
ಡಿಸೆಂಬರ್ 31ರಂದು ನಡೆದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ರಿಷಬ್ ಪಂತ್ ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಡಿಸ್ಚಾರ್ಜ್ ಆಗಿದ್ದಾರೆ. ಇದೀಗ ತಮ್ಮ ಚೇತರಿಕೆಯ ಬಗ್ಗೆ ಮಹತ್ವದ ಪೋಸ್ಟ್ ಹಂಚಿಕೊಂಡಿದ್ದಾರೆ.
ಫೆಬ್ರವರಿ 7, ಮಂಗಳವಾರ ಇನ್‌ಸ್ಟಾಗ್ರಾಂ ಖಾತೆಯಿಂದ ಸ್ಟೋರಿಯನ್ನು ಹಂಚಿಕೊಂಡಿದ್ದಾರೆ. "ಹೊರಗೆ ಕುಳಿತುಕೊಂಡು ತಾಜಾ ಗಾಳಿಯನ್ನು ಉಸಿರಾಡುವುದು ಇಷ್ಟು ಚನ್ನಾಗಿರುತ್ತದೆ ಎಂದು ತಿಳಿದಿರಲಿಲ್ಲ" ಎಂದು ಪಂತ್ ಬರೆದುಕೊಂಡಿದ್ದಾರೆ.
ರಿಷಬ್ ಪಂತ್ ಇನ್‌ಸ್ಟಾಗ್ರಾಂ ಸ್ಟೋರಿಯನ್ನು ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಆದಷ್ಟು ಬೇಗನೆ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಮಾಜಿ ಕ್ರಿಕೆಟಿಗರು ಕೂಡ ಪಂತ್ ಆರೋಗ್ಯದಲ್ಲಿ ಚೇತರಿಸಿಕೊಳ್ಳುತ್ತಿರುವುದನ್ನು ನೋಡಿ ಸಂತಸ ವ್ಯಕ್ತಪಡಿಸಿದ್ದಾರೆ.
ಅಪಘಾತದಲ್ಲಿ ರಿಷಬ್ ಪಂತ್ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದರು. ಮೊಣಕಾಲು ಅಸ್ಥಿರಜ್ಜು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕಾರಣ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಕನಿಷ್ಠ 6 ತಿಂಗಳು ಬೇಕು ಎಂದು ವೈದ್ಯರು ತಿಳಿಸಿದ್ದಾರೆ. ಪಂತ್ ವಿಕೆಟ್ ಕೀಪರ್ ಆಗಿರುವುದರಿಂದ ಅವರಿಗೆ ಹೆಚ್ಚಿನ ಒತ್ತಡ ಇರುವ ಕಾರಣ, ಅವರು ಕನಿಷ್ಠ 9 ತಿಂಗಳು ವಿಶ್ರಾಂತಿ ಪಡೆಯಬೇಕು ಎಂದು ಹೇಳಲಾಗಿದೆ.

ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎಂದ ಅಭಿಮಾನಿಗಳು
ಫೆಬ್ರವರಿ 9ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರಿಷಬ್ ಪಂತ್ ಆಡದಿರುವುದು ತಂಡಕ್ಕೆ ಹಿನ್ನಡೆಯಾಗಿದೆ. ಕಳೆದ ಬಾರಿಯ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಕೊನೆಯ ಪಂದ್ಯದಲ್ಲಿ ಪಂತ್ ಸ್ಟಾರ್ ಆಗಿದ್ದರು.
ಬ್ರಿಸ್ಬೇನ್‌ನ ಗಬ್ಬಾದಲ್ಲಿ ರಿಷಬ್ ಪಂತ್ ಇನ್ನಿಂಗ್ಸ್ ಟೆಸ್ಟ್ ಕ್ರಿಕೆಟ್‌ನ ಸಾರ್ವಕಾಲಿಕ ಶ್ರೇಷ್ಟ ಇನ್ನಿಂಗ್ಸ್‌ಗಳಲ್ಲಿ ಒಂದು ಎಂದು ಹೇಳಲಾಗಿದೆ. ಪಂತ್ ಬ್ಯಾಟಿಂಗ್‌ನಿಂದ ಭಾರತ ಐತಿಹಾಸಿಕ ಗೆಲುವು ಸಾಧ್ಯವಾಯಿತು.
ಈ ಬಾರಿಯ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಪಂತ್ ಆಡದಿರುವುದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎಂದು ಟ್ವಿಟರ್ ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಐಪಿಎಲ್, ಏಕದಿನ ವಿಶ್ವಕಪ್‌ನಿಂದ ಕೂಡ ಹೊರಕ್ಕೆ
ಪಂತ್ ಗಾಯ ಗಂಭೀರವಾಗಿರುವುದರಿಂದ ಅವರು ಈ ಬಾರಿಯ ಐಪಿಎಲ್ ಕೂಡ ತಪ್ಪಿಸಿಕೊಳ್ಳಲಿದ್ದಾರೆ. ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದರು. ಅಲ್ಲದೆ ಈ ಬಾರಿ ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಕೂಡ ಪಂತ್ ಆಡುವುದು ಅನುಮಾನ ಎನ್ನಲಾಗಿದೆ.
ಪಂತ್ ಆದಷ್ಟು ಬೇಗನೆ ಚೇತರಿಸಿಕೊಂಡು ಮೈದಾನಕ್ಕೆ ಮರಳಲಿ ಎಂದು ಭಾರತದ ಕ್ರಿಕೆಟ್ ಅಭಿಮಾನಿಗಳು ಹಾರೈಸುತ್ತಿದ್ದಾರೆ.