ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ 6ನೇ ಪಂದ್ಯ ಸೋಮವಾರ ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಿತು. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಬಾಂಗ್ಲಾದೇಶವನ್ನು 5 ವಿಕೆಟ್‌ಗಳಿಂದ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿತು. ಇದರೊಂದಿಗೆ ಅತಿಥೇಯ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದಿವೆ. ಈ ಪಂದ್ಯದಲ್ಲಿ ಭಾರತ ಮೂಲದ ನ್ಯೂಜಿಲೆಂಡ್ ಯುವ ಬ್ಯಾಟರ್ ರಚಿನ್ ರವೀಂದ್ರ ಅದ್ಭುತ ಶತಕ ಗಳಿಸಿ ನ್ಯೂಜಿಲೆಂಡ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಈ ಶತಕದೊಂದಿಗೆ ರಚಿನ್ ತಮ್ಮ ಹೆಸರಿನಲ್ಲಿ ವಿಶ್ವ ದಾಖಲೆಯನ್ನು ಸೃಷ್ಟಿಸಿದ್ದಾರೆ.
ನ್ಯೂಜಿಲೆಂಡ್‌ನ ಎಡಗೈ ಸ್ಟಾರ್ ಆಲ್‌ರೌಂಡರ್ ರಚಿನ್ ರವೀಂದ್ರ ಐಸಿಸಿ ಏಕದಿನ ವಿಶ್ವಕಪ್ ಮತ್ತು ಐಸಿಸಿ ಚಾಂಪಿಯನ್ಸ್ ಟ್ರೋಫಿ ಎರಡರಲ್ಲೂ ತಮ್ಮ ಚೊಚ್ಚಲ ಪಂದ್ಯದಲ್ಲೇ ಶತಕ ಗಳಿಸಿದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ತಮ್ಮ ಚೊಚ್ಚಲ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಶತಕ ಗಳಿಸುವ ಮೊದಲು, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2023ರ ವಿಶ್ವಕಪ್‌ನ ಚೊಚ್ಚಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಶತಕ ಗಳಿಸಿದ್ದರು.

ವಿಶ್ವ ಕ್ರಿಕೆಟ್ ಇತಿಹಾಸದಲ್ಲಿ 19 ಆಟಗಾರರು ತಮ್ಮ ಚೊಚ್ಚಲ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಶತಕ ಗಳಿಸಿರುವ ಸಾಧನೆ ಮಾಡಿದ್ದಾರೆ. ಆದರೆ 15 ಆಟಗಾರರು ತಮ್ಮ ಚೊಚ್ಚಲ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಶತಕ ಗಳಿಸಿದ್ದಾರೆ. ನ್ಯೂಜಿಲೆಂಡ್‌ನ ರಚಿನ್ ರವೀಂದ್ರ ಈ ಎರಡೂ ಪಟ್ಟಿಗಳಲ್ಲಿ ಸೇರ್ಪಡೆಯಾದ ಮೊದಲ ಆಟಗಾರನಾಗುವ ಮೂಲಕ ಇತಿಹಾಸದ ಪುಟಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ.
ಐಸಿಸಿ ಟೂರ್ನಿಗಳಲ್ಲಿ ನ್ಯೂಜಿಲೆಂಡ್ ಪರ ಅತಿ ಹೆಚ್ಚು ಶತಕಗಳನ್ನುಗಳಿಸಿರುವ ರಚಿನ್ ರವೀಂದ್ರ ಅವರಿಗೆ ಕೇವಲ 25 ವರ್ಷ. ಇಷ್ಟು ಚಿಕ್ಕ ವಯಸ್ಸಿನಲ್ಲಿ, ಅವರು ಐಸಿಸಿ ಏಕದಿನ ಟೂರ್ನಿಗಳಲ್ಲಿ ನ್ಯೂಜಿಲೆಂಡ್ ಪರ ಅತಿ ಹೆಚ್ಚು ಶತಕಗಳನ್ನು (4) ಗಳಿಸಿದ ಆಟಗಾರರಾಗಿದ್ದಾರೆ. ರಚಿನ್ ಬಹಳ ಕಡಿಮೆ ಸಮಯದಲ್ಲಿ ನ್ಯೂಜಿಲೆಂಡ್ ಪರ ಪ್ರಮುಖ ಸ್ಟಾರ್ ಆಟಗಾರನಾಗಿದ್ದಾರೆ. ರಚಿನ್ ಅವರು ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡರಲ್ಲೂ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ.
ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ರಚಿನ್ ರವೀಂದ್ರ 105 ಎಸೆತಗಳಲ್ಲಿ 12 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 112 ರನ್ ಗಳಿಸುವ ಮೂಲಕ ಅದ್ಭುತ ಶತಕ ಗಳಿಸಿದರು. ರಚಿನ್ ಅವರ ಶತಕದ ನೆರವಿನಿಂದ ನ್ಯೂಜಿಲೆಂಡ್ ತಂಡವು ಬಾಂಗ್ಲಾದೇಶ ನೀಡಿದ್ದ 237 ರನ್‌ಗಳ ಗುರಿಯನ್ನು 46.1 ಓವರ್‌ಗಳಲ್ಲಿ ಸುಲಭವಾಗಿ ತಲುಪಿತು. ಈ ಗೆಲುವಿನೊಂದಿಗೆ ಭಾರತ ತಂಡದ ನಂತರ ನ್ಯೂಜಿಲೆಂಡ್ ಎ ಗುಂಪಿನಿಂದ ಸೆಮಿಫೈನಲ್ ತಲುಪಿತು.