
ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಒಟ್ಟು ಎರಡು ಪಂದ್ಯಗಳು ಇಂದು ( ಏಪ್ರಿಲ್ 29 ) ಜರುಗುತ್ತಿವೆ. ಮಧ್ಯಾಹ್ನ ನಡೆಯಲಿರುವ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲವೆ. ರಾತ್ರಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ.
ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಈ ಪಂದ್ಯ ಲೀಗ್ ಹಂತದ 39ನೇ ಪಂದ್ಯವಾಗಿದ್ದು, ಈ ಪಂದ್ಯ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜರುಗಲಿದೆ.
ಇನ್ನು ಗುಜರಾತ್ ಟೈಟನ್ಸ್ ತಂಡ ಇಲ್ಲಿಯವರೆಗೂ 7 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು, ಕೇವಲ 2 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರೆ, 8 ಪಂದ್ಯಗಳನ್ನಾಡಿ ಕೇವಲ 3 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು 6 ಅಂಕಗಳನ್ನು ಪಡೆದುಕೊಂಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
ಹೀಗೆ ಅಂಕಪಟ್ಟಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಜತೆ ಹೋಲಿಕೆ ಮಾಡಿದರೆ ಉತ್ತಮ ಸ್ಥಾನದಲ್ಲಿರುವ ಗುಜರಾತ್ ಟೈಟನ್ಸ್ ಸೋತಿರುವ ಎರಡು ಪಂದ್ಯಗಳ ಪೈಕಿ ಒಂದು ಪಂದ್ಯ ಇದೇ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧವೇ. ಹೌದು, ಇಂದು ನಡೆಯಲಿರುವ ಪಂದ್ಯ ಇತ್ತಂಡಗಳ ನಡುವಿನ ಟೂರ್ನಿಯ ಎರಡನೇ ಪಂದ್ಯವಾಗಿದ್ದು, ಮೊದಲ ಬಾರಿಗೆ ಟೂರ್ನಿಯ 13ನೇ ಪಂದ್ಯದಲ್ಲಿ ಇತ್ತಂಡಗಳು ಮುಖಾಮುಖಿಯಾಗಿದ್ದವು.
ಏಪ್ರಿಲ್ 9ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 204 ರನ್ ಕಲೆಹಾಕಿ ಕೊಲ್ಕತ್ತಾ ನೈಟರ್ ರೈಡರ್ಸ್ ತಂಡಕ್ಕೆ ಗೆಲ್ಲಲು 205 ರನ್‌ಗಳ ಗುರಿಯನ್ನು ನೀಡಿತ್ತು. ರಿಂಕು ಸಿಂಗ್ ಕೊನೆಯ ಐದು ಎಸೆತಗಳಲ್ಲಿ ಐದು ಸಿಕ್ಸರ್ ಚಚ್ಚಿದ ಪರಿಣಾಮ ಕೊಲ್ಕತ್ತಾ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿ 3 ವಿಕೆಟ್‌ಗಳ ರೋಚಕ ಗೆಲುವನ್ನು ಕಂಡಿತ್ತು.
ಹೀಗೆ ಮೊದಲ ಪಂದ್ಯದಲ್ಲಿದ್ದ ಗೆಲ್ಲುವ ಅವಕಾಶವನ್ನು ಕೊನೆಯ ಓವರ್‌ನಲ್ಲಿ ಕೈಚೆಲ್ಲಿದ ಗುಜರಾತ್ ಟೈಟನ್ಸ್ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೇಡು ತೀರಿಸಿಕೊಳ್ಳುವ ಯೋಜನೆಯಲ್ಲಿದೆ. ಇನ್ನು ಟೂರ್ನಿಯಲ್ಲಿ ಕಡಿಮೆ ಗೆಲುವನ್ನು ಕಂಡು ಉತ್ತಮ ಸ್ಥಿತಿಯಲ್ಲಿ ಇಲ್ಲದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗೆಲ್ಲುವತ್ತ ಚಿತ್ತ ನೆಟ್ಟಿದೆ.
ಇನ್ನು ಇದು ಈ ಬಾರಿಯ ಐಪಿಎಲ್ ಟೂರ್ನಿಯ ಮುಖಾಮುಖಿ ಫಲಿತಾಂಶವಾದರೆ ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಇತ್ತಂಡಗಳು ಮುಖಾಮುಖಿಯಾಗಿದ್ದಾಗ ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 156 ರನ್ ಕಲೆಹಾಕಿ ಎದುರಾಳಿ ಕೊಲ್ಕತ್ತಾ ನೈಟರ್ ರೈಡರ್ಸ್ ತಂಡಕ್ಕೆ ಗೆಲ್ಲಲು 157 ರನ್‌ಗಳ ಗುರಿಯನ್ನು ನೀಡಿತ್ತು. ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾಗಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 148 ರನ್ ಕಲೆಹಾಕಿತ್ತು. ಈ ಮೂಲಕ ಗುಜರಾತ್ ಟೈಟನ್ಸ್ 8 ರನ್‌ಗಳ ಗೆಲುವನ್ನು ಕಂಡಿತ್ತು.
ಒಟ್ಟಿನಲ್ಲಿ ಐಪಿಎಲ್ ಇತಿಹಾಸದಲ್ಲಿ ಇತ್ತಂಡಗಳ ನಡುವೆ 2 ಪಂದ್ಯಗಳು ಜರುಗಿದ್ದು, ಎರಡೂ ತಂಡಗಳು ಸಹ ತಲಾ ಒಂದೊಂದು ಪಂದ್ಯದಲ್ಲಿ ಗೆದ್ದು ಸಮಬಲ ಸಾಧಿಸಿವೆ.