
ಇಂದು ( ಮೇ 6 ) ಪ್ರಸ್ತುತ ಜರುಗುತ್ತಲಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದಲ್ಲಿ ಒಟ್ಟು ಎರಡು ಪಂದ್ಯಗಳು ಆಯೋಜನೆಗೊಂಡಿದ್ದವು. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಜಯ ಗಳಿಸಿದರೆ, ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಜಯ ಸಾಧಿಸಿದೆ.
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಈ ಪಂದ್ಯ ಈ ಬಾರಿಯ ಐಪಿಎಲ್ ಟೂರ್ನಿಯ ಲೀಗ್ ಹಂತದ 50ನೇ ಪಂದ್ಯವಾಗಿದ್ದು, ದೆಹಲಿಯ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಿತು.
ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆಯನ್ನು ಮಾಡಿಕೊಂಡಿದ್ದರು. 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 181 ರನ್ ಕಲೆಹಾಕಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲ್ಲಲು 182 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಫಿಲಿಪ್ ಸಾಲ್ಟ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ 16.4 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 187 ರನ್ ಕಲೆಹಾಕಿ 7 ವಿಕೆಟ್‌ಗಳ ಗೆಲುವನ್ನು ಕಂಡಿದೆ.
ಆರ್‌ಸಿಬಿ ಇನ್ನಿಂಗ್ಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆರಂಭಿಕ ಆಟಗಾರರಾಗಿ ನಾಯಕ ಫಾಫ್ ಡು ಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಕಣಕ್ಕಿಳಿದರು. ಡು ಪ್ಲೆಸಿಸ್ 32 ಎಸೆತಗಳಲ್ಲಿ 45 ರನ್ ಬಾರಿಸಿದರೆ, ವಿರಾಟ್ ಕೊಹ್ಲಿ 46 ಎಸೆತಗಳಲ್ಲಿ 55 ರನ್ ಬಾರಿಸಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗ್ಲೆನ್ ಮ್ಯಾಕ್ಸ್‌ವೆಲ್ ಗೋಲ್ಡನ್ ಡಕ್ಔಟ್ ಆದರೆ, ದಿನೇಶ್ ಕಾರ್ತಿಕ್ 9 ಎಸೆತಗಳಲ್ಲಿ 11 ರನ್ ಗಳಿಸಿ ಮತ್ತೆ ಪರದಾಡಿದರು.
ಆದರೆ ಮಹಿಪಾಲ್ ಲೊಮ್ರೊರ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇದೇ ಮೊದಲ ಬಾರಿಗೆ ತಂಡಕ್ಕೆ ದೊಡ್ಡ ಮಟ್ಟದಲ್ಲಿ ಆಸರೆಯಾಗುವಂತಹ ಇನ್ನಿಂಗ್ಸ್ ಆಡಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮಹಿಪಾಲ್ ಲೊಮ್ರೊರ್ 29 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್ ಸಹಿತ ಅಜೇಯ 54 ರನ್ ಗಳಿಸಿದರು. ಅಜುನ್ ರಾವತ್ 3 ಎಸೆತಗಳಲ್ಲಿ ಅಜೇಯ 8 ರನ್ ಗಳಿಸಿದರು.
ಡೆಲ್ಲಿ ಕ್ಯಾಪಿಟಲ್ಸ್ ಪರ ಮಿಚೆಲ್ ಮಾರ್ಷ್ ಎರಡು ವಿಕೆಟ್ ಪಡೆದರೆ, ಖಲೀಲ್ ಅಹ್ಮದ್ ಹಾಗೂ ಮುಕೇಶ್ ಕುಮಾರ್ ತಲಾ ಒಂದೊಂದು ವಿಕೆಟ್ ಪಡೆದಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ಇನ್ನಿಂಗ್ಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ನೀಡಿದ ಪೈಪೋಟಿಯುತ ಗುರಿಯನ್ನು ಬೆನ್ನತ್ತಲು ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್ ಶುರುವಿನಲ್ಲಿಯೇ ಅಬ್ಬರಿಸಿತು. ಡೇವಿಡ್ ವಾರ್ನರ್ ಹಾಗೂ ಫಿಲಿಪ್ ಸಾಲ್ಟ್ ಜೋಡಿ ಆರಂಭಿಕರಾಗಿ ಕಣಕ್ಕಿಳಿದು ಮೊದಲ 5 ಓವರ್‌ಗಳಲ್ಲಿಯೇ 60 ರನ್ ಕಲೆಹಾಕಿದ್ದರು.
ಡೇವಿಡ್ ವಾರ್ನರ್ 14 ಎಸೆತಗಳಲ್ಲಿ 22 ರನ್ ಗಳಿಸಿದರೆ, ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮಿಚೆಲ್ ಮಾರ್ಷ್ 17 ಎಸೆತಗಳಲ್ಲಿ 26 ರನ್ ಬಾರಿಸಿದರು, ರಿಲೇ ರೊಸ್ಸೊ 22 ಎಸೆತಗಳಲ್ಲಿ ಅಜೇಯ 33 ರನ್ ಗಳಿಸಿದರು ಹಾಗೂ ಅಕ್ಷರ್ ಪಟೇಲ್ 3 ಎಸೆತಗಳಲ್ಲಿ ಅಜೇಯ 8 ರನ್ ಬಾರಿಸಿದರು. ಪಿಲಿಫ್ ಸಾಲ್ಟ್ 45 ಎಸೆತಗಳಲ್ಲಿ 8 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 87 ರನ್ ಚಚ್ಚಿ ತಂಡದ ಗೆಲುವಿನ ರೂವಾರಿಯಾದರು.
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲಿಂಗ್ ವಿಭಾಗ ಮತ್ತೊಮ್ಮೆ ನೆಲಕಚ್ಚಿದೆ. ತಂಡ ನೀಡಿದ್ದ ಪೈಪೋಟಿಯುತ ಗುರಿಯನ್ನು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ಇನ್ನೂ 20 ಎಸೆತ ಬಾಕಿ ಇರುವಾಗಲೇ ಮುಟ್ಟುವಂತಹ ಕಳಪೆ ಬೌಲಿಂಗ್ ಪ್ರದರ್ಶನವನ್ನು ಆರ್‌ಸಿಬಿ ಬೌಲರ್ಸ್ ನೀಡಿದ್ದಾರೆ.
ತಂಡದ ಪರ ಹರ್ಷಲ್ ಪಟೇಲ್, ಜೋಶ್ ಹೇಜಲ್‌ವುಡ್ ಹಾಗೂ ಕರ್ಣ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದರು. ಹರ್ಷಲ್ ಪಟೇಲ್ ಹಾಗೂ ಸಿರಾಜ್ 16 ಹಾಗೂ 14ರ ಎಕಾನಮಿಯಲ್ಲಿ ರನ್ ನೀಡಿದ್ದಾರೆ. ತಂಡದ ಯಾವೊಬ್ಬ ಬೌಲರ್ ಸಹ 8ಕ್ಕಿಂತ ಕಡಿಮೆ ಎಕಾನಮಿಯಲ್ಲಿ ಬೌಲಿಂಗ್ ಮಾಡಿಲ್ಲ.
ಆಡುವ ಬಳಗಗಳು:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್(ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಕೇದಾರ್ ಜಾಧವ್, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಡೇವಿಡ್ ವಾರ್ನರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ರಿಲೀ ರೊಸೊವ್, ಮನೀಶ್ ಪಾಂಡೆ, ಅಮನ್ ಹಕೀಮ್ ಖಾನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮುಖೇಶ್ ಕುಮಾರ್, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್