ಭಾನುವಾರ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2023ನೇ ಆವೃತ್ತಿಯ 13ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ. ಆಡಿರುವ ಎರಡೂ ಪಂದ್ಯಗಳಲ್ಲಿ ಗೆದ್ದಿರುವ ಗುಜರಾತ್ ಜೈಂಟ್ಸ್ ಮೂರನೇ ಜಯ ಸಾಧಿಸುವ ಉತ್ಸಾಹದಲ್ಲಿದೆ.
ಗುರುವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ 81 ರನ್‌ಗಳ ಜಯ ಸಾಧಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಅಂಕಪಟ್ಟಿಯಲ್ಲಿ 7ನೇ ಸ್ಥಾನದಿಂದ 3ನೇ ಸ್ಥಾನಕ್ಕೆ ಜಿಗಿತ ಕಂಡಿದೆ. ಅವರು ತಮ್ಮ ಮೊದಲನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 7 ರನ್‌ಗಳಿಂದ ಸೋಲನುಭವಿಸಿದ್ದರು, ಎರಡನೇ ಪಂದ್ಯದಲ್ಲೇ ಗೆಲುವಿನ ಹಳಿಗೆ ಬಂದರು.

ಅವರು ಮೂರನೇ ಪಂದ್ಯಕ್ಕಾಗಿ ಅಹಮದಾಬಾದ್‌ಗೆ ಪ್ರಯಾಣ ಮಾಡಿದ್ದು, ಎರಡನೇ ಗೆಲುವು ಸಾಧಿಸುವ ವಿಶ್ವಾಸದಲ್ಲಿದ್ದಾರೆ. ಕಳೆದ ಪಂದ್ಯದಲ್ಲಿ ಸುನಿಲ್ ನರೈನ್ ಮತ್ತು ವರುಣ್ ಚಕ್ರವರ್ತಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಶಾರ್ದೂಲ್ ಠಾಕೂರ್ ಈ ಬಾರಿ ಐಪಿಎಲ್‌ನ ವೇಗದ ಅರ್ಧಶತಕ ಗಳಿಸಿ ಮಿಂಚಿದ್ದರು, ಅಲ್ಲದೆ ಇಂಪ್ಯಾಕ್ಟ್ ಆಟಗಾರರಾಗಿ ಬಂದ ಸುಯಶ್ ಕೂಡ ಮೂರು ವಿಕೆಟ್ ಪಡೆದುಕೊಂಡಿದ್ದರು.
ತಂಡದ ಪ್ರಮುಖ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಐಪಿಎಲ್‌ನಿಂದ ಹಿಂದೆ ಸರಿದ ಬಳಿಕ ಬದಲೀ ಆಟಗಾರರಾಗಿ ಆಯ್ಕೆಯಾಗಿರುವ ಇಂಗ್ಲೆಂಡ್‌ನ ಬ್ಯಾಟರ್ ಜೇಸನ್ ರಾಯ್ ಈಗಾಗಲೇ ತಂಡವನ್ನು ಸೇರಿಕೊಂಡಿದ್ದು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕೆ ಲಭ್ಯವಿದ್ದಾರೆ. ಆದರೆ, ಯಾರ ಬದಲಾಗಿ ಅವರು ಸ್ಥಾನ ಪಡೆಯುತ್ತಾರೆ ಎನ್ನುವುದು ಸದ್ಯದ ಕುತೂಹಲವಾಗಿದೆ.

ಆಡಿದ ಮೊದಲ ಎರಡೂ ಪಂದ್ಯಗಳನ್ನು ಗೆದ್ದಿರುವ ಗುಜರಾತ್ ಟೈಟನ್ಸ್ ಮೂರನೇ ಪಂದ್ಯವನ್ನು ಗೆಲ್ಲುವ ಉತ್ಸಾಹದಲ್ಲಿದ್ದಾರೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವುದು ತಂಡದ ಪ್ರಮುಖ ಶಕ್ತಿಯಾಗಿದೆ. ರಶೀದ್ ಖಾನ್, ಮಿಲ್ಲರ್, ಪಾಂಡ್ಯ, ಸಾಯಿ ಸುದರ್ಶನ್, ಶುಭಮನ್ ಗಿಲ್ ತಂಡದ ಪ್ರಮುಖ ಶಕ್ತಿಯಾಗಿದ್ದಾರೆ.
ಹೆಡ್ ಟು ಹೆಡ್ ಮತ್ತು ಪಿಚ್ ವರದಿ
ಎರಡೂ ತಂಡಗಳು ಐಪಿಎಲ್‌ನಲ್ಲಿ ಇದುವರೆಗೂ ಕೇವಲ ಒಂದು ಬಾರಿ ಮಾತ್ರ ಮುಖಾಮುಖಿಯಾಗಿದ್ದು ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಗೆಲುವು ಸಾಧಿಸಿದೆ. ಅಹಮದಾಬಾದ್ ಪಿಚ್ ಸಾಮಾನ್ಯವಾಗಿ ಬ್ಯಾಟರ್ ಗಳಿಗೆ ಹೆಚ್ಚಿನ ನೆರವು ನೀಡುತ್ತದೆ. ಗುಜರಾತ್ ಟೈಟನ್ಸ್ ಆಡಿದ ಉದ್ಘಾಟನಾ ಪಂದ್ಯದಲ್ಲಿ 179 ರನ್‌ಗಳನ್ನು ಯಶಸ್ವಿಯಾಗಿ ಚೇಸ್ ಮಾಡಿತ್ತು. ಟಾಸ್ ಗೆಲ್ಲುವ ತಂಡ ಮೊದಲು ಬೌಲಿಂಗ್ ಮಾಡುವ ಸಾಧ್ಯತೆ ಇದೆ.

ಉಭಯ ತಂಡಗಳ ಸಂಭಾವ್ಯ ಆಡುವ ಬಳಗ
ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಜೋಶುವಾ ಲಿಟಲ್, ಯಶ್ ದಯಾಳ್.
ಕೋಲ್ಕತ್ತಾ ನೈಟ್ ರೈಡರ್ಸ್: ಮನದೀಪ್ ಸಿಂಗ್, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಶಾರ್ದೂಲ್ ಠಾಕೂರ್, ಸುನಿಲ್ ನರೈನ್, ಟಿಮ್ ಸೌಥಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ.