SRH vs RR IPL 2024: ರಿಯಾನ್ ಪರಾಗ್, ಜೈಸ್ವಾಲ್ ಹೋರಾಟ ವ್ಯರ್ಥ; ಹೈದರಾಬಾದ್‌ಗೆ ಮಣಿದ ರಾಜಸ್ಥಾನ್
ಗುರುವಾರ, ಮೇ 2ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 50ನೇ ಪಂದ್ಯದಲ್ಲಿ ಆತಿಥೇಯ ಸನ್ ರೈಸರ್ಸ್ ಹೈದರಾಬಾದ್ ತಂಡವು ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಕೇವಲ 1 ರನ್‌ನ ರೋಚಕ ಗೆಲುವು ಸಾಧಿಸಿತು.
ಈ ಮೂಲಕ ಸನ್ ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ 2024ರಲ್ಲಿ ಈವರೆಗೆ ಆಡಿದ 10 ಪಂದ್ಯಗಳಲ್ಲಿ 6 ಗೆಲುವು ಮತ್ತು 4 ಸೋಲು ಕಂಡಿದ್ದು 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ.
ಮತ್ತೊಂದೆಡೆ, ರಾಜಸ್ಥಾನ್ ರಾಯಲ್ಸ್ ತಂಡ 10 ಪಂದ್ಯಗಳಲ್ಲಿ 8 ಗೆಲುವು ಮತ್ತು 2 ಸೋಲು ಕಂಡಿದ್ದು 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆದಿದೆ.

ಇನ್ನು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ ಟ್ರಾವಿಸ್ ಹೆಡ್ ಮತ್ತು ನಿತೀಶ್ ರೆಡ್ಡಿ ಅವರ ಅಮೋಘ ಅರ್ಧಶತಕಗಳ ನೆರವಿಂದ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿತ್ತು.
202 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡ ರಿಯಾನ್ ಪರಾಗ್ ಮತ್ತು ಯಶಸ್ವಿ ಜೈಸ್ವಾಲ್ ಅವರ ಅಮೋಘ ಅರ್ಧಶತಕಗಳ ಸಹಾಯದಿಂದ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 200 ರನ್ ಗಳಿಸಿ ಕೊನೆಯ ಓವರ್‌ನ ಕೊನೆಯ ಎಸೆತದಲ್ಲಿ ಭುವನೇಶ್ವರ್ ಕುಮಾರ್ ಮ್ಯಾಜಿಕ್‌ನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಗೆದ್ದು ಬೀಗಿತು.
ಕೊನೆಯ ಓವರ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಗೆಲುವಿಗೆ 13 ರನ್‌ಗಳು ಬೇಕಾಗಿದ್ದಾಗ ಭುವನೇಶ್ವರ್ ಕುಮಾರ್ ಬೌಲಿಂಗ್ ಮಾಡಿದರು ಮತ್ತು ಕೇವಲ 10 ರನ್‌ಗಳನ್ನು ಬಿಟ್ಟುಕೊಟ್ಟರು. ಕೊನೆಯ ಎಸೆತದಲ್ಲಿ 2 ರನ್ ಬೇಕಿದ್ದಾಗ ರೋವ್ಮನ್ ಪೊವೆಲ್ ಅವರನ್ನು ಎಲ್‌ಬಿಡಬ್ಲ್ಯೂ ಬಲೆಗೆ ಕೆಡವಿದರು.

ರಾಜಸ್ಥಾನ್ ರಾಯಲ್ಸ್ ತಂಡದ ಬ್ಯಾಟಿಂಗ್ ಆರಂಭಿಸಿದ ಯಶಸ್ವಿ ಜೈಸ್ವಾಲ್ ಮತ್ತು ಜೋಸ್ ಬಟ್ಲರ್ ಉತ್ತಮ ಆರಂಭ ನೀಡಲು ವಿಫಲರಾದರು. ಏಕೆಂದರೆ ಮೊದಲ ಓವರ್‌ನ ಎರಡನೇ ಎಸೆತದಲ್ಲೇ ಜೋಸ್ ಬಟ್ಲರ್ ಡಕ್‌ಗೆ ಔಟಾದರು. ನಂತರ ಬಂದ ನಾಯಕ ಸಂಜು ಸ್ಯಾಮ್ಸನ್ ಕೂಡ ಸೊನ್ನೆ ಸುತ್ತಿದರು.
ಆ ಬಳಿಕ ಜೊತೆಯಾದ ಯಶಸ್ವಿ ಜೈಸ್ವಾಲ್ ಮತ್ತು ರಿಯಾನ್ ಪರಾಗ್ ಕುಸಿದಿದ್ದ ತಂಡಕ್ಕೆ ಆಸರೆಯಾದರು ಮತ್ತು ತಂಡದ ಸ್ಕೋರ್ ಬೋರ್ಡ್ ಹೆಚ್ಚಿಸಿದರು. ಚೇಸಿಂಗ್‌ನಲ್ಲಿ ರಾಜಸ್ಥಾನ್ ತಂಡವನ್ನು ಜೀವಂತವಾಗಿರಿಸಿದರು. ಈ ಜೋಡಿ ಮೂರನೇ ವಿಕೆಟ್‌ಗೆ 133 ರನ್‌ಗಳ ಜೊತೆಯಾಟ ನೀಡಿದರು.
ಯಶಸ್ವಿ ಜೈಸ್ವಾಲ್ 40 ಎಸೆತಗಳಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 67 ರನ್ ಗಳಿಸಿ ಔಟಾದರು. ಆ ಬಳಿಕ ಉತ್ತಮವಾಗಿ ಆಡುತ್ತಿದ್ದ ರಿಯಾನ್ ಪರಾಗ್ 49 ಎಸೆತಗಳಲ್ಲಿ 8 ಬೌಂಡರಿ ಹಾಗೂ 4 ಸಿಕ್ಸರ್ ಸಮೇತ 77 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ನಂತರ ಬಂದ ಶಿಮ್ರಾನ್ ಹೆಟ್ಮೆಯರ್ 9 ಎಸೆತಗಳಲ್ಲಿ 13 ರನ್, ರೋವ್ಮನ್ ಪೊವೆಲ್ 15 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 27 ರನ್ ಗಳಿಸಿದರೆ, ಧ್ರುವ್ ಜುರೆಲ್ 1 ರನ್ ಮತ್ತು ರವಿಚಂದ್ರನ್ ಅಶ್ವಿನ್ 2 ರನ್ ಗಳಿಸಿದರು.
ಬೌಲಿಂಗ್‌ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಪರ ಭುವನೇಶ್ವರ್ ಕುಮಾರ್ 4 ಓವರ್‌ಗಳಲ್ಲಿ 41 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ಪ್ಯಾಟ್ ಕಮ್ಮಿನ್ಸ್ 4 ಓವರ್‌ಗಳಲ್ಲಿ 34 ರನ್ ನೀಡಿ 2 ವಿಕೆಟ್ ಪಡೆದರೆ, ಟಿ ನಟರಾಜನ್ 4 ಓವರ್‌ಗಳಲ್ಲಿ 35 ರನ್ ನೀಡಿ 2 ವಿಕೆಟ್ ಪಡೆದರು.

ಇದಕ್ಕೂ ಮುನ್ನ ಸನ್ ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಉತ್ತಮ ಆರಂಭ ನೀಡಲು ಸಾಧ್ಯವಾಗಲಿಲ್ಲ. ಈ ಜೋಡಿ ಮೊದಲ ವಿಕೆಟ್‌ಗೆ 4.1 ಓವರ್‌ಗಳಲಿ 25 ರನ್‌ಗಳ ಜೊತೆಯಾಟ ನಿರ್ಮಿಸಿದರು. ಈ ವೇಳೆ 12 ರನ್ ಗಳಿಸಿದ್ದ ಅಭಿಷೇಕ್ ಶರ್ಮಾ ಔಟಾದರು.
ನಂತರ ಬಂದ ಅನ್ಮೋಲ್‌ಪ್ರೀತ್ ಸಿಂಗ್ ಕೇವಲ 5 ರನ್‌ಗಳಿಗೆ ವಿಕೆಟ್ ಒಪ್ಪಿಸಿದರೆ, ಆರಂಭಿಕ ಬ್ಯಾಟರ್ ಟ್ರಾವಿಸ್ ಹೆಡ್ 44 ಎಸೆತಗಳಲ್ಲಿ 6 ಬೌಂಡರಿ ಹಾಗೂ 3 ಸಿಕ್ಸರ್ ಸಮೇತ 58 ರನ್ ಗಳಿಸಿ ಔಟಾದರು.
ಇನ್ನು ಮುರಿಯದ ನಾಲ್ಕನೇ ವಿಕೆಟ್‌ಗೆ ಜೊತೆಯಾದ ನಿತೀಶ್ ರೆಡ್ಡಿ ಮತ್ತು ಹೆನ್ರಿಚ್ ಕ್ಲಾಸೆನ್ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ನಿತೀಶ್ ರೆಡ್ಡಿ 42 ಎಸೆತಗಳಲ್ಲಿ 3 ಬೌಂಡರಿ ಹಾಗೂ 8 ಸಿಕ್ಸರ್ ಮೂಲಕ ಅಜೇಯ 76 ರನ್ ಗಳಿಸಿದರೆ, ಹೆನ್ರಿಚ್ ಕ್ಲಾಸೆನ್ 19 ಎಸೆತಗಳಲ್ಲಿ 3 ಬೌಂಡರಿ ಹಾಗೂ 3 ಸಿಕ್ಸರ್‌ಗಳ ನೆರವಿನಿಂದ ಅಜೇಯ 42 ರನ್ ಬಾರಿಸಿದರು.
ಇನ್ನು ಬೌಲಿಂಗ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪರ ಅವೇಶ್ ಖಾನ್ 4 ಓವರ್‌ಗಳಲ್ಲಿ 39 ರನ್ ನೀಡಿ 2 ವಿಕೆಟ್ ಪಡೆದರೆ, ಸಂದೀಪ್ ಶರ್ಮಾ 4 ಓವರ್‌ಗಳಲ್ಲಿ 31 ರನ್ ನೀಡಿ 1 ವಿಕೆಟ್ ಕಬಳಿಸಿದರೆ, ಉಳಿದವರು ವಿಫಲರಾದರು ಮತ್ತು ದುಬಾರಿಯಾದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications