ಪ್ರಸ್ತುತ ನಡೆಯುತ್ತಿರುವ 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 61ನೇ ಪಂದ್ಯ ಇಂದು (ಮೇ 14) ಸನ್ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ಮುಖಾಮುಖಿ ಏರ್ಪಟ್ಟಿದೆ.
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಕೇನ್ ವಿಲಿಯಮ್ಸನ್ ನಾಯಕತ್ವದ ಸನ್ರೈಸರ್ಸ್ ಹೈದರಾಬಾದ್ ಮೊದಲು ಬೌಲಿಂಗ್ ಮಾಡಲಿದೆ.
ಪ್ಲೇಆಫ್ ಹಂತಕ್ಕೇರುವ ಅವಕಾಶವನ್ನು ಹೆಚ್ಚಿಸಿಕೊಳ್ಳಲು ಎರಡೂ ತಂಡಗಳು ಈ ಪಂದ್ಯದಲ್ಲಿ ಜಿದ್ದಾಜಿದ್ದಿನ ಪೈಪೋಟಿಗೆ ಇಳಿಯುವುದರಲ್ಲಿ ಅನುಮಾನವಿಲ್ಲ. ಎರಡೂ ತಂಡಗಳಲ್ಲಿಯೂ ಸಾಕಷ್ಟು ಅದ್ಭುತ ಆಟಗಾರರು ಇರುವುದು ಪಂದ್ಯದ ರೋಚಕತೆಯನ್ನು ಹೆಚ್ಚಿಸಲಿದೆ.
ಇನ್ನು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಇತ್ತಂಡಗಳು ಈ ಪಂದ್ಯದ ಮೂಲಕ ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿದ್ದು, ಈ ಹಿಂದೆ ಇದೇ ಟೂರ್ನಿಯಲ್ಲಿ ಏಪ್ರಿಲ್ 15ರಂದು ನಡೆದಿದ್ದ ಪಂದ್ಯದಲ್ಲಿ ಮೊದಲ ಬಾರಿಗೆ ಎದುರುಗೊಂಡಿದ್ದವು ಹಾಗೂ ಆ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತ್ತು.
ಪ್ರಸ್ತುತ ಟೂರ್ನಿಯಲ್ಲಿ ಇಲ್ಲಿಯವರೆಗೂ 12 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಮಾತ್ರ ಗೆದ್ದು 7 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿ 10 ಅಂಕಗಳನ್ನು ಪಡೆದುಕೊಂಡಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದು, ಉಳಿದಿರುವ 2 ಪಂದ್ಯಗಳನ್ನು ಗೆದ್ದರೂ ಸಹ ಪ್ಲೇ ಆಫ್ ಪ್ರವೇಶಿಸುವ ಸಾಧ್ಯತೆಗಳು ತೀರಾ ಕಡಿಮೆ ಇವೆ.
ಇನ್ನು 11 ಪಂದ್ಯಗಳನ್ನಾಡಿರುವ ಸನ್ ರೈಸರ್ಸ್ ಹೈದರಾಬಾದ್ 5 ಪಂದ್ಯಗಳಲ್ಲಿ ಜಯ ಸಾಧಿಸಿ 6 ಪಂದ್ಯಗಳಲ್ಲಿ ಸೋಲು ಕಂಡು 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಈ ಪಂದ್ಯ ಸೇರಿ ಮೂರು ಪಂದ್ಯಗಳನ್ನು ಗೆದ್ದರೆ ಪ್ಲೇಆಫ್ ಪ್ರವೇಶಿಸುವ ಸಾಧ್ಯತೆ ಇರಲಿದೆ.
ಸನ್ ರೈಸರ್ಸ್ ಹೈದರಾಬಾದ್ ಆಡುವ 11ರ ಬಳಗ
ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ನಾಯಕ), ರಾಹುಲ್ ತ್ರಿಪಾಠಿ, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಏಡನ್ ಮಾರ್ಕ್ರಾಮ್, ಶಶಾಂಕ್ ಸಿಂಗ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್ಸೆನ್, ಉಮ್ರಾನ್ ಮಲಿಕ್, ಟಿ. ನಟರಾಜನ್
ಕೋಲ್ಕತ್ತಾ ನೈಟ್ ರೈಡರ್ಸ್ ಆಡುವ 11ರ ಬಳಗ
ಅಜಿಂಕ್ಯಾ ರಹಾನೆ, ವೆಂಕಟೇಶ್ ಐಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ಆಂಡ್ರೆ ರಸೆಲ್, ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್ ಕೀಪರ್), ರಿಂಕು ಸಿಂಗ್, ಸುನಿಲ್ ನರೈನ್, ಉಮೇಶ್ ಯಾದವ್, ಟೀಮ್ ಸೌಥಿ, ವರುಣ್ ಚಕ್ರವರ್ತಿ