
ಕಳೆದ ಮಾರ್ಚ್ ತಿಂಗಳಿನಲ್ಲಿ ಆರಂಭಗೊಂಡಿದ್ದ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಸದ್ಯ ಮುಕ್ತಾಯದ ಹಂತಕ್ಕೆ ತಲುಪಿದ್ದು, ಎರಡನೇ ಕ್ವಾಲಿಫಯರ್ ಹಾಗೂ ಫೈನಲ್ ಪಂದ್ಯಗಳು ಬಾಕಿ ಉಳಿದುಕೊಂಡಿವೆ.
ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್ ಫೈನಲ್ ತಲುಪಿದ್ದು, ಸೋತ ಗುಜರಾತ್ ಟೈಟನ್ಸ್ ಫೈನಲ್ ಪಂದ್ಯಕ್ಕೆ ಲಗ್ಗೆ ಇಡಲು ಮತ್ತೊಂದು ಅವಕಾಶವನ್ನು ಹೊಂದಿದ್ದು, ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದಿರುವ ತಂಡದ ವಿರುದ್ಧ ಎರಡನೇ ಕ್ವಾಲಿಫಯರ್ ಪಂದ್ಯದಲ್ಲಿ ಸೆಣಸಾಡಲಿದೆ.
ಇನ್ನು ನಿನ್ನೆ ( ಮೇ 24 ) ಚೆನ್ನೈನ ಎಂ ಎ ಚಿದಂಬರಂ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ಗೆದ್ದ ಮುಂಬೈ ಇಂಡಿಯನ್ಸ್ ಎರಡನೇ ಕ್ವಾಲಿಫಯರ್ ಪಂದ್ಯ ತಲುಪಿದೆ. ಅತ್ತ ಸೋತ ಲಕ್ನೋ ಸೂಪರ್ ಜೈಂಟ್ಸ್ ಟೂರ್ನಿಯಿಂದ ಹೊರಬಿದ್ದಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 182 ರನ್ ಕಲೆಹಾಕಿ ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಗೆಲ್ಲಲು 183 ರನ್‌ಗಳ ಗುರಿಯನ್ನು ನೀಡಿತ್ತು. ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಲಕ್ನೋ ಸೂಪರ್ ಜೈಂಟ್ಸ್ 16.3 ಓವರ್‌ಗಳಲ್ಲಿ 101 ರನ್‌ಗಳಿಗೆ ಆಲ್‌ಔಟ್ ಆಯಿತು. ಈ ಮೂಲಕ ಮುಂಬೈ ಇಂಡಿಯನ್ಸ್ 81 ರನ್‌ಗಳ ಭರ್ಜರಿ ಗೆಲುವನ್ನು ಕಂಡಿತು.
ಹೀಗೆ ಲೀಗ್ ಹಂತದ ಆರಂಭದ ಪಂದ್ಯಗಳಲ್ಲಿ ಕಳಪೆ ಆಟವನ್ನಾಡಿ ಪ್ಲೇಆಫ್ ಪ್ರವೇಶಿಸುವುದರಲ್ಲಿ ಅನುಮಾನ ಮೂಡಿಸಿದ್ದ ಮುಂಬೈ ಇಂಡಿಯನ್ಸ್ ತಂಡ ಸದ್ಯ ತನ್ನ ಆರನೇ ಐಪಿಎಲ್ ಟ್ರೋಫಿ ಗೆಲ್ಲುವ ಆಸೆಯನ್ನು ಜೀವಂತವಾಗಿರಿಸಿಕೊಂಡಿದ್ದು, ಎರಡನೆ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಸೋಲಿಸಿ ಫೈನಲ್‌ಗೇರುವ ಯೋಜನೆಯನ್ನು ಹಾಕಿಕೊಂಡಿದೆ. ಹೀಗೆ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತನ್ನ ಯೋಜನೆಯಂತೆ ಗೆಲುವು ಸಾಧಿಸುತ್ತಾ ಅಥವಾ ಗುಜರಾತ್ ಟೈಟನ್ಸ್ ಗೆದ್ದು ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸುತ್ತಾ ಎಂಬ ಕುತೂಹಲ ಹೆಚ್ಚಾಗಿದೆ.
ಇನ್ನು ಇತ್ತಂಡಗಳು ಈ ಬಾರಿಯ ಟೂರ್ನಿಯಲ್ಲಿ ಮುಖಾಮುಖಿಯಾಗಲಿರುವ ಮೂರನೇ ಪಂದ್ಯ ಇದಾಗಿದ್ದು, ಇಲ್ಲಿಯವರೆಗೂ ಒಟ್ಟು ಮೂರು ಪಂದ್ಯಗಳಲ್ಲಿ ಕಣಕ್ಕಿಳಿದಿವೆ. ಈ ಪೈಕಿ ಎರಡರಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆದ್ದಿದ್ದರೆ, ಒಂದರಲ್ಲಿ ಮಾತ್ರ ಗುಜರಾತ್ ಟೈಟನ್ಸ್ ಗೆದ್ದಿದೆ. ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 51ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟನ್ಸ್ ಸೆಣಸಾಡಿದ್ದವು. ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 177 ರನ್ ಕಲೆಹಾಕಿ ಗುಜರಾತ್ ಟೈಟನ್ಸ್ ತಂಡಕ್ಕೆ ಗೆಲ್ಲಲು 178 ರನ್‌ಗಳ ಗುರಿಯನ್ನು ನೀಡಿತ್ತು.
ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾಗಿದ್ದ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 172 ರನ್ ಕಲೆಹಾಕಿತ್ತು. ಪರಿಣಾಮ ಮುಂಬೈ ಇಂಡಿಯನ್ಸ್ 5 ರನ್‌ಗಳ ಅಂತರದಿಂದ ಗೆಲುವನ್ನು ಕಂಡಿತ್ತು.
ಏಪ್ರಿಲ್ 25ರಂದು ನಡೆದಿದ್ದ ಈ ಬಾರಿಯ ಐಪಿಎಲ್ ಟೂರ್ನಿಯ ಲೀಗ್ ಹಂತದ 35ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಗೆಲ್ಲಲು 208 ರನ್ನುಗಳ ಕಠಿಣ ಗುರಿ ನೀಡಿತ್ತು.
ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 152 ರನ್ ಕಲೆಹಾಕಿ 55 ರನ್ ಅಂತರದ ಕೆಟ್ಟ ಸೋಲನ್ನು ಕಂಡಿತು.
ಮೇ 12ರಂದು ನಡೆದಿದ್ದ ಈ ಬಾರಿಯ ಟೂರ್ನಿಯ ಎರಡನೇ ಮುಖಾಮುಖಿಯಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 218 ರನ್ ಕಲೆಹಾಕಿ ಗುಜರಾತ್ ಟೈಟನ್ಸ್ ತಂಡಕ್ಕೆ ಗೆಲ್ಲಲು 219 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ಎಡವಿದ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 191 ರನ್ ಕಲೆಹಾಕಿ 27 ರನ್‌ಗಳ ಸೋಲನ್ನು ಕಂಡಿತ್ತು.