
ಇದೇ ವರ್ಷದ ಏಪ್ರಿಲ್ 9 ನೇ ತಾರೀಕಿನಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು 29 ಪಂದ್ಯಗಳವರೆಗೆ ಯಾವುದೇ ಅಡಚಣೆಯಿಲ್ಲದೆ ನಡೆಯಿತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಎಚ್ಚೆತ್ತ ಬಿಸಿಸಿಐ ತಕ್ಷಣವೇ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.
ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉಳಿದ 31 ಪಂದ್ಯಗಳನ್ನು ಯುಎಇನಲ್ಲಿ ನಡೆಸಲು ಬಿಸಿಸಿಐ ಈ ಹಿಂದೆಯೇ ತೀರ್ಮಾನಿಸಿತ್ತು. ಬಿಸಿಸಿಐ ತೀರ್ಮಾನದಂತೆ ಸೆಪ್ಟೆಂಬರ್ 19 ರಿಂದ ಯುಎಈಯಲ್ಲಿ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಂದುವರಿಯಲಿದ್ದು ಈಗಾಗಲೇ ವಿವಿಧ ತಂಡಗಳ ಹಲವಾರು ಆಟಗಾರರು ದುಬೈ ತಲುಪಿದ್ದು ಅಭ್ಯಾಸಗಳಲ್ಲಿ ತೊಡಗಿಕೊಂಡಿದ್ದಾರೆ. ಇತ್ತೀಚೆಗಷ್ಟೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ಆಟಗಾರ, ಮಿಸ್ಟರ್ 360 ಎಂದೇ ಖ್ಯಾತಿಯನ್ನು ಪಡೆದಿರುವ ಎಬಿ ಡಿವಿಲಿಯರ್ಸ್ ಯುಎಇಯನ್ನು ತಲುಪಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡಿದ್ದರು.
ಇದೀಗ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡು 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸಿದ್ದ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ಮೊಹಮ್ಮದ್ ಸಿರಾಜ್ ಮ್ಯಾಂಚೆಸ್ಟರ್ ನಗರದಿಂದ ನೇರವಾಗಿ ದುಬೈಗೆ ವಿಶೇಷ ಚಾರ್ಟರ್ ವಿಮಾನದಲ್ಲಿ ಭಾನುವಾರ ಬೆಳಗ್ಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಇಬ್ಬರಿಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಶೇಷ ಚಾರ್ಟರ್ ವಿಮಾನವನ್ನು ಆಯೋಜಿಸಿದ್ದು ಭಾನುವಾರ (ಸೆಪ್ಟೆಂಬರ್ 12) ವಿರಾಟ್ ಕೊಹ್ಲಿ ಮತ್ತು ಮೊಹಮ್ಮದ್ ಸಿರಾಜ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಯುಎಇಯಲ್ಲಿ ಸೇರಿಕೊಳ್ಳಲಿದ್ದಾರೆ.
ಇನ್ನು ಸೆಪ್ಟೆಂಬರ್ 11ರ ಶನಿವಾರದಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ವೇಗಿ ಕೈಲ್ ಜೆಮಿಸನ್ ಯುಎಇ ತಲುಪಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡಿದ್ದಾರೆ. ಕೈಲ್ ಜೆಮಿಸನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡಿರುವ ವಿಷಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ತಿಳಿಸಿದೆ.
ಹದಿನಾಲ್ಕನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲನೇ ಸೆಣಸಾಟ ಯಾವಾಗ?
ಈ ಬಾರಿಯ ಐಪಿಎಲ್ ಟೂರ್ನಿ ಭಾರತದಲ್ಲಿ ಆರಂಭವಾದಾಗ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಿದ್ದವು. ಇದೀಗ ಯುಎಇಯಲ್ಲಿ ಸೆಪ್ಟೆಂಬರ್ 19 ರಿಂದ ಐಪಿಎಲ್ ಟೂರ್ನಿ ಮುಂದುವರಿಯಲಿದ್ದು ಸೆಪ್ಟೆಂಬರ್ 20ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯಾರ್ಧದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ತನ್ನ ಮೊದಲನೇ ಪಂದ್ಯವನ್ನಾಡಲಿದೆ.
ಇನ್ನು ಇಷ್ಟು ದಿನಗಳವರೆಗೆ ಇಂಗ್ಲೆಂಡ್‌ನಲ್ಲಿ ಬೀಡುಬಿಟ್ಟಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ಸಿರಾಜ್ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ನಿರತರಾಗಿದ್ದರು. ಎಲ್ಲಾ ಅಂದುಕೊಂಡಂತೆ ಆಗಿದ್ದರೆ ವಿರಾಟ್ ಕೊಹ್ಲಿ ಮತ್ತು ಮೊಹಮ್ಮದ್ ಸಿರಾಜ್ ಮುಂದಿನವಾರ ಯುಎಇ ಈ ಪ್ರಯಾಣವನ್ನು ಕೈಗೊಳ್ಳಬೇಕಿತ್ತು. ಆದರೆ ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯ ಕೊರೋನಾವೈರಸ್ ಭೀತಿಯಿಂದ ರದ್ದಾದ ಕಾರಣ ಒಂದು ವಾರ ಮುಂಚಿತವಾಗಿಯೇ ವಿರಾಟ್ ಕೊಹ್ಲಿ ಮತ್ತು ಮೊಹಮ್ಮದ್ ಸಿರಾಜ್ ದುಬೈಗೆ ಹಾರುತ್ತಿದ್ದಾರೆ. ಇನ್ನು ಪ್ರಸ್ತುತ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲಾರ್ಧದಲ್ಲಿ ಉತ್ತಮ ಪ್ರದರ್ಶನವನ್ನು ನೀಡಿತ್ತು, ಇದೀಗ ದ್ವಿತೀಯಾರ್ಧ ಆರಂಭವಾಗಲಿದ್ದು ಯಾವ ರೀತಿಯ ಪ್ರದರ್ಶನವನ್ನು ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.