
ಬೆಂಗಳೂರಿನಲ್ಲಿ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.
ದೇಶೀಯ ಕ್ರಿಕೆಟ್ ಟೂರ್ನಿಗಳಲ್ಲಿ ಮಿಂಚುವುದರ ಮೂಲಕ ಬೆಳಕಿಗೆ ಬಂದ ಕರ್ನಾಟಕದ ಪ್ರತಿಭೆ ಪ್ರಸಿದ್ಧ್ ಕೃಷ್ಣ 2018ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡಕ್ಕೆ ಸೇರ್ಪಡೆಯಾಗಿದ್ದರು. ಆಗಿನಿಂದ ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯವರೆಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಕಣಕ್ಕಿಳಿದಿದ್ದ ಪ್ರಸಿದ್ಧ್ ಕೃಷ್ಣ ಕಳೆದ ವರ್ಷ ಇಂಗ್ಲೆಂಡ್ ವಿರುದ್ಧ ನಡೆದ ಏಕದಿನ ಸರಣಿಯ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‍ಗೂ ಸಹ ಪದಾರ್ಪಣೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಕೋಲ್ಕತ್ತ ನೈಟ್ ರೈಡರ್ಸ್ ತಂಡದ ಪರ 4 ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಗಳನ್ನು ಆಡಿರುವ ಪ್ರಸಿದ್ಧ್ ಕೃಷ್ಣ ಅತಿ ದೊಡ್ಡ ಮಟ್ಟದ ಸದ್ದು ಮಾಡುವಲ್ಲಿ ಹೆಚ್ಚು ಯಶಸ್ಸು ಸಾಧಿಸಿರಲಿಲ್ಲ. ಆದರೆ ಇತ್ತೀಚೆಗಷ್ಟೇ ಮುಕ್ತಾಯಗೊಂಡ ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಸಿದ್ಧ್ ಕೃಷ್ಣ ಪ್ರಮುಖ ಪಾತ್ರ ನಿರ್ವಹಿಸಿದ್ದರು. 3 ಪಂದ್ಯಗಳ ಪೈಕಿ 9 ವಿಕೆಟ್ ಪಡೆದಿದ್ದ ಪ್ರಸಿದ್ಧ್ ಕೃಷ್ಣ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾಗುವ ಮೂಲಕ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದರು. ಸದ್ಯ ವೆಸ್ಟ್ ಇಂಡೀಸ್ ವಿರುದ್ಧದ ಈ ಪ್ರದರ್ಶನವೇ ಪ್ರಸಿದ್ಧ್ ಕೃಷ್ಣ ಪಾಲಿಗೆ ಅದೃಷ್ಟವಾಗಿ ಪರಿಣಮಿಸಿದ್ದು, ಈ ಬಾರಿಯ ಮೆಗಾ ಹರಾಜಿನಲ್ಲಿ ಬರೋಬ್ಬರಿ 10 ಕೋಟಿಗೆ ರಾಜಸ್ಥಾನ್ ರಾಯಲ್ಸ್ ತಂಡದ ಪಾಲಾಗಿದ್ದಾರೆ.