
15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 21ನೇ ಪಂದ್ಯದಲ್ಲಿ ನೂತನ ತಂಡ ಗುಜರಾತ್ ಟೈಟನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಂಬೈನ ಡಿ ವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿವೆ. ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ಫೀಲ್ಡಿಂಗ್ ಆಯ್ದುಕೊಂಡಿದೆ.
ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಲ್ಲಿಯವರೆಗೂ ತಲಾ 3 ಪಂದ್ಯಗಳಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಕಣಕ್ಕಿಳಿದಿವೆ. ಈ ಪೈಕಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ಎಲ್ಲಾ 3 ಪಂದ್ಯಗಳಲ್ಲಿಯೂ ಜಯ ಸಾಧಿಸುವುದರ ಮೂಲಕ 6 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದ್ದರೆ, ಕೇನ್ ವಿಲಿಯಮ್ಸನ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ರಾಜಸ್ಥಾನ್ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಗಳಲ್ಲಿ ಸೋತ ನಂತರ ತೃತೀಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲ್ಲುವುದರ ಮೂಲಕ ಗೆಲುವಿನ ಖಾತೆ ತೆರೆದಿದೆ.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆದ್ದು ವಿಶ್ವಾಸ ಪಡೆದಿರುವ ಸನ್ ರೈಸರ್ಸ್ ಹೈದರಾಬಾದ್ ತನ್ನ ನಾಲ್ಕನೇ ಪಂದ್ಯದಲ್ಲಿ ಟೂರ್ನಿಯಲ್ಲಿ ಸೋಲಿಲ್ಲದ ಸರದಾರನಂತೆ ಮೆರೆಯುತ್ತಿರುವ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ನಾಯಕ ಕೇನ್ ವಿಲಿಯಮ್ಸನ್ ಫೀಲ್ಡಿಂಗ್ ಆಯ್ದುಕೊಂಡಿದ್ದು, ಎದುರಾಳಿ ಗುಜರಾತ್ ಟೈಟನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.

ಆಡುವ ಬಳಗಗಳು
ಗುಜರಾತ್ ಟೈಟನ್ಸ್ ಆಡುವ ಬಳಗ: ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ರಶೀದ್ ಖಾನ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ, ದರ್ಶನ್ ನಲ್ಕಂಡೆ
ಸನ್ ರೈಸರ್ಸ್ ಹೈದರಾಬಾದ್ ಆಡುವ ಬಳಗ: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್(ನಾಯಕ), ರಾಹುಲ್ ತ್ರಿಪಾಠಿ, ನಿಕೋಲಸ್ ಪೂರನ್(ವಿಕೆಟ್ ಕೀಪರ್), ಐಡೆನ್ ಮಾರ್ಕ್ರಾಮ್, ಶಶಾಂಕ್ ಸಿಂಗ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್ಸೆನ್, ಉಮ್ರಾನ್ ಮಲಿಕ್, ಟಿ ನಟರಾಜನ್