
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಆರಂಭಕ್ಕೆ ದಿನಗಣನೆ ಶುರುವಾಗುತ್ತಿದ್ದಂತೆಯೇ ಟೀಮ್ ಇಂಡಿಯಾದ ಪ್ರಮುಖ ಆಟಗಾರ ರೋಹಿತ್ ಶರ್ಮಾ ಗಾಯಗೊಂಡಿದ್ದು ಟೆಸ್ಟ್ ಸರಣಿಯಿಂದ ಹೊರಗುಳಿಯುವುದು ಖಚಿತವಾಗಿದೆ. ಈ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಕಡೆಯಿಂದಲೂ ಪ್ರಮುಖ ಸುದ್ದಿಯೊಂದು ಹೊರಬಿದ್ದಿದೆ. ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ಕೂಡ ಟೆಸ್ಟ್ ಸರಣಿಯ ಅಂತಿಮ ಎರಡು ಪಮದ್ಯಗಳಿಂದ ಹೊರಗುಳಿಯುವ ಸಾಧ್ಯತೆಯಿದೆ. ಆದರೆ ಇದು ಕೌಟುಂಬಿಕ ಕಾರಣದಿಂದಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ.
ದಕ್ಷಿಣ ಆಫ್ರಿಕಾದ ಪ್ರಮುಖ ಕ್ರಿಕೆಟಿಗ ಕ್ವಿಂಟನ್ ಡಿಕಾಕ್ ಭಾರತ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಮಾತ್ರವೇ ಲಭ್ಯವಾಗುವ ಸಾಧ್ಯತೆಯಿದೆ. ಕ್ವಿಂಟನ್ ಡಿಕಾಕ್ ಹಾಗೂ ಅವರ ಪತ್ನಿ ಸಶಾ ಹರ್ಲಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು ಇದೇ ಕಾರಣದಿಂದಾಗಿ ಕ್ವಿಂಟನ್ ಡಿಕಾಕ್ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ಅಲಭ್ಯವಾಗುವ ಸಾಧ್ಯತೆಯಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಡಿಸೆಂಬರ್ 26ರಿಂದ ಮೂರು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದ್ದು ಅದಾದ ಬಳಿಕ ಜನವರಿ 19ರಿಂದ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಜನವರಿ ತಿಂಗಳಲ್ಲಿ ಕ್ವಿಂಟನ್ ಡಿಕಾಕ್ ದಂಪತಿ ಮೊದಲ ಮಗುವಿನ ಜನನದ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಅವರು ಜನವರಿ 3 ರಿಂದ ಜೊಹಾನ್ಸ್‌ಬರ್ಗ್‌ನಲ್ಲಿ ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯ ಹಾಗೂ ಜನವರಿ 11ರಿಂದ ಆರಂಬವಾಗಲಿರುವ ಕೇಪ್‌ಟೌಟ್ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಅದಾದ ಬಳಿಕ ಭಾರತ ಹಾಗೂ ದಕ್ಷಿಣ ಆಪ್ರಿಕಾ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಲಿದೆ.
ಕ್ವಿಂಟನ್ ಡಿಕಾಕ್ ಕಳೆದ ಟಿ20 ವಿಶ್ವಕಪ್ ಸಂದರ್ಭದಲ್ಲಿ ಬೇಡದ ಕಾರಣಕ್ಕೆ ಸುದ್ದಿಯಾಗಿದ್ದರು. ದಕ್ಷಿಣ ಆಫ್ರಿಕಾ ಆಡಿದ ಟೂರ್ನಿಯ ಎರಡನೇ ಪಂದ್ಯದಲ್ಲಿ ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಅಭಿಯಾನದಲ್ಲಿ ಭಾಗವಹಿಸಲು ಅವರು ಹಿಂದೇಟು ಹಾಕಿ ಪಂದ್ಯದಿಂದ ಹೊರಗುಳಿದಿದ್ದರು. ಇದು ಸಾಕಷ್ಟು ಟೀಕೆ ಹಾಗೂ ಗೊಂದಲಕ್ಕೆ ಕಾರಣವಾಗಿತ್ತು. ಅದಾದ ಬಳಿಕ ಕ್ವಿಂಟನ್ ಡಿಕಾಕ್ ಕ್ಷಮೆಯಾಚನೆ ಮಾಡಿ ನಂತರ ಈ ಅಭಿಯಾನದಲ್ಲಿ ಭಾಗಿಯಾಗಿದ್ದರು. ಅಲ್ಲದೆ ಟೂರ್ನಿಯಲ್ಲಿ ಮುಂದುವರಿದಿದ್ದರು.
ಭಾರತ ತಂಡಕ್ಕೆ ಆಘಾತ: ಈ ಮಧ್ಯೆ ಟೀಮ್ ಇಂಡಿಯಾ ತಂಡಕ್ಕೆ ದೊಡ್ಡ ಆಘಾತ ಉಂಟಾಗಿದೆ. ನೆಟ್ ಅಭ್ಯಾಸದ ಸಂದರ್ಭದಲ್ಲಿ ರೋಹಿತ್ ಶರ್ಮಾ ಗಾಯಕ್ಕೆ ತುತ್ತಾದ ಕಾರಣದಿಂದಾಗಿ ಟೆಸ್ಟ್ ಸರಣಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ. ಅವರ ಸ್ಥಾನಕ್ಕೆ ಬದಲಿ ಆಟಗಾರನಾಗಿ ಭಾರತ ಎ ತಂಡದ ನಾಯಕ ಪ್ರಿಯಾಂಕ್ ಪಾಂಚಾಲ್ ಅವರನ್ನು ಹೆಸರಿಸುವ ಸಾಧ್ಯತೆಯಿದೆ. ಕಳೆದ ವಾರವಷ್ಟೇ ರೋಹಿತ್ ಶರ್ಮಾ ಟೆಸ್ಟ್ ತಂಡದ ಉಪ ನಾಯಕನ ಹುದ್ದೆಯನ್ನು ಅಜಿಂಕ್ಯಾ ರಹಾನೆಯಿಂದ ವಹಿಸಿಕೊಂಡಿದ್ದರು. ಸೀಮಿತ ಓವರ್‌ಗಳ ನಾಯಕತ್ವವನ್ನು ಕೂಡ ರೋಹಿತ್ ಶರ್ಮಾ ಇತ್ತೀಚೆಗಷ್ಟೇ ಪೂರ್ಣ ಪ್ರಮಾಣದಲ್ಲಿ ವಹಿಸಿಕೊಂಡಿದ್ದು ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಏಕದಿನ ಸರಣಿಗೆ ಲಭ್ಯವಾಗುವ ಬಗ್ಗೆ ಕೂಡ ಈಗ ಅನುಮಾನಗಳುಂಟಾಗಿದೆ.
ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಭಾರತ ಟೆಸ್ಟ್ ತಂಡ: ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್ ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬೂಮ್ರಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್
ಮೀಸಲು ಆಟಗಾರರು: ನವದೀಪ್ ಸೈನಿ, ಸೌರಭ್ ಕುಮಾರ್, ದೀಪಕ್ ಚಾಹರ್, ಅರ್ಜನ್ ನಾಗ್ವಾಸ್ವಾಲ್ಲಾ