CSK vs RCB: ಇತ್ತಂಡಗಳ ನಡುವಿನ ಮುಖಾಮುಖಿಯಲ್ಲಿ ಹೆಚ್ಚು ಪಂದ್ಯ ಸೋತು ನೆಲಕಚ್ಚಿರುವ ತಂಡವಿದು!

ಪ್ರಸ್ತುತ ನಡೆಯುತ್ತಿರುವ ಹದನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿನ 49ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಇನ್ನು ಈ ಬಾರಿಯ ಟೂರ್ನಿಯಲ್ಲಿ ಇತ್ತಂಡಗಳು ಇದು ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿದ್ದು, ಇದಕ್ಕೂ ಮುನ್ನ ನಡೆದಿದ್ದ ಪ್ರಥಮ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಜಯ ಸಾಧಿಸಿತ್ತು.
ಹೌದು, ಏಪ್ರಿಲ್ 12ರಂದು ನಡೆದಿದ್ದ ಟೂರ್ನಿಯ 22ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ರಾಬಿನ್ ಉತ್ತಪ್ಪ ಮತ್ತು ಶಿವಮ್ ದುಬೆ ಅಬ್ಬರದ ಆಟದ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 216 ರನ್ ಕಲೆಹಾಕಿ ಎದುರಾಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 217 ರನ್‌ಗಳ ಗುರಿಯನ್ನು ನೀಡಿತ್ತು. ಇನ್ನು ಈ ಬೃಹತ್ ಗುರಿಯನ್ನು ಬೆನ್ನತ್ತಿದ ಫಾಫ್ ಡು ಪ್ಲೆಸಿಸ್ ಪಡೆ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 193 ರನ್ ಕಲೆಹಾಕುವಲ್ಲಿ ಮಾತ್ರ ಶಕ್ತವಾಯಿತು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ 23 ರನ್‌ಗಳ ಭರ್ಜರಿ ಜಯ ಸಾಧಿಸಿ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದಿತ್ತು.
ಹೌದು, ಈ ಬಾರಿಯ ಟೂರ್ನಿಯಲ್ಲಿ ಆರಂಭದ ಪಂದ್ಯಗಳಲ್ಲಿ ರವೀಂದ್ರ ಜಡೇಜಾ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮೊದಲ ನಾಲ್ಕು ಪಂದ್ಯಗಳಲ್ಲಿ ಸೋತು ಕೆಟ್ಟ ಆರಂಭವನ್ನು ಪಡೆದುಕೊಂಡಿತ್ತು. ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಈ ಪಂದ್ಯದಲ್ಲಿ ಗೆಲ್ಲುವುದರ ಮೂಲಕ ಸೋಲಿನ ಸರಪಳಿಗೆ ಬ್ರೇಕ್ ಹಾಕಿತ್ತು. ಎಂ ಎಸ್ ಧೋನಿ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ಸ್ವೀಕರಿಸಿದ ನಂತರ ನಡೆದ ಮೊದಲ ಪಂದ್ಯದಲ್ಲಿಯೇ ತಂಡ ಗೆದ್ದು ಬೀಗಿದ್ದು, ಟೂರ್ನಿಯಲ್ಲಿನ ತಾನು ದಾಖಲಿಸಿದ ಮೂರನೇ ಗೆಲುವು ಇದಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 9 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು ಉಳಿದ 6 ಪಂದ್ಯಗಳಲ್ಲಿ ಸೋತಿದ್ದು 6 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದ್ದರೆ, 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು, ಉಳಿದ 5 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಹೀಗೆ ಇತ್ತಂಡಗಳೂ ಸಹ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳಬೇಕೆಂದರೆ ನಾಳೆ ( ಮೇ 4 ) ನಡೆಯಲಿರುವ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿವೆ. ಇನ್ನು ಇತ್ತಂಡಗಳ ನಡುವೆ ನಡೆದಿರುವ ಮುಖಾಮುಖಿ ಪಂದ್ಯಗಳಲ್ಲಿ ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಗೆದ್ದಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಒಟ್ಟಾರೆ ಐಪಿಎಲ್ ಮುಖಾಮುಖಿ
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಒಟ್ಟು 30 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ 20 ಪಂದ್ಯಗಳಲ್ಲಿ ಗೆದ್ದಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು 9 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದೊಂದು ಪಂದ್ಯ ಯಾವುದೇ ಫಲಿತಾಂಶವಿಲ್ಲದೇ ಅಂತ್ಯಗೊಂಡಿದೆ. ಈ ಮೂಲಕ ಇತ್ತಂಡಗಳ ಮುಖಾಮುಖಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸ್ಪಷ್ಟ ಮೇಲುಗೈ ಸಾಧಿಸಿದೆ.

ಕಳೆದ 5 ಪಂದ್ಯಗಳ ಮುಖಾಮುಖಿ
ಈ ಬಾರಿಯ ಆವೃತ್ತಿಯ ಪಂದ್ಯವೂ ಸೇರಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ನಡೆದಿರುವ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 4 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೇವಲ ಒಂದೇ ಒಂದು ಪಂದ್ಯದಲ್ಲಿ ಜಯ ಸಾಧಿಸಿದೆ. ಈ ಮೂಲಕ ಇತ್ತಂಡಗಳ ನಡುವೆ ನಡೆದಿರುವ ಕೊನೆ ಐದು ಪಂದ್ಯಗಳ ಮುಖಾಮುಖಿಯಲ್ಲಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಮೇಲುಗೈ ಸಾಧಿಸಿದೆ.

ಕಳೆದ ಆವೃತ್ತಿಯ ಮುಖಾಮುಖಿ
ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಚೆನ್ನೈ ಸೂಪರ್ ಕಿಂಗ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಲೀಗ್ ಹಂತದ ಎರಡು ಪಂದ್ಯಗಳಲ್ಲಿ ಸೆಣಸಾಟ ನಡೆಸಿ ಎರಡೂ ಪಂದ್ಯಗಳಲ್ಲಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸೋಲನ್ನು ಉಣಿಸಿ ಸ್ಪಷ್ಟ ಮೇಲುಗೈ ಸಾಧಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications