
ಸದ್ಯ ಯುಎಇಯಲ್ಲಿ ಜರಗುತ್ತಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಟೂರ್ನಿಯಲ್ಲಿ ಸೆಮಿಫೈನಲ್ ಹಂತವನ್ನು ಪ್ರವೇಶಿಸುವಲ್ಲಿ ಎಡವಿರುವ ಟೀಮ್ ಇಂಡಿಯಾ ಲೀಗ್ ಹಂತದಲ್ಲಿಯೇ ಹೊರಬೀಳುವ ಮೂಲಕ ಮುಖಬಂಗಕ್ಕೊಳಗಾಗಿದೆ.
ಟೀಮ್ ಇಂಡಿಯಾ ತನ್ನ ಮೊದಲೆರಡು ಪಂದ್ಯಗಳಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳ ವಿರುದ್ಧ ಹೀನಾಯವಾಗಿ ಸೋಲುವುದರ ಮೂಲಕ ಸೆಮಿಫೈನಲ್ ಹಂತವನ್ನು ಪ್ರವೇಶಿಸುವಲ್ಲಿ ಎಡವಿದೆ. ಹೌದು, ಟೂರ್ನಿಯಲ್ಲಿ ತನ್ನ ಮೊದಲೆರಡು ಪಂದ್ಯಗಳಲ್ಲಿ ಸೋತ ಟೀಮ್ ಇಂಡಿಯಾ ತದನಂತರ ಹ್ಯಾಟ್ರಿಕ್ ಗೆಲುವನ್ನು ಸಾಧಿಸಿತು. ಆದರೂ ಸಹ ಟೀಮ್ ಇಂಡಿಯಾ ಸೆಮಿಫೈನಲ್ ಹಂತಕ್ಕೆ ಅರ್ಹತೆ ಪಡೆದುಕೊಳ್ಳುವಲ್ಲಿ ವಿಫಲವಾಯಿತು. ಹೀಗೆ ಟೂರ್ನಿಯಲ್ಲಿನ ತನ್ನ ಕೊನೆಯ ಪಂದ್ಯದಲ್ಲಿ ನಮೀಬಿಯಾ ವಿರುದ್ಧ ಗೆಲುವು ಸಾಧಿಸಿದ ಟೀಂ ಇಂಡಿಯಾ ಟೂರ್ನಿಯಿಂದ ಹೊರಬಿದ್ದಿದೆ.
ಹೀಗೆ ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿ ಟೂರ್ನಿಯಿಂದ ಹೊರಬಿದ್ದಿರುವ ಟೀಮ್ ಇಂಡಿಯಾ ಇದೇ ತಿಂಗಳ 17ರಿಂದ ತವರು ನೆಲದಲ್ಲಿ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಗೆ ಸಿದ್ಧತೆಗಳನ್ನು ನಡೆಸಿಕೊಳ್ಳುತ್ತಿದೆ. ಹಾಗೂ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ನಂತರ ವಿರಾಟ್ ಕೊಹ್ಲಿ ನಾಯಕತ್ವದಿಂದ ಕೆಳಗಿಳಿದಿದ್ದು ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ.
ಹೌದು, ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭವಾಗುವ ಮುನ್ನವೇ ಟೂರ್ನಿ ಮುಗಿದ ನಂತರ ನಾಯಕತ್ವದಿಂದ ಕೆಳಗಿಳಿಯುವುದಾಗಿ ವಿರಾಟ್ ಕೊಹ್ಲಿ ನಿರ್ಧಾರವನ್ನು ಕೈಗೊಂಡಿದ್ದರು. ಅದರಂತೆ ಇದೀಗ ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಗೆ ನೂತನ ನಾಯಕನಾಗಿ ರೋಹಿತ್ ಶರ್ಮಾ ನೇಮಕವಾಗಿದ್ದು, ಈ ಟಿ ಟ್ವೆಂಟಿ ಸರಣಿ ಮುಗಿದ ನಂತರ ಆರಂಭವಾಗಲಿರುವ 2 ಪಂದ್ಯಗಳ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾದ ನಾಯಕ ಯಾರಾಗಲಿದ್ದಾರೆ ಎಂಬ ಪ್ರಶ್ನೆ ಇದೀಗ ಎಲ್ಲರಲ್ಲಿಯೂ ಮೂಡಿದೆ.
ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಗೆ ಪ್ರಕಟಿಸಲಾಗಿರುವ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ ಹೆಸರನ್ನು ಸೇರಿಸಲಾಗಿಲ್ಲ. ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಯಿಂದ ಹೊರಗುಳಿದಿರುವ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆಯುತ್ತಾರೆ ಎನ್ನಲಾಗಿದೆ. ಅದೇ ರೀತಿ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ 2 ಪಂದ್ಯಗಳ ಟೆಸ್ಟ್ ಸರಣಿಯಿಂದಲೂ ಕೂಡ ವಿರಾಟ್ ಕೊಹ್ಲಿ ದೂರ ಉಳಿಯಲಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ.
ಹೀಗಾಗಿ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಯಲ್ಲಿ ಭಾರತ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಗೊಂದಲ ಮೂಡಿದೆ. ಒಂದೆಡೆ ಭಾರತ ಟೆಸ್ಟ್ ತಂಡದ ಪ್ರಸ್ತುತ ಉಪನಾಯಕನಾಗಿರುವ ಅಜಿಂಕ್ಯ ರಹಾನೆ ಅವರೇ ಟೀಮ್ ಇಂಡಿಯಾವನ್ನು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮುನ್ನಡೆಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದರೆ, ಮತ್ತೊಂದೆಡೆ ಟಿ ಟ್ವೆಂಟಿ ತಂಡದ ನೂತನ ನಾಯಕನಾಗಿ ಆಯ್ಕೆಯಾಗಿರುವ ರೋಹಿತ್ ಶರ್ಮಾ ಅವರೇ ಟೆಸ್ಟ್ ಸರಣಿಯಲ್ಲಿಯೂ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದೆ.
ಈ ಹಿಂದೆ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದಾಗ ವೈಯಕ್ತಿಕ ಕಾರಣಗಳಿಂದ ವಿರಾಟ್ ಕೊಹ್ಲಿ ತವರಿಗೆ ಹಿಂದಿರುಗಿದ್ದಾಗ ಉಳಿದ ಪಂದ್ಯಗಳಲ್ಲಿ ತಂಡವನ್ನು ಅಜಿಂಕ್ಯ ರಹಾನೆ ಯಶಸ್ವಿಯಾಗಿ ಮುನ್ನಡೆಸಿ ಆಸ್ಟ್ರೇಲಿಯಾ ನೆಲದಲ್ಲಿಯೇ ಟ್ರೋಫಿಯನ್ನು ಗೆಲ್ಲಿಸಿದ್ದರು. ಹೀಗಾಗಿ ಅಜಿಂಕ್ಯ ರಹಾನೆ ಅವರಿಗೆ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕತ್ವವನ್ನು ನೀಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ಆದರೆ ಬಲ್ಲ ಮೂಲಗಳ ಮಾಹಿತಿಯ ಪ್ರಕಾರ ನ್ಯೂಜಿಲೆಂಡ್ ವಿರುದ್ಧದ ಸರಣಿಯಿಂದ ಟೀಮ್ ಇಂಡಿಯಾಗೆ ನೂತನ ಕೋಚ್ ಆಗಿ ರಾಹುಲ್ ದ್ರಾವಿಡ್ ಆಯ್ಕೆಯಾಗಿದ್ದು, ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ತಂಡವನ್ನು ಯಾರು ಮುನ್ನಡೆಸಬೇಕು ಎಂಬ ತೀರ್ಮಾನವನ್ನು ರಾಹುಲ್ ದ್ರಾವಿಡ್ ಅವರೇ ತೆಗೆದುಕೊಳ್ಳಲಿದ್ದಾರೆ ಎಂಬ ಸುದ್ದಿ ಇದೆ.
ಭಾರತ vs ನ್ಯೂಜಿಲೆಂಡ್ ಟೆಸ್ಟ್ ಸರಣಿಯ ವಿವರ
ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ನವೆಂಬರ್ 14ರಂದು ನಡೆಯಲಿದ್ದು, ನವೆಂಬರ್ 17ರಿಂದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಆರಂಭವಾಗಲಿದೆ. ಈ ಟಿ ಟ್ವೆಂಟಿ ಸರಣಿ ಮುಗಿದ ಕೂಡಲೇ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದ್ದು, ಮೊದಲನೇ ಟೆಸ್ಟ್ ನವೆಂಬರ್ 25ರಿಂದ ನವೆಂಬರ್ 29ರವರೆಗೆ ಕಾನ್ಪುರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ ಹಾಗೂ ದ್ವಿತೀಯ ಟೆಸ್ಟ್ ಪಂದ್ಯ ಡಿಸೆಂಬರ್ 3ರಿಂದ ಡಿಸೆಂಬರ್ 7ರವರೆಗೆ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.