
ಭಾರತ ಹಾಗೂ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿದೆ. ಗುವಾಹಟಿಯ ಪಿಚ್‌ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ ಟೀಮ್ ಇಂಡಿಯಾ ಮೊದಲ ಪಂದ್ಯದಲ್ಲಿ ಭರ್ಜರಿ ಯಶಸ್ಸು ಸಾಧಿಸಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತೆಗೆದುಕೊಂಡ ಕೆಲ ನಿರ್ಧಾರಗಳು ಅಚ್ಚರಿ ಮೂಡಿಸಿದೆ. ಅದ್ಭುತ ಫಾರ್ಮ್‌ನಲ್ಲಿರುವ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಈ ಪಂದ್ಯದ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆಯಲು ವಿಫಲವಾಗಿದ್ದಾರೆ.
ಹೀಗಾಗಿ ಇಶಾನ್ ಕಿಶನ್ ಹಿಂದಿನ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ದಾಖಲೆಯ ದ್ವಿಶತಕ ಸಿಡಿಸಿ ಅದಾದ ಬಂತರದ ಪಂದ್ಯದಲ್ಲಿಯೇ ಬೆಂಚ್ ಕಾಯುವಂತಾಗಿದೆ. ಈ ವಿಚಾರವನ್ನು ಪಂದ್ಯದ ಹಿಂದಿನ ದಿನವೇ ನಾಯಕ ರೋಹಿತ್ ಶರ್ಮಾ ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದ್ದರು. ಹೀಗಾಗಿ ಇಶಾನ್ ಕಿಶನ್ ಶ್ರೀಲಂಕಾ ವಿರುದ್ಧದ ಮೊದಲ ಪಂದ್ಯದಲ್ಲಿ ಆಡುವ ಬಳಗದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳದ ಕಾರಣ ವಿಶೇಷ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಏಕದಿನ ಕ್ರಿಕೆಟ್‌ನಲ್ಲಿ ಹಿಂದಿನ ಪಂದ್ಯದಲ್ಲಿ ಅತೀ ಹೆಚ್ಚು ರನ್‌ಗಳಿಸಿ ಬಳಿಕ ಮುಂದಿನ ಪಂದ್ಯದಲ್ಲಿ ಆಡುವ ಬಳಗದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದ್ದಾರೆ. ಬ್ರಾಡ್ ಹಾಜ್ ಕ್ಲೈಟನ್ ಲ್ಯಾಂಬರ್ತ್ ಮೊದಲಾದ ಆಟಗಾರರು ಇರುವ ಪಟ್ಟಿಯಲ್ಲಿ ಇಶಾನ್ ಕಿಶನ್ ಈಗ ಅಗ್ರಸ್ಥಾನವನ್ನು ಪಡೆದುಕೊಂಡಿದ್ದಾರೆ.
ಇನ್ನು ಇಶಾನ್ ಕಿಶನ್‌ಗೆ ಈ ಪಂದ್ಯದಲ್ಲಿ ಅವಕಾಶ ನೀಡದಿರುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಅನೇಕ ಮಾಜಿ ಆಟಗಾರರು ಟೀಮ್ ಇಂಡಿಯಾ ನಾಯಕನ ಈ ನಿರ್ಧಾರವನ್ನು ಕಟುವಾಗಿ ಟೀಕಿಸಿದ್ದಾರೆ. ಆಕಾಶ್ ಚೋಪ್ರ, ಮೊಹಮ್ಮದ್ ಕೈಫ್ ಮೊದಲಾದ ಆಟಗಾರರು ಇದು ಸರಿಯಾದ ನಿರ್ಧಾರವಲ್ಲ ಎಂದಿದ್ದಾರೆ. ಇನ್ನು ಇಶಾನ್ ಕಿಶನ್ ಬದಲಿಗೆ ಟೀಮ್ ಇಂಡಿಯಾದಲ್ಲಿ ಶುಬ್ಮನ್ ಗಿಲ್ ಆಡುವ ಅವಕಾಶ ಪಡೆದುಕೊಂಡಿದ್ದು ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಪಂದ್ಯದಲ್ಲಿ ಮೊದಲ ವಿಕೆಟ್‌ಗೆ ರೋಹಿತ್ ಶರ್ಮಾ ಜೊತೆ ಸೇರಿ 143 ರನ್‌ಗಳ ಜೊತೆಯಾಟ ನಡೆಸಿದ ಗಿಲ್ 60 ಎಸೆತಗಳಲ್ಲಿ 70 ರನ್‌ಗಳ ಕೊಡುಗೆ ನೀಡಿದರು.
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ ಮಿಂಚಿದ್ದು ಭರ್ಜರಿ ಶತಕ ಸಿಡಿಸಿದ್ದಾರೆ. ಆಕ್ರಮಣಕಾರಿ ಹೊಡೆತಗಳನ್ನು ಬಾರಿಸಿದ ಕೊಹ್ಲಿ ತಮ್ಮ 45ನೇ ಅಂತಾರಾಷ್ಟ್ರೀಯ ಶತಕ ಬಾರಿಸಿದ್ದಾರೆ. ಈ ಪಂದ್ಯದಲ್ಲಿ ಒಟ್ಟು 87 ಎಸೆತ ಎದುರಿಸಿದ ವಿರಾಟ್ ಕೊಹ್ಲಿ 113 ರನ್ ಬಾರಿಸಿ ವಿಕೆಟ್ ಕಳೆದುಕೊಂಡರು. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕೊಹ್ಲಿಯ 73ನೇ ಶತಕ ಇದಾಗಿದೆ.
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್
ಬೆಂಚ್: ಸೂರ್ಯಕುಮಾರ್ ಯಾದವ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಇಶಾನ್ ಕಿಶನ್, ಅರ್ಷದೀಪ್ ಸಿಂಗ್
ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೋ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಧನಂಜಯ ಡಿ ಸಿಲ್ವ, ಚರಿತ್ ಅಸಲಂಕ, ದಸುನ್ ಶನಕ (ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ದುನಿತ್ ವೆಲ್ಲಲಾಗೆ, ಕಸುನ್ ರಜಿತ, ದಿಲ್ಶಾನ್ ಮಧುಶಂಕ
ಬೆಂಚ್: ಮಹೇಶ್ ತೀಕ್ಷಣ, ಲಹಿರು ಕುಮಾರ, ಅಶೇನ್ ಬಂಡಾರ, ನುವಾನಿಡು ಫೆರ್ನಾಂಡೋ, ಪ್ರಮೋದ್ ಮದುಶನ್, ಜೆಫ್ರಿ ವಂಡರ್ಸೆ, ಸದೀರ ಸಮರವಿಕ್ರಮ