ಭಾನುವಾರ, ಏಪ್ರಿಲ್ 14ರಂದು ಮುಂಬೈನ ಐಕಾನಿಕ್ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 29ನೇ ಹೈ-ವೋಲ್ಟೇಜ್ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ರನ್‌ಗಳ ರೋಚಕ ಗೆಲುವು ದಾಖಲಿಸಿತು.
ಗಮನಾರ್ಹವಾಗಿ, ರೋಹಿತ್ ಶರ್ಮಾ ಐಪಿಎಲ್‌ನಲ್ಲಿ 2ನೇ ಶತಕದ ಹೊರತಾಗಿಯೂ ಮುಂಬೈ ಇಂಡಿಯನ್ಸ್ ಸೋಲು ಕಂಡಿತು. ಆಡಿದ 6 ಪಂದ್ಯಗಳಲ್ಲಿ 4 ಸೋಲು ಮತ್ತು 2 ಗೆಲುವು ಕಂಡಿದೆ. ಇನ್ನು ಸಿಎಸ್‌ಕೆ ತಂಡ ಸಮಗ್ರ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಏರಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ರುತುರಾಜ್ ಗಾಯಕ್ವಾಡ್ ಮತ್ತು ಶಿವಂ ದುಬೆ ಅವರ ಮನಮೋಹಕ ಅರ್ಧಶತಕಗಳ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 206 ರನ್ ಗಳಿಸಿತು.
207 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ ಮಾಜಿ ನಾಯಕ ರೋಹಿತ್ ಶರ್ಮಾ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದ ಹೊರತಾಗಿಯೂ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 186 ರನ್ ಗಳಿಸುವ ಮೂಲಕ 20 ರನ್‌ಗಳ ಸೋಲು ಅನುಭವಿಸಿತು.

ಮುಂಬೈ ಇಂಡಿಯನ್ಸ್ ಇನ್ನಿಂಗ್ಸ್ ಆರಂಭಿಸಿದ ಇಶಾನ್ ಕಿಶನ್ ಮತ್ತು ರೋಹಿತ್ ಶರ್ಮಾ ಉತ್ತಮ ಆರಂಭ ಒದಗಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 7.1 ಓವರ್‌ಗಳಲ್ಲಿ 70 ರನ್‌ಗಳ ಜೊತೆಯಾಟ ನೀಡಿದರು. ಈ ವೇಳೆ 15 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 23 ರನ್ ಗಳಿಸಿ ಔಟಾದರು.
ನಂತರ ಬಂದ ಸೂರ್ಯಕುಮಾರ್ ಯಾದವ್ ಸೊನ್ನೆಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರೆ, ತಿಲಕ್ ವರ್ಮಾ 20 ಎಸೆತಗಳಲ್ಲಿ 5 ಬೌಂಡರಿ ಮೂಲಕ 31 ರನ್ ಗಳಿಸಿದರು. ರೋಹಿತ್ ಶರ್ಮಾ 63 ಎಸೆತಗಳಲ್ಲಿ 11 ಬೌಂಡರಿ ಹಾಗೂ 5 ಸಿಕ್ಸರ್‌ಗಳ ಸಮೇತ ಅಜೇಯ 105 ರನ್ ಗಳಿಸಿದರು.

ಉಳಿದಂತೆ ಹಾರ್ದಿಕ್ ಪಾಂಡ್ಯ 2 ರನ್, ಟಿಮ್ ಡೇವಿಡ್ 13 ರನ್, ರೊಮಾರಿಯೋ ಶಫರ್ಡ್ 1 ರನ್, ಮೊಹಮ್ಮದ್ ನಬಿ 4 ರನ್ ಗಳಿಸಿದರು.
ಬೌಲಿಂಗ್‌ನಲ್ಲಿ ಸಿಎಸ್‌ಕೆ ತಂಡದ ಪರ ಮತೀಶ್ ಪತಿರಾನ 4 ಓವರ್‌ಗಳಲ್ಲಿ 28 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ತುಷಾರ್ ದೇಶಪಾಂಡೆ ಮತ್ತು ಮುಸ್ತಾಫಿಜುರ್ ರಹಮಾನ್ ತಲಾ ಒಂದೊಂದು ವಿಕೆಟ್ ಪಡೆದರು.
ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಇನ್ನಿಂಗ್ಸ್ ಆರಂಭಿಸಿದ ಅಜಿಂಕ್ಯ ರಹಾನೆ ಮತ್ತು ರಚಿನ್ ರವೀಂದ್ರ ದೊಡ್ಡ ಆರಂಭ ನೀಡಲಿಲ್ಲ. ಸ್ಥಳೀಯ ಆಟಗಾರ ಅಜಂಕ್ಯ ರಹಾನೆ ಕೇವಲ 5 ರನ್ ಗಳಿಸಿ ಪೆವಿಲಿಯನ್ ಸೇರಿದರು. ಆ ಬಳಿಕ ರಚಿನ್ ರವೀಂದ್ರ 16 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 21 ರನ್ ಗಳಿಸಿ ಔಟಾದರು.
ನಂತರ ಜೊತೆಗೂಡಿದ ರುತುರಾಜ್ ಗಾಯಕ್ವಾಡ್ ಮತ್ತು ಶಿವಂ ದುಬೆ ಜೊತೆಗೂಡಿ ದೊಡ್ಡ ಮೊತ್ತ ಕಲೆಹಾಕಲು ನೆರವಾದರು. ಈ ಜೋಡಿ ಮೂರನೇ ವಿಕೆಟ್‌ಗೆ 90 ರನ್‌ಗಳ ಜೊತೆಯಾಟ ನಿರ್ಮಿಸಿದರು. ನಾಯಕ ರುತುರಾಜ್ ಗಾಯಕ್ವಾಡ್ 40 ಎಸೆತಗಳಲ್ಲಿ 5 ಬೌಂಡರಿ ಹಾಗೂ 5 ಸಿಕ್ಸರ್‌ಗಳ ಮೂಲಕ 69 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಇನ್ನು ಶಿವಂ ದುಬೆ ಎಂದಿನಂತೆ ತಮ್ಮ ಅಬ್ಬರದ ಬ್ಯಾಟಿಂಗ್ ಮಾಡಿದರು ಮತ್ತು 38 ಎಸೆತಗಳಲ್ಲಿ 10 ಬೌಂಡರಿ ಹಾಗೂ 2 ಸಿಕ್ಸರ್‌ಗಳ ನೆರವಿನಿಂದ ಅಜೇಯ 66 ರನ್ ಬಾರಿಸಿದರು. ಇನ್ನು ಆಲ್‌ರೌಂಡರ್ ಡೇರಿಲ್ ಮಿಚೆಲ್ 14 ಎಸೆತಗಳಲ್ಲಿ 17 ರನ್ ಗಳಿಸಿದರು.
ಇನ್ನು ಕೊನೆಯಲ್ಲಿ ಅಬ್ಬರದ ಬ್ಯಾಟಿಂಗ್ ಮಾಡಿದ್ದು ಮಾಜಿ ನಾಯಕ ಎಂಎಸ್ ಧೋನಿ, ಕಿಕ್ಕಿರಿದು ತುಂಬಿದ್ದ ವಾಂಖೆಡೆಯಲ್ಲಿ ಪ್ರೇಕ್ಷಕರಿಗೆ ರಸದೌತಣ ಬಡಿಸಿದರು. ತಮ್ಮನ್ನು ನೋಡಲು ಬಂದಿದ್ದ ಅಭಿಮಾನಿಗಳನ್ನು ನಿರಾಸೆಗೊಳಿಸಲಿಲ್ಲ.
ಎಂಎಸ್ ಧೋನಿ ಕೊನೆಯ 4 ಎಸೆತಗಳು ಬಾಕಿ ಇದ್ದಾಗ ಕ್ರೀಸ್‌ಗೆ ಬಂದರು ಮತ್ತು ಹಾರ್ದಿಕ್ ಪಾಂಡ್ಯ ಅವರ ಬೌಲಿಂಗ್‌ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಬಾರಿಸಿದರು. ಕೇವಲ 4 ಎಸೆತಗಳಲ್ಲಿ 3 ಸಿಕ್ಸರ್‌ಗಳ ನೆರವಿನಿಂದ ಅಜೇಯ 20 ರನ್ ಗಳಿಸಿದರು. ಈ ಮೂಲಕ ಐಪಿಎಲ್‌ನಲ್ಲಿ 5000 ರನ್‌ಗಳನ್ನು ಪೂರ್ಣಗೊಳಿಸಿದರು.
ಇನ್ನು ಬೌಲಿಂಗ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರ ನಾಯಕ ಹಾರ್ದಿಕ್ ಪಾಂಡ್ಯ 3 ಓವರ್‌ಗಳಲ್ಲಿ 43 ರನ್ ನೀಡಿ 2 ವಿಕೆಟ್ ಪಡೆದರೆ, ಜೆರಾಲ್ಡ್ ಕೋಯಟ್ಜಿ ಮತ್ತು ಶ್ರೇಯಸ್ ಗೋಪಾಲ್ ತಲಾ ಒಂದೊಂದು ವಿಕೆಟ್ ಪಡೆದರು.