ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧ ಭಾರತ ತಂಡದ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧವೂ ಟೆಸ್ಟ್ ಸರಣಿ ಗೆಲ್ಲಲು ಭರ್ಜರಿ ತಯಾರಿ ನಡೆಸುತ್ತಿದೆ.
ಬುಧವಾರದಂದು ನಾಯಕ ರೋಹಿತ್ ಶರ್ಮಾ ಮುಂಬೈನ ಜಿಯೋ ಪಾರ್ಕ್‌ನಲ್ಲಿ ಭರ್ಜರಿ ಅಭ್ಯಾಸ ನಡೆಸಿದ್ದರು. ರೋಹಿತ್ ಅವರು ಅಭ್ಯಾಸ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು. ಅಕ್ಟೋಬರ್ 16 ರಿಂದ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ.

ತವರಿನಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ಅವರಿಗೆ ಇತಿಹಾಸ ಸೃಷ್ಟಿಸುವ ಅವಕಾಶವಿದೆ. ಟೀಮ್ ಇಂಡಿಯಾದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರ ದಾಖಲೆಯನ್ನು ರೋಹಿತ್ ಮುರಿಯುವ ಮೂಲಕ ವಿಶ್ವ ಕ್ರಿಕೆಟ್‌ನಲ್ಲಿ ಸಂಚಲನ ಮೂಡಿಸಬಹುದು.
ಭಾರತ ಪರ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದ ನಾಯಕನ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕೊಹ್ಲಿ ತಮ್ಮ ನಾಯಕತ್ವದಲ್ಲಿ 40 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ. ರೋಹಿತ್ ಶರ್ಮಾ ಇದುವರೆಗೆ 18 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾದ ನಾಯಕತ್ವ ವಹಿಸಿದ್ದಾರೆ. ಅವರ ನಾಯಕತ್ವದಲ್ಲಿ ಭಾರತ 12 ಟೆಸ್ಟ್ ಪಂದ್ಯಗಳನ್ನು ಗೆದ್ದಿದ್ದು, 4 ಟೆಸ್ಟ್ ಸೋತಿದೆ. ಎರಡು ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿವೆ.
ನ್ಯೂಜಿಲೆಂಡ್ ವಿರುದ್ಧ ಭಾರತ ಮೂರು ಪಂದ್ಯ ಟೆಸ್ಟ್ ಸರಣಿಗಳನ್ನು ಆಡಲಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಈ ಮೂರು ಟೆಸ್ಟ್ ಪಂದ್ಯಗಳನ್ನು ಗೆದ್ದರೆ, ಮೊಹಮ್ಮದ್ ಅಜರುದ್ದೀನ್ ದಾಖಲೆ ಬ್ರೇಕ್ ಆಗಲಿದೆ. ಭಾರತದ ಪರ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದ ನಾಯಕರ ಪಟ್ಟಿಯಲ್ಲಿ ಮೊಹಮ್ಮದ್ ಅಜರುದ್ದೀನ್ ಅವರನ್ನು ರೋಹಿತ್ ಶರ್ಮಾ ಹಿಂದಿಕ್ಕಲಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕ್ಲೀನ್ ಸ್ವೀಪ್ ಮಾಡುವ ಮೂಲಕ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ 15 ಪಂದ್ಯಗಳನ್ನು ಗೆದ್ದ ಸಾಧನೆ ಮಾಡಬಹುದು.
ಮೊಹಮ್ಮದ್ ಅಜರುದ್ದೀನ್ ಅವರು 47 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾದ ನಾಯಕರಾಗಿದ್ದರು. ಅವರ ನಾಯಕತ್ವದಲ್ಲಿ ಭಾರತ ತಲಾ 14 ಟೆಸ್ಟ್ ಪಂದ್ಯಗಳನ್ನು ಗೆದ್ದು ಸೋತಿದೆ. 19 ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿವೆ.
ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕನ ಹೆಗ್ಗಳಿಕೆ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಪಾತ್ರರಾಗುತ್ತಾರೆ. ಕೊಹ್ಲಿ 40 ಟೆಸ್ಟ್ ಪಂದ್ಯಗಳಲ್ಲಿ ಭಾರತವನ್ನು ಗರಿಷ್ಠ ವಿಜಯದತ್ತ ಮುನ್ನಡೆಸಿದ್ದಾರೆ. ಕೊಹ್ಲಿ ನಂತರ ಮಹೇಂದ್ರ ಸಿಂಗ್ ಧೋನಿ 60 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾ ನಾಯಕತ್ವ ವಹಿಸಿದ್ದು, 27 ಪಂದ್ಯಗಳನ್ನು ಗೆದ್ದಿದ್ದಾರೆ. ಸೌರವ್ ಗಂಗೂಲಿ 47 ಟೆಸ್ಟ್ ಪಂದ್ಯಗಳಲ್ಲಿ ಭಾರತದ ಜವಾಬ್ದಾರಿಯನ್ನು ಹೊತ್ತಿದ್ದು, 21 ಪಂದ್ಯಗಳನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.