2023-24ನೇ ಸಾಲಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತ ತಂಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಪಾಲಿ ಉಮ್ರಿಗರ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮಹಿಳೆಯರ ವಿಭಾಗದಲ್ಲಿ ಸ್ಟಾರ್ ಬ್ಯಾಟರ್ ಸ್ಮೃತಿ ಮಂದಾನ ಶ್ರೇಷ್ಠ ಅಂತಾರಾಷ್ಟ್ರೀಯ ಆಟಗಾರ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮುಂಬೈನಲ್ಲಿ ಶನಿವಾರ ನಡೆಯಲಿರುವ ಬಿಸಿಸಿಐ ವಾರ್ಷಿಕ ಸಮಾರಂಭದಲ್ಲಿ ಬುಮ್ರಾ ಮತ್ತು ಮಂದಾನ ಅವರಿಗೆ ಪ್ರದಾನ ನಡೆಯಲಿದೆ. ಇದೇ ವೇಳೆ ಸಿಕೆ ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಿರುವ ಟೀಮ್ ಇಂಡಿಯಾದ ಮಾಜಿ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ ಅವರಿಗೆ ಗೌರವಿಸಲಾಗುತ್ತಿದೆ.
ಜಸ್ಪ್ರೀತ್ ಬುಮ್ರಾ ಪಾಲಿ ಉಮ್ರಿಗರ್ ಪ್ರಶಸ್ತಿ ಪಡೆಯುತ್ತಿರುವ ಐದನೇ ಭಾರತೀಯ ಆಟಗಾರರಾಗಿದ್ದಾರೆ. ಇದಕ್ಕೂ ಮುನ್ನ ರಾಹುಲ್ ದ್ರಾವಿಡ್ (2004), ಸಚಿನ್ ತೆಂಡೂಲ್ಕರ್ (2010), ರವಿಚಂದ್ರನ್ ಅಶ್ವಿನ್ (2016), ಮತ್ತು ವಿರಾಟ್ ಕೊಹ್ಲಿ (2017, 2018) ಪಾಲಿ ಉಮ್ರಿಗರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

2024ರಲ್ಲಿ ಐಸಿಸಿ ಟೆಸ್ಟ್ ಮತ್ತು ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವ ಜಸ್ಪ್ರೀತ್ ಬುಮ್ರಾ, ಕಳೆದ ವರ್ಷ ಭಾರತದ ಅತ್ಯುತ್ತಮ ಬೌಲರ್ ಎನಿಸಿಕೊಂಡಿದ್ದಾರೆ. ಭಾರತ ತಂಡ ಟಿ20 ವಿಶ್ವಕಪ್ ಗೆಲುವಿನಲ್ಲಿ ಬಮ್ರಾ ಪ್ರಮುಖ ಪಾತ್ರ ವಹಿಸಿದ್ದರು. ಇದಾದ ನಂತರ ತವರಿನಲ್ಲಿ ನಡೆದ ಬಾಂಗ್ಲಾದೇಶ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಪ್ರವಾಸದ ಟೆಸ್ಟ್ ಸರಣಿಗಳಲ್ಲಿ ಬುಮ್ರಾ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದರು.
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ 32 ವಿಕೆಟ್‌ಗಳನ್ನು ಉರುಳಿಸುವ ಮೂಲಕ ಸರಣಿ ಶ್ರೇಷ್ಠ ಆಟಗಾರರ ಪ್ರಶಸ್ತಿಯನ್ನೂ ಪಡೆದಿದ್ದರು. ಬಳಿಕ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ನ (ಐಸಿಸಿ) ಸರ್ ಗ್ಯಾರ್ ಫೀಲ್ಡ್ ಸೋಬರ್ಸ್ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಆಯ್ಕೆಯಾಗಿದ್ದರು.
ಭಾರತ ವನಿತೆಯರ ತಂಡದ ಸ್ಟಾರ್ ಬ್ಯಾಟರ್ ಸ್ಮೃತಿ ಮಂದಾನ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅಮೋಘ ಸಾಧನೆ ಮಾಡಿದ್ದಾರೆ. ಮಂದಾನ 2024ರ ವರ್ಷದಲ್ಲಿ ಒಟ್ಟು 743 ರನ್ ಗಳಿಸಿದ್ದಾರೆ. ಇದರಲ್ಲಿ ನಾಲ್ಕು ಮನಮೋಹಕ ಶತಕಗಳು ಸೇರಿವೆ. ಈ ಮೂಲಕ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡುವವರಲ್ಲಿ ಒಬ್ಬರಾಗಿದ್ದಾರೆ. ಐಸಿಸಿ ಮಹಿಳಾ ಏಕದಿನ ವರ್ಷದ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೂ ಮಂದಾನ ಪಾತ್ರರಾಗಿದ್ದಾರೆ.
ಇತ್ತೀಚೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಟೀಮ್ ಇಂಡಿಯಾ ದಿಗ್ಗಜ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನು ಬಿಸಿಸಿಐನ ವಿಶೇಷ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಯುವ ಆಟಗಾರರಾದ ಸರ್ಫಾರಾಜ್ ಖಾನ್ ಮತ್ತು ಆಶಾ ಶೋಭನಾ ಕ್ರಮವಾಗಿ ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಅತ್ಯುತ್ತಮ ಅಂತಾರಾಷ್ಟ್ರೀಯ ಪರ್ದಾಪಣೆ ಪ್ರಶಸ್ತಿಗಳನ್ನು ಸ್ವೀಕರಿಸಲಿದ್ದಾರೆ.