
ನಿನ್ನೆ ( ಮೇ 13 ) ನಡೆದ ಎರಡು ಪಂದ್ಯಗಳ ಮೂಲಕ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 59 ಪಂದ್ಯಗಳು ಮುಕ್ತಾಯಗೊಂಡಿವೆ. ಮಧ್ಯಾಹ್ನ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಜಯ ಸಾಧಿಸಿತು.
ಬಳಿಕ ರಾತ್ರಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಜಯವನ್ನು ಸಾಧಿಸಿತು. ಈ ಗೆಲುವಿನ ಮೂಲಕ ಪಂಜಾಬ್ ಕಿಂಗ್ಸ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ಲೇಆಫ್ ರೇಸ್‌ನಿಂದ ಹೊರಹಾಕಿತು ಹಾಗೂ ತನ್ನ ಪ್ಲೇಆಫ್ ಹಾದಿಯನ್ನು ಸುಗಮ ಮಾಡಿಕೊಂಡಿತು.
ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡ ಗೆಲುವು ಕಾಣುವ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿಕೆ ಕಂಡು ತನ್ನ ಪ್ಲೇಆಫ್ ಹಾದಿಯನ್ನು ಮತ್ತಷ್ಟು ಸುಲಭ ಮಾಡಿಕೊಂಡಿತು. ಹೀಗೆ ನಿನ್ನೆ ನಡೆದ ಪಂದ್ಯಗಳಲ್ಲಿ ಸೋತಂತಹ ತಂಡಗಳು ಪ್ಲೇಆಫ್ ಆಸೆಯನ್ನು ಕೈಬಿಡಬೇಕಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ಅಧಿಕೃತವಾಗಿ ಪ್ಲೇಆಫ್ ರೇಸ್‌ನಿಂದ ಹೊರಬಿದ್ದರೆ ಸನ್ ರೈಸರ್ಸ್ ಹೈದರಾಬಾದ್ ಸಹ ಇದೇ ಹಾದಿಯಲ್ಲಿದೆ. ಇನ್ನೂ ಎರಡು ಪಂದ್ಯಗಳಲ್ಲಿ ಸನ್ ರೈಸರ್ಸ್ ಹೈದರಾಬಾದ್ ಕಣಕ್ಕಿಳಿಯಲಿದ್ದು, ಈ ಎರಡೂ ಪಂದ್ಯಗಳಲ್ಲಿ ಗೆದ್ದರೂ 16 ಅಂಕಗಳನ್ನು ಪಡೆಯುವಲ್ಲಿ ತಂಡ ಎಡವಲಿದೆ. ಹೀಗಾಗಿ ಸನ್ ರೈಸರ್ಸ್ ಹೈದರಾಬಾದ್ ಸಹ ಪ್ಲೇಆಫ್ ತಲುಪುವುದಿಲ್ಲ ಎಂದೇ ಹೇಳಬಹುದಾಗಿದೆ.
ಇನ್ನುಳಿದಂತೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ್ದೂ ಸಹ ಇದೇ ಕಥೆ. ಈ ತಂಡವೂ ಸಹ ಇನ್ನೆರಡು ಪಂದ್ಯಗಳಲ್ಲಿ ಕಣಕ್ಕಿಳಿಯಲಿದ್ದು, ಈ ಎರಡೂ ಪಂದ್ಯಗಳನ್ನೂ ಗೆದ್ದರೂ 16 ಅಂಕಗಳನ್ನು ಪಡೆಯಲಾಗದೇ ಪ್ಲೇಆಫ್ ಅರ್ಹತೆ ಗಿಟ್ಟಿಸಿಕೊಳ್ಳುವಲ್ಲಿ ವಿಫಲವಾಗಲಿದೆ.
ಇದಿಷ್ಟು ಈ ತಂಡಗಳ ಕಥೆಯಾದರೆ ಇನ್ನುಳಿದ ತಂಡಗಳು ಪ್ಲೇಆಫ್ ಪ್ರವೇಶಿಸಲು ಉಳಿದ ಪಂದ್ಯಗಳ ಪೈಕಿ ಎಷ್ಟರಲ್ಲಿ ಗೆಲ್ಲಬೇಕು ಎಂಬ ಮಾಹಿತಿ ಈ ಕೆಳಕಂಡಂತಿದೆ..
1. 12 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಇನ್ನೊಂದು ಪಂದ್ಯವನ್ನು ಗೆದ್ದರೂ ಗುಜರಾತ್ ಟೈಟನ್ಸ್ ತಂಡ ಪ್ಲೇಆಫ್ ಸುತ್ತಿಗೆ ಲಗ್ಗೆ ಇಡಲಿದೆ. ಉಳಿದಿರುವ 2 ಪಂದ್ಯಗಳ ಪೈಕಿ ಎಲ್ಲಾ ಪಂದ್ಯಗಳನ್ನು ಸೋತರೂ ಸಹ ಗುಜರಾತ್ ಟೈಟನ್ಸ್ ಟಾಪ್ 4ರಲ್ಲಿ ಇರಲಿದೆ.
2. 12 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಇನ್ನುಳಿದ 2 ಪಂದ್ಯಗಳ ಪೈಕಿ ಒಂದು ಪಂದ್ಯದಲ್ಲಿ ಗೆದ್ದರೂ ಪ್ಲೇಆಫ್ ಸುತ್ತಿಗೆ ಲಗ್ಗೆ ಇಡಲಿದೆ.
3. 12 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, ಇನ್ನುಳಿದ 2 ಪಂದ್ಯಗಳ ಪೈಕಿ ಒಂದು ಪಂದ್ಯದಲ್ಲಿ ಗೆದ್ದರೂ ಪ್ಲೇಆಫ್ ಸುತ್ತಿಗೆ ಲಗ್ಗೆ ಇಡಲಿದೆ..
4. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 13 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಈ ತಂಡ ಇನ್ನುಳಿದ ಎರಡು ಪಂದ್ಯಗಳನ್ನೂ ಸಹ ಗೆಲ್ಲಲೇಬೇಕಿದೆ.
5. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದು, ಪ್ಲೇಆಫ್ ಪ್ರವೇಶಿಸಲು ಇನ್ನುಳಿದ 2 ಪಂದ್ಯಗಳನ್ನು ಕಡ್ಡಾಯವಾಗಿ ಗೆಲ್ಲಲೇಬೇಕಿದೆ..
6. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಪಂಜಾಬ್ ಕಿಂಗ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದು, ಇನ್ನುಳಿದ ಎರಡು ಪಂದ್ಯಗಳನ್ನು ಗೆಲ್ಲಲೇಬೇಕಿದೆ.
7. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದು, ಇನ್ನುಳಿದ ಮೂರು ಪಂದ್ಯಗಳಲ್ಲಿ ಕಡ್ಡಾಯವಾಗಿ ಗೆಲ್ಲಲೇಬೇಕಿದೆ.
8. 12 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದು, ಇನ್ನುಳಿದ ಎರಡು ಪಂದ್ಯಗಳನ್ನು ಗೆದ್ದರೂ ಪ್ಲೇಆಫ್ ಪ್ರವೇಶಿಸಲು ಬೇಕಾದ 16 ಅಂಕಗಳನ್ನು ಪಡೆದುಕೊಳ್ಳಲಾಗದೇ ವಿಫಲವಾಗಲಿದೆ.
9. 11 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಇನ್ನುಳಿದ ಮೂರು ಪಂದ್ಯಗಳನ್ನು ಗೆದ್ದರೂ ಪ್ಲೇಆಫ್ ಪ್ರವೇಶಿಸಲು ಬೇಕಾದ 16 ಅಂಕಗಳನ್ನು ಪಡೆದುಕೊಳ್ಳಲಾಗದೇ ವಿಫಲವಾಗಲಿದೆ.
10. 12 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ ಈಗಾಗಲೇ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದೆ.