ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ. ಭಾನುವಾರ ದುಬೈನಲ್ಲಿ ನಡೆಯುತ್ತಿರುವ ಈ ಹೈವೋಲ್ಟೇಜ್ ಪಂದ್ಯವನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ಸ್ಟೇಡಿಯಂ ಆಗಮಿಸಿದ್ದಾರೆ. ಮತ್ತೊಂದೆಡೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವೀಡಿಯೊವೊಂದು ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ಉತ್ಸಾಹವನ್ನು ಹುಟ್ಟುಹಾಕಿದೆ. ಭಾರತ ತಂಡದ ಮಾಜಿ ನಾಯಕ ಎಂಎಸ್ ಧೋನಿ ಅವರು ಬಾಲಿವುಡ್ ನಟ ಸನ್ನಿ ಡಿಯೋಲ್ ಜೊತೆಗೆ ಭಾರತ ಮತ್ತು ಪಾಕಿಸ್ತಾನ ಪಂದ್ಯವನ್ನು ವೀಕ್ಷಿಸುತ್ತಿದ್ದಾರೆ.
ಐಪಿಎಲ್ ಪ್ರೋಮೋ ಶೂಟ್ ವೇಳೆ ಸ್ಟುಡಿಯೋದಲ್ಲಿ ಕ್ಯಾಪ್ಟನ್ ಕೂಲ್ ಎಂಎಸ್ ಧೋನಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ನೋಡಿ ಆನಂದಿಸುತ್ತಿದ್ದಾರೆ. ಈ ವೇಳೆ ಬಾಲಿವುಡ್ ನಟ ಸನ್ನಿ ಡಿಯೋಲ್ ಕೂಡ ಧೋನಿ ಜೊತೆ ಕಾಣಿಸಿಕೊಂಡಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಈ ಜೋಡಿ ಸಂಭಾಷಣೆಯಲ್ಲಿ ತೊಡಗಿದ್ದು, ಅಭಿಮಾನಿಗಳು ಸುತ್ತುವರೆದಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ತಂಡಗಳು ಮೈದಾನದಲ್ಲಿ ಮುಖಾಮುಖಿಯಾದಾಗಲೆಲ್ಲಾ, ಅದು ಕೇವಲ ಒಂದು ಆಟಕ್ಕಿಂತ ಹೆಚ್ಚಿನದಾಗಿದೆ. ನ್ಯೂಜಿಲೆಂಡ್ ವಿರುದ್ಧದ ಹೀನಾಯ ಸೋಲಿನ ನಂತರ ಪಾಕಿಸ್ತಾನ ಗೆಲುವಿನ ಟ್ಯ್ರಾಕ್‌ಗೆ ಮರಳಲು ಹೆಣಗಾಡುತ್ತಿದೆ. ಮತ್ತೊಂದೆಡೆ ಭಾರತ ತಂಡವು ತನ್ನ ಆರಂಭಿಕ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಗೆಲುವು ಸಾಧಿಸುವ ಮೂಲಕ ಉತ್ತಮ ಆರಂ ಕಂಡಿದೆ. ಈಗ ಉಭಯ ತಂಡಗಳ ಪಂದ್ಯ ರೋಚಕತೆ ಹುಟ್ಟು ಹಾಕಿದೆ.
ಎಂಎಸ್ ಧೋನಿ ಮುಂದಿನ ಐಪಿಎಲ್ 2025ರ ಸೀಸನ್ ಆಡಲು ಸಜ್ಜಾಗುತ್ತಿದ್ದಾರೆ. 43 ವರ್ಷದ ಧೋನಿ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಫ್ರಾಂಚೈಸಿ 4 ಕೋಟಿ ರೂ.ಗೆ ಉಳಿಸಿಕೊಂಡಿದೆ. ಅವರನ್ನು ಅನ್‌ಕ್ಯಾಪ್ಡ್ ಆಟಗಾರನಾಗಿ ಉಳಿಸಿಕೊಳ್ಳಲಾಗಿದೆ. ಐಪಿಎಲ್‌ನ ಹೊಸ ನಿಯಮಗಳ ಪ್ರಕಾರ, 5 ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ ಆಡದ ಆಟಗಾರರನ್ನು ಅನ್‌ಕ್ಯಾಪ್ಡ್ ಎಂದು ಪರಿಗಣಿಸಲಾಗುತ್ತದೆ. ಇದರ ಲಾಭ ಪಡೆದುಕೊಂಡ ಚೆನ್ನೈ ಸೂಪರ್ ಕಿಂಗ್ಸ್, ಧೋನಿಯನ್ನು ಅಗ್ಗವಾಗಿ ಉಳಿಸಿಕೊಂಡಿದೆ.
ಪಂದ್ಯದ ಕುರಿತು ಹೇಳುವುದಾದರೆ, ಪಾಕಿಸ್ತಾನ ನಾಯಕ ಮೊಹಮ್ಮದ್ ರಿಜ್ವಾನ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಟಾಸ್ ಸಮಯದಲ್ಲಿ ರಿಜ್ವಾನ್ ಪ್ಲೇಯಿಂಗ್-11 ರಲ್ಲಿ ಒಂದು ಬದಲಾವಣೆ ಮಾಡಿರುವುದಾಗಿ ಹೇಳಿದರು. ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಗಾಯಗೊಂಡಿದ್ದ ಸ್ಫೋಟಕ ಆರಂಭಿಕ ಬ್ಯಾಟರ್ ಫಖರ್ ಜಮಾನ್ ಈ ಪಂದ್ಯದಲ್ಲಿ ಆಡುತ್ತಿಲ್ಲ. ಅವರು ಟೂರ್ನಿಯಿಂದ ಹೊರಗುಳಿದಿದ್ದಾರೆ. ಅವರ ಸ್ಥಾನದಲ್ಲಿ ಎಡಗೈ ಬ್ಯಾಟರ್ ಇಮಾಮ್ ಉಲ್ ಹಕ್‌ಗೆ ಅವಕಾಶ ಸಿಕ್ಕಿದೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಭಾರತ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್.
ಪಾಕಿಸ್ತಾನ: ಇಮಾಮ್ ಉಲ್ ಹಕ್, ಬಾಬರ್ ಅಜಮ್, ಸೌದ್ ಶಕೀಲ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್/ನಾಯಕ), ಸಲ್ಮಾನ್ ಆಘಾ, ತಯ್ಯಬ್ ತಾಹಿರ್, ಖುಶ್ದಿಲ್ ಶಾ, ಶಾಹೀನ್ ಅಫ್ರಿದಿ, ನಸೀಮ್ ಶಾ, ಹರಿಸ್ ರೌಫ್, ಅಬ್ರಾರ್ ಅಹ್ಮದ್.