ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ 16 ಆಟಗಾರರ ಭಾರತ ತಂಡವನ್ನು ಪ್ರಕಟಿಸಿದೆ. ಎರಡು ಟೆಸ್ಟ್ ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 19 ರಿಂದ 23 ರವರೆಗೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ.
ಸ್ಟಾರ್ ವಿಕೆಟ್‌ಕೀಪರ್- ಬ್ಯಾಟರ್ ರಿಷಬ್ ಪಂತ್ ಬಹುದಿನಗಳ ಬಳಿಕ ಟೆಸ್ಟ್ ತಂಡಕ್ಕೆ ಮರಳಿದ್ದಾರೆ. ಮತ್ತೊಂದೆಡೆ ಕನ್ನಡಿಗ ಕೆಎಲ್ ರಾಹುಲ್ ಅವರಿಗೂ ತಂಡದಲ್ಲಿ ಅವಕಾಶ ನೀಡಲಾಗಿದೆ. ಯುವ ವೇಗದ ಬೌಲರ್ ಯಶ್ ದಯಾಲ್ ಅವರಿಗೂ ಸ್ಥಾನ ಸಿಕ್ಕಿದೆ. ಇವರಲ್ಲದೆ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಕೂಡ ಈ ವರ್ಷದ ಮೊದಲ ಟೆಸ್ಟ್ ಸರಣಿ ಆಡಲಿದ್ದಾರೆ.

ರಿಷಬ್ ಪಂತ್ ಸುದೀರ್ಘ 21 ತಿಂಗಳ ನಂತರ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಲಿದ್ದಾರೆ. ಡಿಸೆಂಬರ್ 2022 ರಲ್ಲಿ ಭೀಕರ ಕಾರು ಅಪಘಾತದ ನಂತರ ರಿಷಬ್ ಪಂತ್ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದರು. ಇದಾದ ಬಳಿಕ ಪಂತ್ ಈ ವರ್ಷ ನಡೆದ ಟಿ20 ವಿಶ್ವಕಪ್‌ನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದ್ದರು ಈ ಟೂರ್ನಿಯಲ್ಲಿ ಅವರು ಭಾರತ ಗೆಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಇದೀಗ ಪಂತ್ ರೆಡ್ ಬಾಲ್ ಮಾದರಿಯಲ್ಲೂ ತಮ್ಮ ಅಬ್ಬರ ತೋರಲು ಸಿದ್ಧರಾಗಿದ್ದು, ಅಭಿಮಾನಿಗಳು ಕೂಡ ಅವರ ಆಟವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. ಆದರೆ, ಧ್ರುವ್ ಜುರೆಲ್ ಅವರನ್ನು ಎರಡನೇ ವಿಕೆಟ್ ಕೀಪರ್ ಬ್ಯಾಟರ್ ಆಗಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಯಶ್ ದಯಾಳ್ ಮೊದಲ ಬಾರಿಗೆ ಟೀಮ್ ಇಂಡಿಯಾದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ದುಲೀಪ್ ಟ್ರೋಫಿಯಲ್ಲಿ ಅವರು ಭಾರತ-ಬಿ ತಂಡದ ಪರ ಆಡುತ್ತಿದ್ದಾರೆ. ಭಾರತ ಎ ವಿರುದ್ಧದ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಕಬಳಿಸಿದ್ದಾರೆ.
ಯಶ್ ದಯಾಳ್ ಅವರ ಪ್ರಥಮ ದರ್ಜೆ ಕ್ರಿಕೆಟ್ ಅಂಕಿ-ಅಂಶಗಳನ್ನು ನೋಡಿದರೆ, ಅವರು ಇದುವರೆಗೆ 24 ಪಂದ್ಯಗಳಿಂದ 76 ವಿಕೆಟ್‌ಗಳನ್ನು ಉರುಳಿಸಿದ್ದಾರೆ. ಅವರ ಅತ್ಯುತ್ತಮ ಪ್ರದರ್ಶನವೆಂದರೆ 121 ರನ್‌ಗಳಿಗೆ 9 ವಿಕೆಟ್ ಪಡೆದಿರುವುದು.
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್‌ದೀಪ್ ಯಾದವ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಳ್.