
ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 62ನೇ ಪಂದ್ಯ ಇಂದು ( ಮೇ 15 ) ನಡೆಯುತ್ತಿದೆ. ಈ ಪಂದ್ಯದಲ್ಲಿ ಟೇಬಲ್ ಟಾಪರ್ಸ್ ಗುಜರಾತ್ ಟೈಟನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ.
ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಏಡನ್ ಮಾರ್ಕ್ರಮ್ ಫೀಲ್ಡಿಂಗ್ ಆಯ್ದುಕೊಂಡಿದ್ದು ತಮ್ಮ ಎದುರಾಳಿ ಗುಜರಾತ್ ಟೈಟನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಲ್ಯಾವೆಂಡರ್ ಬಣ್ಣದ ಜೆರ್ಸಿ ತೊಟ್ಟು ಕಣಕ್ಕಿಳಿದಿದ್ದು, ಕ್ಯಾನ್ಸರ್ ರೋಗದ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡಲಿದೆ.
ಆಡುವ ಬಳಗಗಳು:
ಸನ್ ರೈಸರ್ಸ್ ಹೈದರಾಬಾದ್ ಆಡುವ ಬಳಗ: ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್(ನಾಯಕ), ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಅಬ್ದುಲ್ ಸಮದ್, ಸನ್ವಿರ್ ಸಿಂಗ್, ಮಯಾಂಕ್ ಮಾರ್ಕಂಡೆ, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಫಜಲ್ಹಕ್ ಫಾರೂಕಿ, ಟಿ ನಟರಾಜನ್
ಗುಜರಾತ್ ಟೈಟನ್ಸ್ ಆಡುವ ಬಳಗ: ಶುಭಮನ್ ಗಿಲ್, ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ದಾಸುನ್ ಶನಕ, ರಾಹುಲ್ ತೆವಾಟಿಯಾ, ಮೋಹಿತ್ ಶರ್ಮಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್
ಗುಜರಾತ್ ಟೈಟನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದ ಲೈವ್ ಸ್ಕೋರ್ ಇಲ್ಲಿದೆ..
ಇನ್ನು ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 12 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, 11 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
ಹೀಗೆ ಗುಜರಾತ್ ಟೈಟನ್ಸ್ ಒಳ್ಳೆಯ ಪ್ರದರ್ಶನವನ್ನು ನೀಡುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಸನ್ ರೈಸರ್ಸ್ ಹೈದರಾಬಾದ್ ಕಳಪೆ ಪ್ರದರ್ಶನದ ಕಾರಣದಿಂದಾಗಿ ಹೀನಾಯ ಸ್ಥಾನದಲ್ಲಿದೆ. ಈ ಕಾರಣದಿಂದಾಗಿ ಈ ಪಂದ್ಯ ಬಲಿಷ್ಠರು ಹಾಗೂ ಕನಿಷ್ಠರ ನಡುವಿನ ಸೆಣಸಾಟ ಎಂದೇ ಹೇಳಬಹುದಾಗಿದ್ದು, ಈ ಪಂದ್ಯದಲ್ಲಿ ಗೆದ್ದರೆ ಗುಜರಾತ್ ಟೈಟನ್ಸ್ ಅಧಿಕೃತವಾಗಿ ಪ್ಲೇಆಫ್ ಪ್ರವೇಶಿಸಲಿರುವ ಪ್ರಥಮ ತಂಡ ಎನಿಸಿಕೊಳ್ಳಲಿದೆ.
ಇನ್ನು ಸನ್ ರೈಸರ್ಸ್ ಹೈದರಾಬಾದ್ ತಂಡ ಈ ಪಂದ್ಯವೂ ಸೇರಿದಂತೆ ಒಟ್ಟು 3 ಪಂದ್ಯಗಳಲ್ಲಿ ಕಣಕ್ಕಿಳಿಯಲಿದ್ದು ಈ ಎಲ್ಲಾ ಪಂದ್ಯಗಳಲ್ಲಿಯೂ ಗೆದ್ದರೂ ಸಹ ಒಟ್ಟು 14 ಅಂಕಗಳನ್ನು ಗಳಿಸಲಿದ್ದು ಪ್ಲೇಆಫ್ ಪ್ರವೇಶಿಸುವುದು ಅನುಮಾನವೆಂದೇ ಹೇಳಬಹುದು.