ಶನಿವಾರ, ಏಪ್ರಿಲ್ 15ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಐಪಿಎಲ್‌ನ 20ನೇ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಉತ್ತಮ ಮೊತ್ತ ಕಲೆ ಹಾಕಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಆರ್‌ಸಿಬಿ ತಂಡ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿದ್ದು, ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 175 ರನ್‌ಗಳ ಸವಾಲಿನ ಗುರಿ ನೀಡಿದೆ.

ಆರ್‌ಸಿಬಿ ಪರ ಆರಂಭಿಕರಾದ ವಿರಾಟ್ ಕೊಹ್ಲಿ ಮತ್ತು ನಾಯಕ ಫಾಫ್ ಡು ಪ್ಲೆಸಿಸ್ ಮೊದಲ ವಿಕೆಟ್‌ಗೆ 4.4 ಓವರ್‌ಗಳಲ್ಲಿ 42 ರನ್ ಜೊತೆಯಾಟ ನೀಡಿದರು. ಈ ವೇಳೆ 16 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 22 ರನ್ ಗಳಿಸಿದ್ದ ಫಾಫ್ ಡು ಪ್ಲೆಸಿಸ್ ವಿಕೆಟ್ ಒಪ್ಪಿಸಿದರು.
ನಂತರ ಬಂದ ಮಹಿಪಾಲ್ ಲೊಮ್ರೊರ್ 18 ಎಸೆತಗಳಲ್ಲಿ 2 ಸಿಕ್ಸರ್ ಸಮೇತ 26 ರನ್ ಗಳಿಸಿ ಔಟಾದರು. ಆ ಬಳಿಕ ವಿರಾಟ್ ಕೊಹ್ಲಿ 34 ಎಸೆತಗಳಲ್ಲಿ 6 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 50 ರನ್ ಗಳಿಸಿ ಆಡುತ್ತಿದ್ದಾಗ ದೊಡ್ಡ ಹೊಡೆತಕ್ಕೆ ಮುಂದಾಗಿ ಬೌಂಡರಿ ಲೈನ್ ಬಳಿ ಕ್ಯಾಚ್ ನೀಡಿದರು.
ವಿರಾಟ್ ಕೊಹ್ಲಿ ವಿಕೆಟ್ ಬಳಿಕ ಕ್ರೀಸ್‌ಗೆ ಬಂದ ಗ್ಲೆನ್ ಮ್ಯಾಕ್ಸ್‌ವೆಲ್ ಆರಂಭದಿಂದಲೂ ಅಬ್ಬರದ ಬ್ಯಾಟಿಂಗ್‌ಗೆ ಇಳಿದರು. 14 ಎಸೆತಗಳಲ್ಲಿ 3 ಸಿಕ್ಸರ್ ಸಮೇತ 24 ರನ್ ಬಾರಿಸಿ ವಿಕೆಟ್ ಒಪ್ಪಿಸಿದಾಗ ಇಡೀ ಕ್ರೀಡಾಂಗಣ ಸ್ತಬ್ದವಾಗಿತ್ತು.

ಹರ್ಷಲ್ ಪಟೇಲ್ 1 ಸಿಕ್ಸರ್ ಬಾರಿಸಿ ಔಟಾದರೆ, ಇದೇ ವೇಳೆ ದಿನೇಶ್ ಕಾರ್ತಿಕ್ ಕೂಡ ಎದುರಿಸಿದ ಮೊದಲ ಎಸೆತದಲ್ಲಿಯೇ ವಿಕೆಟ್ ನೀಡಿ ನಿರಾಸೆ ಮೂಡಿಸಿದರು.
ನಂತರ ಜೊತೆಗೂಡಿದ ಶಹಬಾಜ್ ಅಹ್ಮದ್ ಮತ್ತು ಇಂಪ್ಯಾಕ್ಟ್ ಪ್ಲೇಯರ್ ಅನುಜ್ ರಾವತ್ ಮುರಿಯದ 7ನೇ ವಿಕೆಟ್‌ಗೆ 34 ಎಸೆತಗಳಲ್ಲಿ 42 ರನ್‌ಗಳ ಜೊತೆಯಾಟ ನೀಡಿ ತಂಡದ ಮೊತ್ತ 170ರ ಗಡಿ ದಾಟಿಸಿದರು. ಶಹಬಾಜ್ ಅಹ್ಮದ್ 12 ಎಸೆತಗಳಲ್ಲಿ 3 ಬೌಂಡರಿ ಸಮೇತ 20 ರನ್ ಗಳಿಸಿದರೆ, ಅನುಜ್ ರಾವತ್ 22 ಎಸೆತಗಳಲ್ಲಿ 15 ರನ್ ಗಳಿಸಿದರು.
ಇನ್ನು ಬೌಲಿಂಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಮಿಚೆಲ್ ಮಾರ್ಷ್ 4 ಓವರ್‌ಗಳಲ್ಲಿ 18 ರನ್ ನೀಡಿ 2 ವಿಕೆಟ್ ಪಡೆದು ಮಿಂಚಿದರೆ, ಕುಲದೀಪ್ ಯಾದವ್ 4 ಓವರ್‌ಗಳಲ್ಲಿ 23 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಅಕ್ಷರ್ ಪಟೇಲ್ ಮತ್ತು ಲಲಿತ್ ಯಾದವ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ಆರ್‌ಸಿಬಿ vs ಡೆಲ್ಲಿ ಕ್ಯಾಪಿಟಲ್ಸ್ ಆಡುವ 11ರ ಬಳಗ
ಆರ್‌ಸಿಬಿ ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಮಹಿಪಾಲ್ ಲೊಮ್ರೊರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವೇಯ್ನ್ ಪಾರ್ನೆಲ್, ವನಿಂದು ಹಸರಂಗ, ಹರ್ಷಲ್ ಪಟೇಲ್, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್.
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಡೇವಿಡ್ ವಾರ್ನರ್ (ನಾಯಕ), ಮಿಚೆಲ್ ಮಾರ್ಷ್, ಮನೀಶ್ ಪಾಂಡೆ, ಯಶ್ ಧುಲ್, ಅಕ್ಷರ್ ಪಟೇಲ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಅಮಾನ್ ಹಕೀಮ್ ಖಾನ್, ಲಲಿತ್ ಯಾದವ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಮುಸ್ತಾಫಿಜುರ್ ರೆಹಮಾನ್.