ಸದ್ಯ ಟೀಮ್ ಇಂಡಿಯಾ ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಆಡುತ್ತಿದೆ. ಈ ವೇಳೆ ಸೂಪರ್ 4 ಹಂತದಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ಭಾರತ ತಂಡ, ಫೈನಲ್‌ಗೆ ಏರುವ ಕನಸು ಕಾಣುತ್ತಿದೆ. ಈ ಮಧ್ಯೆ ಟೀಮ್ ಇಂಡಿಯಾದ ಮುಂದಿನ ಸರಣಿಗಾಗಿ ಬಿಸಿಸಿಐ ಆಯ್ಕೆ ಸಮಿತಿ ಬುಧವಾರ ತಂಡವನ್ನು ಪ್ರಕಟಿಸಿದೆ. ಅಕ್ಟೋಬರ್ 2 ರಿಂದ ಅಹಮದಾಬಾದ್‌ನಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡವನ್ನು ಶುಭಮನ್ ಗಿಲ್ ಮುನ್ನಡೆಸಲಿದ್ದಾರೆ. ಇದೇ ಮೊದಲ ಬಾರಿಗೆ ಶುಭಮನ್ ಗಿಲ್ ತವರಿನಲ್ಲಿ ತಂಡವನ್ನು ಮುನ್ನಡೆಸುತ್ತಿದ್ದು ಕುತೂಹಲ ಮನೆ ಮಾಡಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ 2025-27ರ ಅಡಿಯಲ್ಲಿ ಆಡಲಾಗುತ್ತಿದೆ. ಈ ವೇಳೆ ಅಂಕ ಪಟ್ಟಿಯಲ್ಲಿ ಬಡ್ತಿ ಪಡೆಯುವ ಕನಸಿನಲ್ಲಿರುವ ಟೀಮ್ ಇಂಡಿಯಾ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಅಳೆದು ತೂಗಿ ತಂಡವನ್ನು ಪ್ರಕಟಿಸಿರುವ ಆಯ್ಕೆ ಸಮಿತಿ ಭರವಸೆಯ ಆಟಗಾರರಿಗೂ ಮಣೆ ಹಾಕಿದೆ. ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡಿರುವ ಆಟಗಾರರು ತಂಡದಲ್ಲಿ ಸ್ಥಾನ ಉಳಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ. ಈಗಾಗಲೇ ಈ ಟೆಸ್ಟ್ ಸರಣಿಗೆ ವೆಸ್ಟ್ ಇಂಡೀಸ್ ತಂಡವನ್ನು ಪ್ರಕಟಿಸಲಾಗಿದ್ದು, ರೋಸ್ಟನ್ ಚೇಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

ದೇಶೀಯ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಕರ್ನಾಟಕದ ಸ್ಟಾರ್ ಆಟಗಾರ ಕರುಣ್ ನಾಯರ್ ಅವರಿಗೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅವಕಾಶ ನೀಡಲಾಗಿತ್ತು. ಆದರೆ ಇಂಗ್ಲೆಂಡ್‌ನಲ್ಲಿ ಇವರು ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರಿಂದ ಇವರಿಗೆ ತವರಿನಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಿಂದ ಕೈ ಬಿಡಲಾಗಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಕರ್ನಾಟಕದ ಮೂವರು ಆಟಗಾರರು ಸ್ಥಾನ ಪಡೆದಿದ್ದಾರೆ. ಆರಂಭಿಕರಾಗಿ ಕಾಣಿಸಿಕೊಳ್ಳುವ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ದದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡಿ ರನ್ ಕಲೆ ಹಾಕಿದ್ದರು. ಇವರು ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಇನ್ನು ಪ್ರಸಿದ್ಧ ಕೃಷ್ಣ ವೇಗದ ಬೌಲರ್ ರೂಪದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ದೇಶೀಯ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ದೇವದತ್ ಪಡಿಕ್ಕಲ್‌ಗೆ ಸ್ಥಾನ ಲಭಿಸಿದೆ.

ಕರ್ನಾಟಕದ ಸ್ಟಾರ್ ಆಟಗಾರ ದೇವದತ್ ಪಡಿಕ್ಕಲ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ. ಇವರು ಭಾರತ "ಎ" ಪರ ಅಮೋಘ ಬ್ಯಾಟಿಂಗ್ ನಡೆಸಿ, ಬಿಸಿಸಿಐ ಆಯ್ಕೆ ಸಮಿತಿಯ ಚಿತ್ತ ಕದ್ದಿದ್ದರು. ಹೀಗಾಗಿ ಇವರಿಗೆ ಮತ್ತೊಂದು ಅವಕಾಶ ನೀಡಲಾಗುದೆ.
ಟೀಮ್ ಇಂಡಿಯಾದ ಭರವಸೆಯ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರಿಗೆ ಈ ಸರಣಿಯಲ್ಲಿ ದೊಡ್ಡ ಜವಾಬ್ದಾರಿಯನ್ನು ನೀಡಲಾಗಿದೆ. ಈ ಸರಣಿಯಲ್ಲಿ ಇವರಿಗೆ ಉಪನಾಯಕ ಸ್ಥಾನ ನೀಡಲಾಗಿದೆ. ಈ ಮೂಲಕ ಆಯ್ಕೆ ಸಮಿತಿ ಇವರ ಅನುಭವಕ್ಕೆ ಮಣೆ ಹಾಕಿದೆ. ಜಡ್ಡು, ಇಂಗ್ಲೆಂಡ್‌ನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿ ಗಮನ ಸೆಳೆದಿದ್ದರು. ಈ ಪ್ರವಾಸದಲ್ಲಿ ಜಡೇಜಾ, ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅಬ್ಬರಿಸಿದ್ದರಿಂದ ಇವರಿಗೆ ಈ ಜವಾಬ್ದಾರಿ ಲಭಿಸಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ: ಶುಭಮನ್ ಗಿಲ್ (ನಾಯಕ), ರವೀಂದ್ರ ಜಡೇಜಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ತ್ ಪಡಿಕ್ಕಲ್, ಧ್ರುವ್ ಜುರೆಲ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣಾ, ಕುಲ್‌ದೀಪ್ ಯಾದವ್, ನಾರಾಯಣ್ ಜಗದೀಶನ್.