ಐತಿಹಾಸಿಕ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಬಾಕ್ಸಿಂಗ್ ಡೇ ಟೆಸ್ಟ್ ನ ಮೂರನೇ ದಿನವಾದ ಇಂದು ಭಾರತದ ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅಬ್ಬರಿಸಿದ್ದಾರೆ. ನಿತೀಶ್ ಕುಮಾರ್ ರೆಡ್ಡಿ ಆಸ್ಟ್ರೇಲಿಯಾ ವಿರುದ್ಧ ಚೊಚ್ಚಲ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್‌ನಲ್ಲಿ ನಿತೀಶ್ ರೆಡ್ಡಿ ಅವರು ಮೊದಲ ಶತಕ ಬಾರಿಸಿದರು. ಸಂಕಷ್ಟದಲ್ಲಿದ್ದ ಭಾರತ ತಂಡಕ್ಕೆ ಆಸರೆಯಾದ ನಿತೀಶ್ ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದರು. ನಿತೀಶ್ ಮೊದಲು ತಮ್ಮ ಚೊಚ್ಚಲ ಅರ್ಧಶತಕವನ್ನು ಪೂರ್ಣಗೊಳಿಸಿ ಟೀಮ್ ಇಂಡಿಯಾವನ್ನು ಫಾಲೋ ಆನ್ ಅಪಾಯದಿಂದ ರಕ್ಷಿಸಿದರು. ನಂತರ ಚೊಚ್ಚಲ ಶತಕ ಬಾರಿಸುವ ಮೂಲಕ ಭಾರತವನ್ನು ಮತ್ತೆ ಪಂದ್ಯ ಉಳಿಯುವಂತೆ ಮಾಡಿದರು. ಇದಲ್ಲದೆ, ದಾಖಲೆಯನ್ನು ಅವರು ಮಾಡಿದರು.

ಮೆಲ್ಬೋರ್ನ್ ಟೆಸ್ಟ್ ಪಂದ್ಯದಲ್ಲಿ ಅಮೋಘ ಶತಕ ಸಿಡಿಸಿದ ನಿತೀಶ್ ಕುಮಾರ್ ರೆಡ್ಡಿ ಎಲ್ಲರ ಗಮನ ಸೆಳೆದಿದ್ದಾರೆ. ನಿತೀಶ್ ಮೆಲ್ಬೋರ್ನ್ ಟೆಸ್ಟ್‌ನ ಮೂರನೇ ದಿನದ ಅಂತ್ಯದವರೆಗೆ 10 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 105 ರನ್ ಗಳಿಸಿ ಅಜೇಯರಾಗುಳಿದಿದ್ದಾರೆ.
ಆಸ್ಟ್ರೇಲಿಯಾದಲ್ಲಿ ಶತಕ ಬಾರಿಸಿದ ಮೂರನೇ ಕಿರಿಯ ಭಾರತದ ಆಟಗಾರ ಎಂಬ ಹೆಗ್ಗಳಿಕಗೂ ನಿತೀಶ್ ಅವರು ಪಾತ್ರರಾಗಿದ್ದಾರೆ . ಅವರು 21 ವರ್ಷ, 216 ದಿನಗಳ ವಯಸ್ಸಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಶತಕ ಬಾರಿಸಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸಚಿನ್ ತೆಂಡೂಲ್ಕರ್ ಅವರು 1992 ರಲ್ಲಿ ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ತಮ್ಮ 18 ವರ್ಷ, 256 ದಿನಗಳಲ್ಲಿ ಶತಕ ಗಳಿಸಿದ್ದರು.
ನಿತೀಶ್ ಕುಮಾರ್ 2020ರ ನಂತರ ಮೊದಲ ಬಾರಿಗೆ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಶತಕ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಅಜಿಂಕ್ಯ ರಹಾನೆ 2020ರಲ್ಲಿ ಆಡಿದ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಶತಕ ಸಿಡಿಸಿದ್ದರು.
ನಿತೀಶ್ ಕುಮಾರ್ ಈ ಶತಕದ ಮೂಲಕ ಟೀಮ್ ಇಂಡಿಯಾ ಮಾಜಿ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಮುರಿದಿದ್ದಾರೆ. ನಿತೀಶ್ ಕುಮಾರ್ 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವಾಗ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಅವರು 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವಾಗ ಅತಿ ಹೆಚ್ಚು 87 ರನ್ ಗಳಿಸಿದ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಮುರಿದ್ದಾರೆ.