ಮಂಗಳವಾರ, ಏಪ್ರಿಲ್ 2ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 15ನೇ ಪಂದ್ಯದಲ್ಲಿ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡವು 28 ರನ್‌ಗಳ ಬೃಹತ್ ಗೆಲುವು ದಾಖಲಿಸಿದೆ.
ಈ ಮೂಲಕ ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ತಂಡ ಐಪಿಎಲ್ 2024ರಲ್ಲಿ ಆಡಿದ ನಾಲ್ಕು ಪಂದ್ಯಗಳಲ್ಲಿ ಒಂದು ಗೆಲುವು ಮತ್ತು ಮೂರು ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿ ಮುಂದುವರೆದಿದೆ.

ಮತ್ತೊಂದೆಡೆ, ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಆಡಿದ ಮೂರು ಪಂದ್ಯಗಳಲ್ಲಿ 2 ಗೆಲುವು ಮತ್ತು 1 ಸೋಲಿನೊಂದಿಗೆ 4 ಅಂಕಗಳನ್ನು ಗಳಿಸಿ 4ನೇ ಸ್ಥಾನಕ್ಕೆ ಜಿಗಿದಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಕಿಂಗ್ಸ್ ತಂಡ ಕ್ವಿಂಟನ್ ಡಿ ಕಾಕ್ ಅವರ ಭರ್ಜರಿ ಅರ್ಧಶತಕದ ಸಹಾಯದಿಂದ ನಿಗದಿ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 181 ರನ್‌ಗಳನ್ನು ಕಲೆಹಾಕಿತ್ತು.

182 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ಆರ್‌ಸಿಬಿ ತಂಡ ಯಾವುದೇ ಬ್ಯಾಟರ್‌ಗಳಿಂದ ದೊಡ್ಡ ಇನ್ನಿಂಗ್ಸ್ ಬರದ ಕಾರಣ, ನಿಗದಿತ 19.4 ಓವರ್‌ಗಳಲ್ಲಿ ಕೇವಲ 153 ರನ್‌ಗಳಿಗೆ ಆಲೌಟ್ ಆಯಿತು ಮತ್ತು ತವರಿನ ಅಂಗಳದಲ್ಲಿ ಸತತ ಎರಡನೇ ಸೋಲು ಅನುಭವಿಸಿತು.
ಆರ್‌ಸಿಬಿ ತಂಡದ ಇನ್ನಿಂಗ್ಸ್ ಆರಂಭಿಸಿದ ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ವಿರಾಟ್ ಕೊಹ್ಲಿ ಉತ್ತಮ ಆರಂಭದ ಮುನ್ಸೂಚನೆ ನೀಡಿದ್ದರೂ, ದೊಡ್ಡ ಮೊತ್ತವನ್ನಾಗಿ ಪರಿವರ್ತಿಸಲು ವಿಫಲರಾದರು. ಈ ಜೋಡಿ ಮೊದಲ ವಿಕೆಟ್‌ಗೆ 4.2 ಓವರ್‌ಗಳಲ್ಲಿ 40 ರನ್‌ಗಳ ಜೊತೆಯಾಟ ನೀಡಿತು.
ಆದರೆ, ವಿರಾಟ್ ಕೊಹ್ಲಿ ಅವರ ವಿಕೆಟ್ ಬೀಳುತ್ತಿದ್ದಂತೆಯೇ ಒಂದರ ಹಿಂದೆ ಒಂದರಂತೆ ವಿಕೆಟ್‌ಗಳು ಉದುರಿದವು. ವಿರಾಟ್ ಕೊಹ್ಲಿ 16 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 22 ರನ್ ಗಳಿಸಿ ಔಟಾದರೆ, ಫಾಫ್ ಡು ಪ್ಲೆಸಿಸ್ 13 ಎಸೆತಗಳಲ್ಲಿ 3 ಬೌಂಡರಿ ಮೂಲಕ 19 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ನಂತರ ಬಂದ ರಜತ್ ಪಾಟಿದಾರ್ 21 ಎಸೆತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್ ಸಮೇತ 29 ರನ್ ಗಳಿಸಿದರೆ, ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತೆ ವೈಫಲ್ಯ ಅನುಭವಿಸಿದರು. ಕ್ಯಾಮೆರಾನ್ ಗ್ರೀನ್ ಕೇವಲ 9 ರನ್ ಮಾತ್ರ ಗಳಿಸಿದರು.
ಅನುಜ್ ರಾವತ್ 11 ರನ್ ಗಳಿಸಿ ಔಟಾದರೆ, ಮಹಿಪಾಲ್ ಮೊಮ್ರೊರ್ 13 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಸಮೇತ 33 ರನ್ ಬಾರಿಸಿ ಹೋರಾಟ ನೀಡಿದರು. ದಿನೇಶ್ ಕಾರ್ತಿಕ್ 4 ರನ್, ರೀಸ್ ಟೋಪ್ಲೆ 3 ರನ್ ಮತ್ತು ಮೊಹಮ್ಮದ್ ಸಿರಾಜ್ 2 ಸಿಕ್ಸರ್‌ಗಳ ಮೂಲಕ 12 ರನ್ ಗಳಿಸಿದರು.
ಬೌಲಿಂಗ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಮಯಾಂಕ್ ಯಾದವ್ 4 ಓವರ್‌ಗಳಲ್ಲಿ 14 ರನ್ ನೀಡಿ 3 ವಿಕೆಟ್ ಪಡೆದರೆ, ನವೀನ್-ಉಲ್-ಹಕ್ 3.4 ಓವರ್‌ಗಳಲ್ಲಿ 25 ರನ್ ನೀಡಿ 2 ವಿಕೆಟ್ ಕಬಳಿಸಿದರು. ಉಳಿದಂತೆ ಮಣಿಮಾರನ್ ಸಿದ್ಧಾರ್ಥ್, ಯಶ್ ಠಾಕೂರ್ ಮತ್ತು ಮಾರ್ಕಸ್ ಸ್ಟೊಯಿನಿಸ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.
ಇದಕ್ಕೂ ಮುನ್ನ ಲಕ್ನೋ ಸೂಪರ್ ಕಿಂಗ್ಸ್ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಕ್ವಿಂಟನ್ ಡಿ ಕಾಕ್ ಮತ್ತು ನಾಯಕ ಕೆಎಲ್ ರಾಹುಲ್ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 5.3 ಓವರ್‌ಗಳಲ್ಲಿ 53 ರನ್‌ಗಳ ಜೊತೆಯಾಟ ನೀಡಿತು. 14 ಎಸೆತಗಳಲ್ಲಿ 2 ಸಿಕ್ಸರ್‌ಗಳೊಂದಿಗೆ 20 ರನ್ ಗಳಿಸಿದ್ದ ಕೆಎಲ್ ರಾಹುಲ್ ವಿಕೆಟ್ ಔಟಾದರು.
ನಂತರ ಬಂದ ದೇವದತ್ ಪಡಿಕ್ಕಲ್ ಕೇವಲ 6 ರನ್, ಮಾರ್ಕಸ್ ಸ್ಟೊಯಿನಿಸ್ 15 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ಸಮೇತ 24 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ಆರಂಭಿಕ ಬ್ಯಾಟರ್ ಕ್ವಿಂಟನ್ ಡಿ ಕಾಕ್ 56 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 5 ಸಿಕ್ಸರ್‌ಗಳ ಮೂಲಕ 81 ರನ್ ಬಾರಿಸಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿದರು. ನಂತರ ಕ್ರೀಸ್‌ಗೆ ಬಂದ ನಿಕೋಲಸ್ ಪೂರನ್ ಕೇವಲ 21 ಎಸೆತಗಳಲ್ಲಿ 1 ಬೌಂಡರಿ ಹಾಗೂ 5 ಸಿಕ್ಸರ್ ಸಹಾಯದಿಂದ ಅಜೇಯ 40 ರನ್ ಬಾರಿಸಿ ತಂಡದ ಮೊತ್ತವನ್ನು 180ರ ಗಡಿ ಮುಟ್ಟಿಸಿದರು.
ಇನ್ನು ಬೌಲಿಂಗ್‌ನಲ್ಲಿ ಆರ್‌ಸಿಬಿ ತಂಡದ ಪರ ಗ್ಲೆನ್ ಮ್ಯಾಕ್ಸ್‌ವೆಲ್ 4 ಓವರ್‌ಗಳಲ್ಲಿ 23 ರನ್ ನೀಡಿ 2 ವಿಕೆಟ್ ಪಡೆದು ಮಿಂಚಿದರೆ, ಉಳಿದಂತೆ ರೀಸ್ ಟೋಪ್ಲೆ ಯಶ್ ದಯಾಳ್ ಮತ್ತು ಮೊಹಮ್ಮದ್ ಸಿರಾಜ್ ತಲಾ ಒಂದೊಂದು ವಿಕೆಟ್ ಪಡೆದರು.