ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ 15 ರನ್‌ಗಳಿಂದ ಜಯ ಸಾಧಿಸಿದೆ. ಇದರೊಂದಿಗೆ ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು ಸೂರ್ಯಕುಮಾರ್ ಯಾದವ್ ಸಾರಥ್ಯದ ಟೀಮ್ ಇಂಡಿಯಾ ವಶಪಡಿಸಿಕೊಂಡಿದೆ. ನಾಲ್ಕು ಪಂದ್ಯಗಳ ಅಂತ್ಯಕ್ಕೆ ಈ ಸರಣಿ 3-1ರಲ್ಲಿ ನಿಂತಿದೆ. ಇದೀಗ ವಾಂಖೆಡೆಯಲ್ಲಿ ಟೀಮ್ ಇಂಡಿಯಾ 4-1 ಅಂತರದಲ್ಲಿ ಸರಣಿ ಗೆಲ್ಲುವ ನಿರೀಕ್ಷೆಯಲ್ಲಿದೆ.
ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 15 ರನ್‌ಗಳಿಂದ ಸೋಲಿಸಿ ಭಾರತ ಸರಣಿಯನ್ನು ಗೆದ್ದುಕೊಂಡಿತು. ಟಾಸ್ ಗೆದ್ದ ಇಂಗ್ಲೆಂಡ್ ತಂಡ ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಹಾರ್ದಿಕ್ ಪಾಂಡ್ಯ ಮತ್ತು ಶಿವಂ ದುಬೆ ಅವರ ಅರ್ಧಶತಕಗಳ ನೆರವಿನಿಂದ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 181 ರನ್ ಗಳಿಸಿತು. ಭಾರತ ನೀಡಿದ 182 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡ 19.4 ಓವರ್‌ಗಳಲ್ಲಿ 166 ರನ್‌ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಭಾರತ 15 ರನ್‌ಗಳಿಂದ ಪಂದ್ಯ ಗೆದ್ದು ಸರಣಿ ಕೈವಶ ಮಾಡಿಕೊಂಡಿತು.

ಇಂಗ್ಲೆಂಡ್ ತಂಡಕ್ಕೆ ಫಿಲ್ ಸಾಲ್ಟ್ ಮತ್ತು ಬೆನ್ ಡಕೆಟ್ ಉತ್ತಮ ಆರಂಭ ನೀಡಿದರು. ಇಬ್ಬರೂ ಮೊದಲ ವಿಕೆಟ್‌ಗೆ 62 ರನ್ ಸೇರಿಸಿದರು. ಆದರೆ ಡಕೆಟ್ 39 ಮತ್ತು ಸಾಲ್ಟ್ 29 ರನ್ ಗಳಿಸಿ ಔಟಾದರು. ಇದಾದ ಬಳಿಕ ಬಟ್ಲರ್ 2 ರನ್ ಗಳಿಸಿ ಔಟಾದರೆ, ಲಿಯಾಮ್ ಲಿವಿಂಗ್‌ಸ್ಟೋನ್ 9 ರನ್ ಗಳಿಸಿ ಔಟಾದರು. ಹ್ಯಾರಿ ಬ್ರೂಕ್ ಅದ್ಭುತ ಅರ್ಧಶತಕವನ್ನು ಗಳಿಸಿದರು. ಅವರು 25 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ 50 ರನ್ ಕಲೆ ಹಾಕಿ ವರುಣ್ ಚಕ್ರವರ್ತಿಗೆ ವಿಕೆಟ್ ಒಪ್ಪಿಸಿದರು. ಹ್ಯಾರಿ ಬ್ರೂಕ್ ವಿಕೆಟ್ ಕಳೆದುಕೊಳ್ಳುತ್ತಿದ್ದಂತೆ ಇಂಗ್ಲೆಂಡ್‌ನ ಯಾವುದೇ ಬ್ಯಾಟರ್ ಬಿಗ್ ಇನ್ನಿಂಗ್ಸ್ ಆಡಲು ಸಾಧ್ಯವಾಗಲಿಲ್ಲ. ಹೀಗಾಗಿ ಇಂಗ್ಲೆಂಡ್ ತಂಡ 166 ರನ್‌ಗೆ ಕುಸಿಯಿತು.
ಭಾರತದ ಪರ ರವಿ ಬಿಷ್ಣೋಯ್ 4 ಓವರ್ ಗಳಲ್ಲಿ 28 ರನ್ ನೀಡಿ 3 ವಿಕೆಟ್ ಪಡೆದರು. ವರುಣ್ ಚಕ್ರವರ್ತಿ 4 ಓವರ್ ಗಳಲ್ಲಿ 28 ರನ್ ನೀಡಿ 2 ವಿಕೆಟ್ ಹಾಗೂ ಅರ್ಷದೀಪ್ ಸಿಂಗ್ 3.4 ಓವರ್ ಗಳಲ್ಲಿ 35 ರನ್ ನೀಡಿ 1 ವಿಕೆಟ್ ಪಡೆದರು. ಶಿವಂ ದುಬೆ ತಮ್ಮ ಅದ್ಭುತ ಇನ್ನಿಂಗ್ಸ್‌ಗಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಭಾರತದ ಪರ ಹಾರ್ದಿಕ್ ಪಾಂಡ್ಯ ಮತ್ತು ಶಿವಂ ದುಬೆ ಅಬ್ಬರಿಸಿದರು. ಹಾರ್ದಿಕ್ ಪಾಂಡ್ಯ 30 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ 53 ರನ್ ಚಚ್ಚಿದರು. ಶಿವಂ ದುಬೆ 34 ಎಸೆತಗಳಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 53 ರನ್ ಬಾರಿಸಿದರು. ಇಂಗ್ಲೆಂಡ್ ಪರ ಸಾಕಿಬ್ ಮಹಮೂದ್ 4 ಓವರ್ ಗಳಲ್ಲಿ 35 ರನ್ ನೀಡಿ 3 ವಿಕೆಟ್ ಹಾಗೂ ಜೇಮಿ ಓವರ್ ಟನ್ 4 ಓವರ್ ಗಳಲ್ಲಿ 32 ರನ್ ನೀಡಿ 2 ವಿಕೆಟ್ ಪಡೆದರು.