ಶುಕ್ರವಾರ, ಮಾರ್ಚ್ 22ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.
ಈ ಮೂಲಕ ಚೆನ್ನೈನ ಚೆಪಾಕ್‌ನಲ್ಲಿ ಸಿಎಸ್‌ಕೆ ವಿರುದ್ಧ ಆರ್‌ಸಿಬಿ ತಂಡದ ಸೋಲಿನ ಸರಣಿ 8-1 ಅಮತರಕ್ಕೆ ವಿಸ್ತರಿಸಿದೆ. ಚೆಪಾಕ್ ಸೋಲಿನ ಜಿಂಕ್ಸ್ ಮುರಿಯಲು 2024ರಲ್ಲೂ ಸಾಧ್ಯವಾಗಲಿಲ್ಲ. 2009ರಲ್ಲಿ ಕೊನೆಯ ಬಾರಿಗೆ ಚೆನ್ನೈನಲ್ಲಿ ಆರ್‌ಸಿಬಿ ಗೆಲುವು ಸಾಧಿಸಿತ್ತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅನುಜ್ ರಾವತ್ ಮತ್ತು ದಿನೇಶ್ ಕಾರ್ತಿಕ್ ಅವರ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 173 ರನ್ ಕಲೆಹಾಕಿತು.
174 ರನ್‌ಗಳ ಸವಾಲಿನ ಮೊತ್ತ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸಮಗ್ರ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ 18.4 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 176 ರನ್ ಗಳಿಸಿ 6 ವಿಕೆಟ್‌ಗಳ ಅಮೋಘ ಗೆಲುವಿನೊಂದಿಗೆ ಶುಭಾರಂಭ ಮಾಡಿತು.
ಆರ್‌ಸಿಬಿ ತಂಡದ ಮಾಜಿ ಆಟಗಾರ ಶಿವಂ ದುಬೆ ಕೊನೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಗೆಲುವಿನ ರೂವಾರಿ ಎನಿಸಿದರು.

ಸಿಎಸ್‌ಕೆ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ನಾಯಕ ರುತುರಾಜ್ ಗಾಯಕ್ವಾಡ್ ಮತ್ತು ರಚಿನ್ ರವೀಂದ್ರ ಉತ್ತಮ ಆರಂಭ ಒದಗಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 4 ಓವರ್‌ಗಳಲ್ಲಿ 38 ರನ್‌ಗಳ ಜೊತೆಯಾಟ ನೀಡಿದರು. ರುತುರಾಜ್ ಗಾಯಕ್ವಾಡ್ 15 ರನ್ ಗಳಿಸಿ ಔಟಾದರು.
ನಂತರ ಬಂದ ಅಜಿಂಕ್ಯ ರಹಾನೆ 19 ಎಸೆತಗಳಲ್ಲಿ 2 ಬೌಂಡರಿ ಸಮೇತ 27 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ರಚಿನ್ ರವೀಂದ್ರ 15 ಎಸೆತಗಳಲ್ಲಿ 3 ಬೌಂಡರಿ ಹಾಗೂ 3 ಸಿಕ್ಸರ್ ಮೂಲಕ 37 ರನ್ ಬಾರಿಸಿದರು. ಇನ್ನು ಡೆರಿಲ್ ಮಿಚೆಲ್ 18 ಎಸೆತಗಳಲ್ಲಿ 22 ರನ್ ಗಳಿಸಿ ಔಟಾದರು.
ಅಂತಿಮವಾಗಿ ಶಿವಂ ದುಬೆ ಮತ್ತು ರವೀಂದ್ರ ಜಡೇಜಾ ಸಿಎಸ್‌ಕೆ ತಂಡವನ್ನು ಗೆಲುವಿನ ಗಡಿ ಮುಟ್ಟಿಸಲು ಮುರಿಯದ ಐದನೇ ವಿಕೆಟ್‌ಗೆ 66 ರನ್‌ಗಳ ಜೊತೆಯಾಟ ನಿರ್ಮಿಸಿದರು. ಶಿವಂ ದುಬೆ 28 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ ಅಜೇಯ 34 ರನ್ ಗಳಿಸಿದರೆ, ರವೀಂದ್ರ ಜಡೇಜಾ 17 ಎಸೆತಗಳಲ್ಲಿ ಅಜೇಯ 25 ರನ್ ಗಳಿಸಿದರು.

ಬೌಲಿಂಗ್‌ನಲ್ಲಿ ಆರ್‌ಸಿಬಿ ತಂಡದ ಪರ ಕ್ಯಾಮೆರಾನ್ ಗ್ರೀನ್ 3 ಓವರ್‌ಗಳಲ್ಲಿ 27 ರನ್ ನೀಡಿ 2 ವಿಕೆಟ್ ಪಡೆದರೆ, ಉಳಿದಂತೆ ಯಶ್ ದಯಾಳ್ ಮತ್ತು ಕರ್ಣ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದರು.
ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ್ದ ಆರ್‌ಸಿಬಿ ತಂಡದ ಇನ್ನಿಂಗ್ಸ್ ಆರಂಭಿಸಿದ ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ವಿರಾಟ್ ಕೊಹ್ಲಿ ಉತ್ತಮ ಮೊತ್ತ ಕಲೆಹಾಕಿದರು. ಪವರ್ ಪ್ಲೇನಲ್ಲಿ ಫಾಫ್ ಡು ಪ್ಲೆಸಿಸ್ ಆಕ್ರಮಣಕಾರಿ ಆಟಕ್ಕೆ ಮುಂದಾದರು. ಆದರೆ 23 ಎಸೆತಗಳಲ್ಲಿ 8 ಬೌಂಡರಿ ಸಮೇತ 35 ರನ್ ಗಳಿಸಿದ್ದಾಗ ಔಟಾದರು.
ನಂತರ ಬಂದ ರಜತ್ ಪಾಟಿದಾರ್ ಸೊನ್ನೆಗೆ ವಿಕೆಟ್ ಒಪ್ಪಿಸಿದರೆ, ಆ ಬಳಿಕ ಗ್ಲೆನ್ ಮ್ಯಾಕ್ಸ್‌ವೆಲ್ ಗೋಲ್ಡನ್ ಡಕ್‌ಗೆ ಔಟಾದರು. ಆಲ್‌ರೌಂಡರ್ ಕ್ಯಾಮೆರಾನ್ ಗ್ರೀನ್ 22 ಎಸೆತಗಳಲ್ಲಿ 18 ರನ್ ಗಳಿಸಿದರು.

ಕೊನೆಯಲ್ಲಿ ಅನುಜ್ ರಾವತ್ ಮತ್ತು ದಿನೇಶ್ ಕಾರ್ತಿಕ್ ಜೋಡಿ 6ನೇ ವಿಕೆಟ್‌ಗೆ 95 ರನ್‌ಗಳ ಜೊತೆಯಾಟವಾಡಿದ್ದರು. ಅನುಜ್ ರಾವತ್ 25 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ ಸಮೇತ 48 ರನ್ ಗಳಿಸಿ ಕೊನೆಯ ಎಸೆತದಲ್ಲಿ ರನೌಟ್ ಆದರು. ಇನ್ನು ದಿನೇಶ್ ಕಾರ್ತಿಕ್ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 38 ರನ್ ಬಾರಿಸಿದರು.
ಸಿಎಸ್‌ಕೆ ಪರ ಬೌಲಿಂಗ್‌ನಲ್ಲಿ ಮುಸ್ತಫಿಜುರ್ ರೆಹಮಾನ್ 4 ಓವರ್‌ಗಳಲ್ಲಿ 29 ರನ್ ನೀಡಿ 4 ವಿಕೆಟ್ ಪಡೆದರೆ, ದೀಪಕ್ ಚಹಾರ್ ಒಂದು ವಿಕೆಟ್ ಪಡೆದರು. ಮುಸ್ತಫಿಜುರ್ ರೆಹಮಾನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.