್ಣುಮುಕ್ಕಿಸಿದ ನ್ಯೂಜಿಲೆಂಡ್ ಫೈನಲ್ ಸುತ್ತಿಗೆ ಪ್ರವೇಶವನ್ನು ಪಡೆದುಕೊಂಡಿತು. ಆದರೆ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ಅನುಭವಿಸಿದ ನ್ಯೂಜಿಲೆಂಡ್ ತಮ್ಮ ಚೊಚ್ಚಲ ವಿಶ್ವಕಪ್ ಟ್ರೋಫಿಯನ್ನು ಎತ್ತಿ ಹಿಡಿಯುವ ಕನಸನ್ನು ನನಸು ಮಾಡಿಕೊಳ್ಳುವಲ್ಲಿ ಮತ್ತೊಮ್ಮೆ ಎಡವಿತು.
ಹೀಗೆ ಫೈನಲ್ ಹಂತದಲ್ಲಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ನ್ಯೂಜಿಲೆಂಡ್ ಇದೀಗ ಭಾರತ ವಿರುದ್ಧದ ಟಿ ಟ್ವೆಂಟಿ ಸರಣಿ ಮತ್ತು ಟೆಸ್ಟ್ ಸರಣಿಗಳನ್ನಾಡಲು ಭಾರತಕ್ಕೆ ಬಂದಿಳಿದಿದೆ ಹಾಗೂ ಜೈಪುರಕ್ಕೆ ತಲುಪಿ ಮೊದಲನೇ ಟಿ ಟ್ವೆಂಟಿ ಪಂದ್ಯಕ್ಕಾಗಿ ಅಭ್ಯಾಸಗಳಲ್ಲಿ ತೊಡಗಿಕೊಂಡಿದೆ. ಇನ್ನು ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ನಂತರ ಟೀಮ್ ಇಂಡಿಯಾದ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರವಿಶಾಸ್ತ್ರಿ ತಮ್ಮ ಸ್ಥಾನದಿಂದ ಕೆಳಗಿಳಿದಿದ್ದು ನೂತನ ಕೋಚ್ ಆಗಿ ರಾಹುಲ್ ದ್ರಾವಿಡ್ ಆಯ್ಕೆಯಾಗಿದ್ದಾರೆ.
ಹೀಗೆ ರಾಹುಲ್ ದ್ರಾವಿಡ್ ಟೀಮ್ ಇಂಡಿಯಾದ ಕೋಚ್ ಆಗಿ ನೇಮಕಗೊಂಡ ನಂತರ ತಂಡವನ್ನು ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಯ ಮೂಲಕ ಮೊಟ್ಟಮೊದಲ ಬಾರಿಗೆ ಮುನ್ನಡೆಸಲಿದ್ದಾರೆ ಹಾಗೂ, ವಿರಾಟ್ ಕೊಹ್ಲಿ ನಂತರ ಭಾರತ ಟಿ ಟ್ವೆಂಟಿ ತಂಡದ ನೂತನ ನಾಯಕರಾಗಿ ಆಯ್ಕೆಯಾಗಿರುವ ರೋಹಿತ್ ಶರ್ಮಾ ಟೀಮ್ ಇಂಡಿಯಾವನ್ನು ಮುನ್ನಡೆಸಲಿರುವ ಮೊದಲನೇ ಸರಣಿ ಕೂಡ ಇದಾಗಿದೆ. ಹೀಗಾಗಿ ನಾಳೆ ನಡೆಯಲಿರುವ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಮೊದಲ ಟಿ ಟ್ವೆಂಟಿ ಪಂದ್ಯದ ಕುರಿತು ಸಾಕಷ್ಟು ನಿರೀಕ್ಷೆ ಮತ್ತು ಕುತೂಹಲಗಳು ಹುಟ್ಟಿಕೊಂಡಿವೆ. ಇನ್ನು ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಟಿ20 ಕ್ರಿಕೆಟ್ ಇತಿಹಾಸದಲ್ಲಿ ನಡೆದಿರುವ ಮುಖಾಮುಖಿ ಪಂದ್ಯಗಳಲ್ಲಿ ಯಾವ ತಂಡ ಎಷ್ಟು ಪಂದ್ಯಗಳನ್ನು ಗೆದ್ದು ಬಲಿಷ್ಠವಾಗಿದೆ ಎಂಬುದರ ಮಾಹಿತಿ ಈ ಕೆಳಕಂಡಂತಿದೆ.
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಇದುವರೆಗೂ ಒಟ್ಟು 18 ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ 18 ಪಂದ್ಯಗಳ ಪೈಕಿ ಭಾರತ 8 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ನ್ಯೂಜಿಲೆಂಡ್ 9 ಪಂದ್ಯಗಳಲ್ಲಿ ಗೆಲುವು ಪಡೆದುಕೊಂಡಿದೆ ಹಾಗೂ ಒಂದು ಪಂದ್ಯ ಯಾವುದೇ ಫಲಿತಾಂಶವಿಲ್ಲದೇ ಡ್ರಾನಲ್ಲಿ ಅಂತ್ಯಗೊಂಡಿದೆ. ಈ ಮೂಲಕ ಇತ್ತಂಡಗಳ ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳ ಮುಖಾಮುಖಿಯಲ್ಲಿ ನ್ಯೂಜಿಲೆಂಡ್ ಮುನ್ನಡೆ ಸಾಧಿಸಿದೆ.
ಇತ್ತೀಚೆಗಷ್ಟೇ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಟಿ20 ವಿಶ್ವಕಪ್ ಟೂರ್ನಿಯಲ್ಲಿ ನಡೆದಿದ್ದ ಪಂದ್ಯದಲ್ಲಿ ನ್ಯೂಜಿಲೆಂಡ್ ಭಾರತದ ವಿರುದ್ಧ 8 ವಿಕೆಟ್‍ಗಳ ಭರ್ಜರಿ ಜಯವನ್ನು ಗಳಿಸಿತ್ತು. ಇನ್ನು ಎರಡೂ ತಂಡಗಳ ನಡುವೆ ನಡೆದಿರುವ ಕಳೆದ 5 ಟಿ20 ಪಂದ್ಯಗಳಲ್ಲಿ ಭಾರತ 4 ಪಂದ್ಯಗಳಲ್ಲಿ ಜಯ ಸಾಧಿಸಿದೆ ಮತ್ತು ನ್ಯೂಜಿಲೆಂಡ್ 1 ಪಂದ್ಯದಲ್ಲಿ ಜಯಗಳಿಸಿದೆ. ಈ ಮೂಲಕ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಕೊನೆಯ 5 ಅಂತಾರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳ ಮುಖಾಮುಖಿಯಲ್ಲಿ ಭಾರತ ಸ್ಪಷ್ಟ ಮೇಲುಗೈ ಸಾಧಿಸಿದೆ.