
ಇಂದು ( ಮೇ 6 ) ಪ್ರಸ್ತುತ ಜರುಗುತ್ತಲಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದಲ್ಲಿ ಒಟ್ಟು ಎರಡು ಪಂದ್ಯಗಳು ಆಯೋಜನೆಗೊಂಡಿದ್ದವು. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಜಯ ಗಳಿಸಿದರೆ, ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ.
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಈ ಪಂದ್ಯ ಈ ಬಾರಿಯ ಐಪಿಎಲ್ ಟೂರ್ನಿಯ ಲೀಗ್ ಹಂತದ 50ನೇ ಪಂದ್ಯವಾಗಿದ್ದು, ದೆಹಲಿಯ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ಜರುಗುತ್ತಿದೆ.
ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆಯನ್ನು ಮಾಡಿಕೊಂಡಿದ್ದರು. ಕಳೆದ ಬಾರಿಯ ಪಂದ್ಯದಲ್ಲಿಯೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿ ಗೆದ್ದಿದ್ದ ಆರ್‌ಸಿಬಿ ಈ ಪಂದ್ಯದಲ್ಲಿಯೂ ಅದೇ ಮಾದರಿಯನ್ನು ಅನುಸರಿಸಿದ್ದು, ಅದೇ ರೀತಿ ಪೈಪೋಟಿಯುತ ಗುರಿ ನೀಡುವಲ್ಲಿ ಯಶಸ್ವಿಯಾಗಿದೆ.
20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 181 ರನ್ ಕಲೆಹಾಕಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲ್ಲಲು 182 ರನ್‌ಗಳ ಗುರಿಯನ್ನು ನೀಡಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆರಂಭಿಕ ಆಟಗಾರರಾಗಿ ನಾಯಕ ಫಾಫ್ ಡು ಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಕಣಕ್ಕಿಳಿದರು. ಡು ಪ್ಲೆಸಿಸ್ 32 ಎಸೆತಗಳಲ್ಲಿ 45 ರನ್ ಬಾರಿಸಿದರೆ, ವಿರಾಟ್ ಕೊಹ್ಲಿ 46 ಎಸೆತಗಳಲ್ಲಿ 55 ರನ್ ಬಾರಿಸಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗ್ಲೆನ್ ಮ್ಯಾಕ್ಸ್‌ವೆಲ್ ಗೋಲ್ಡನ್ ಡಕ್ಔಟ್ ಆದರೆ, ದಿನೇಶ್ ಕಾರ್ತಿಕ್ 9 ಎಸೆತಗಳಲ್ಲಿ 11 ರನ್ ಗಳಿಸಿ ಮತ್ತೆ ಪರದಾಡಿದರು.
ಆದರೆ ಮಹಿಪಾಲ್ ಲೊಮ್ರೊರ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇದೇ ಮೊದಲ ಬಾರಿಗೆ ತಂಡಕ್ಕೆ ದೊಡ್ಡ ಮಟ್ಟದಲ್ಲಿ ಆಸರೆಯಾಗುವಂತಹ ಇನ್ನಿಂಗ್ಸ್ ಆಡಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮಹಿಪಾಲ್ ಲೊಮ್ರೊರ್ 29 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್ ಸಹಿತ ಅಜೇಯ 54 ರನ್ ಗಳಿಸಿದರು. ಅಜುನ್ ರಾವತ್ 3 ಎಸೆತಗಳಲ್ಲಿ ಅಜೇಯ 8 ರನ್ ಗಳಿಸಿದರು.
ಮಹಿಪಾಲ್ ಲೊಮ್ರೊರ್ ಈ ಇನ್ನಿಂಗ್ಸ್ ಮೂಲಕ ತನ್ನ ವಿರುದ್ಧ ಹರಿದಾಡಿದ್ದ ಟ್ರೋಲ್‌ಗಳಿಗೆ ತಕ್ಕ ಉತ್ತರ ನೀಡಿದ್ದಾರೆ. ಅಷ್ಟೇ ಅಲ್ಲದೇ ಮಧ್ಯಮ ಕ್ರಮಾಂಕದಲ್ಲಿ ಯಾವೊಬ್ಬ ಆಟಗಾರನೂ ತಂಡಕ್ಕೆ ಆಸರೆಯಾಗುವುದಿಲ್ಲ ಎಂಬ ಆರೋಪ ಈ ಪಂದ್ಯದಲ್ಲಿ ಬಾರದ ಹಾಗೆ ನೋಡಿಕೊಂಡಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ಪರ ಮಿಚೆಲ್ ಮಾರ್ಷ್ ಎರಡು ವಿಕೆಟ್ ಪಡೆದರೆ, ಖಲೀಲ್ ಅಹ್ಮದ್ ಹಾಗೂ ಮುಕೇಶ್ ಕುಮಾರ್ ತಲಾ ಒಂದೊಂದು ವಿಕೆಟ್ ಪಡೆದಿದ್ದಾರೆ.
ಆಡುವ ಬಳಗಗಳು:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್(ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಕೇದಾರ್ ಜಾಧವ್, ವನಿಂದು ಹಸರಂಗ, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಡೇವಿಡ್ ವಾರ್ನರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ರಿಲೀ ರೊಸೊವ್, ಮನೀಶ್ ಪಾಂಡೆ, ಅಮನ್ ಹಕೀಮ್ ಖಾನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮುಖೇಶ್ ಕುಮಾರ್, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್