
ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 65 ನೇ ಪಂದ್ಯ ಇಂದು ( ಮೇ 18 ) ಹೈದರಾಬಾದಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಜರುಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು 8 ವಿಕೆಟ್‌ಗಳ ಜಯ ಸಾಧಿಸಿ ಪ್ಲೇಆಫ್‌ಗೆ ಮತ್ತಷ್ಟು ಸನಿಹವಾಗಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಫೀಲ್ಡಿಂಗ್ ಆಯ್ದುಕೊಂಡು, ಎದುರಾಳಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದರು.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ಹೆನ್ರಿಚ್ ಕ್ಲಾಸೆನ್ ಅಬ್ಬರದ ಶತಕದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 186 ರನ್ ಕಲೆಹಾಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು 187 ರನ್‌ಗಳ ಗುರಿಯನ್ನು ನೀಡಿತ್ತು.
ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರಾಟ್ ಕೊಹ್ಲಿ ಅಬ್ಬರದ ಶತಕ ಹಾಗೂ ಫಾಫ್ ಡು ಪ್ಲೆಸಿಸ್ ಸ್ಪೋಟಕ ಆಟದ ನೆರವಿನಿಂದ 19.2 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 187 ರನ್ ಬಾರಿಸಿ ಭರ್ಜರಿ ಗೆಲುವು ಸಾಧಿಸಿದೆ.
ಸನ್ ರೈಸರ್ಸ್ ಹೈದರಾಬಾದ್ ಇನ್ನಿಂಗ್ಸ್: ಪರ ಆರಂಭಿಕ ಆಟಗಾರರಾಗಿ ಅಭಿಷೇಕ್ ಶರ್ಮಾ ಹಾಗೂ ರಾಹುಲ್ ತ್ರಿಪಾಠಿ ಕಣಕ್ಕಿಳಿದರು. ಅಭಿಷೇಕ್ ಶರ್ಮಾ 11 ರನ್ ಹಾಗೂ ರಾಹುಲ್ ತ್ರಿಪಾಠಿ 15 ರನ್ ಕಲೆಹಾಕಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಏಡನ್ ಮಾರ್ಕ್ರಮ್ 18 ರನ್ ದಾಖಲಿಸಿದರು. ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹೆನ್ರಿಚ್ ಕ್ಲಾಸೆನ್ 51 ಎಸೆತಗಳಲ್ಲಿ 8 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 104 ರನ್ ಕಲೆಹಾಕಿದರು. ಇನ್ನುಳಿದಂತೆ ಗ್ಲೆನ್ ಫಿಲಿಪ್ಸ್ 5 ರನ್ ಹಾಗೂ ಹ್ಯಾರಿ ಬ್ರೂಕ್ 19 ಎಸೆತಗಳಲ್ಲಿ ಅಜೇಯ 27 ರನ್ ಗಳಿಸಿದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಮೈಕೆಲ್ ಬ್ರೇಸ್‌ವೆಲ್ ಎರಡು ವಿಕೆಟ್, ಮೊಹಮ್ಮದ್ ಸಿರಾಜ್, ಶಹಬಾಜ್ ಅಹ್ಮದ್ ಹಾಗೂ ಹರ್ಷಲ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನಿಂಗ್ಸ್: ಸನ್ ರೈಸರ್ಸ್ ಹೈದರಾಬಾದ್ ನೀಡಿದ ಪೈಪೋಟಿಯುತ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆರಂಭಿಕ ಆಟಗಾರರಾಗಿ ವಿರಾಟ್ ಕೊಹ್ಲಿ ಹಾಗೂ ಫಾಫ್ ಡು ಪ್ಲೆಸಿಸ್ ಕಣಕ್ಕಿಳಿದರು. ಈ ಪೈಕಿ ವಿರಾಟ್ ಕೊಹ್ಲಿ 63 ಎಸೆತಗಳಲ್ಲಿ 12 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 100 ರನ್ ಗಳಿಸಿದರೆ, ಫಾಫ್ ಡು ಪ್ಲೆಸಿಸ್ 47 ಎಸೆತಗಳಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 71 ರನ್ ಗಳಿಸಿದರು. ಇನ್ನುಳಿದಂತೆ ಗ್ಲೆನ್ ಮ್ಯಾಕ್ಸ್‌ವೆಲ್ ಅಜೇಯ 5 ಹಾಗೂ ಮೈಕೆಲ್ ಬ್ರೇಸ್‌ವೆಲ್ ಅಜೇಯ 4 ರನ್ ಬಾರಿಸಿದರು.
ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿಕೆ ಕಂಡರೆ, ವಿರಾಟ್ ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆರನೇ ಶತಕ ಬಾರಿಸಿ ದಾಖಲೆ ಬರೆದರು. ಸನ್ ರೈಸರ್ಸ್ ಹೈದರಾಬಾದ್ ಪರ ಟಿ ನಟರಾಜನ್ ಹಾಗೂ ಭುವನೇಶ್ವರ್ ಕುಮಾರ್ ತಲಾ ಒಂದೊಂದು ವಿಕೆಟ್ ಪಡೆದರು.
ಆಡುವ ಬಳಗಗಳು:
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ಅನುಜ್ ರಾವತ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಮೈಕಲ್ ಬ್ರೇಸ್‌ವೆಲ್, ವೇಯ್ನ್ ಪಾರ್ನೆಲ್, ಹರ್ಷಲ್ ಪಟೇಲ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್
ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI): ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಂ(ನಾಯಕ), ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಹ್ಯಾರಿ ಬ್ರೂಕ್, ಗ್ಲೆನ್ ಫಿಲಿಪ್ಸ್, ಅಬ್ದುಲ್ ಸಮದ್, ಕಾರ್ತಿಕ್ ತ್ಯಾಗಿ, ಮಯಾಂಕ್ ದಾಗರ್, ಭುವನೇಶ್ವರ್ ಕುಮಾರ್, ನಿತೀಶ್ ರೆಡ್ಡಿ