
ಈ ಬಾರಿಯ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಗ್ರೂಪ್ 1ರಲ್ಲಿ ಸ್ಥಾನ ಪಡೆದುಕೊಂಡಿರುವ ಬಲಿಷ್ಠ ತಂಡಗಳಾದ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಅಂಕ ಪಟ್ಟಿಯಲ್ಲಿ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳನ್ನು ಪಡೆದುಕೊಂಡಿವೆ. ಹೀಗಾಗಿ ಇಂದು ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿರುವ ಪಂದ್ಯದಲ್ಲಿ ಜಯಗಳಿಸುವ ತಂಡ ಅಗ್ರಸ್ಥಾನವನ್ನು ಪಡೆದುಕೊಳ್ಳಲಿದ್ದು ಸಾಕಷ್ಟು ಕುತೂಹಲವನ್ನು ಕೆರಳಿಸಿದೆ.
ಹೌದು, ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಇದುವರೆಗೂ ಒಟ್ಟು 2 ಪಂದ್ಯಗಳನ್ನಾಡಿದ್ದು ಎರಡೂ ತಂಡಗಳು ಸಹ ತಾವು ಆಡಿದ ಎರಡೂ ಪಂದ್ಯಗಳಲ್ಲಿಯೂ ಗೆಲುವನ್ನು ಸಾಧಿಸುವುದರ ಮೂಲಕ ಉತ್ತಮ ಹಂತದಲ್ಲಿವೆ. ಇಯಾನ್ ಮಾರ್ಗನ್ ನಾಯಕತ್ವದ ಇಂಗ್ಲೆಂಡ್ ಟೂರ್ನಿಯಲ್ಲಿನ ತನ್ನ ಮೊದಲನೇ ಪಂದ್ಯದಲ್ಲಿ ಹಾಲಿ ಟಿ 20 ವಿಶ್ವಕಪ್ ಚಾಂಪಿಯನ್ಸ್ ಎನಿಸಿಕೊಂಡಿರುವ ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಜಯ ಸಾಧಿಸಿತು, ನಂತರ ತನ್ನ ದ್ವಿತೀಯ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಇಂಗ್ಲೆಂಡ್ ಭರ್ಜರಿ ಜಯ ಸಾಧಿಸಿತು.
ಇನ್ನು ಆ್ಯರನ್ ಫಿಂಚ್ ನಾಯಕತ್ವದ ಆಸ್ಟ್ರೇಲಿಯಾ ತಂಡ ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿಯ ತನ್ನ ಮೊದಲನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವನ್ನು ಸಾಧಿಸುವುದರ ಮೂಲಕ ಶುಭಾರಂಭವನ್ನು ಮಾಡಿತು, ನಂತರ ಶ್ರೀಲಂಕಾ ವಿರುದ್ಧ ನಡೆದ ಪಂದ್ಯದಲ್ಲಿಯೂ ಭರ್ಜರಿ ಜಯ ಸಾಧಿಸಿತು.
ಹೀಗೆ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ತಾವು ಆಡಿರುವ ಎರಡೂ ಪಂದ್ಯಗಳಲ್ಲಿಯೂ ಜಯ ಸಾಧಿಸುವುದರ ಮೂಲಕ 4 ಅಂಕಗಳನ್ನು ಪಡೆದುಕೊಂಡಿವೆ. ಹೀಗೆ ಇಂದು ನಡೆಯಲಿರುವ ಸೆಣಸಾಟದಲ್ಲಿ ಗೆಲ್ಲುವ ತಂಡ 6 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಲಿದೆ.
ಇನ್ನು ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ 26ನೇ ಪಂದ್ಯವಾಗಿದ್ದು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ.
ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಟಿ ಟ್ವೆಂಟಿ ಪಂದ್ಯಗಳ ಮುಖಾಮುಖಿಯ ಫಲಿತಾಂಶ:
* ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಟಿ ಟ್ವೆಂಟಿ ಕ್ರಿಕೆಟ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 20 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ಪಂದ್ಯಗಳ ಪೈಕಿ 10 ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದ್ದರೆ, 8 ಪಂದ್ಯಗಳಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿದೆ, 1 ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ ಹಾಗೂ ಮತ್ತೊಂದು ಪಂದ್ಯ ಯಾವುದೇ ಫಲಿತಾಂಶವಿಲ್ಲದೆ ಮುಗಿದಿದೆ. ಈ ಮೂಲಕ ಆಸ್ಟ್ರೇಲಿಯಾ ಇಂಗ್ಲೆಂಡ್ ವಿರುದ್ಧದ ಒಟ್ಟಾರೆ ಟಿ ಟ್ವೆಂಟಿ ಪಂದ್ಯಗಳ ಮುಖಾಮುಖಿಯಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ.
* ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಕ್ರೀಡಾಂಗಣದಲ್ಲಿ ಇತ್ತಂಡಗಳು ಇದುವರೆಗೂ ಯಾವುದೇ ಪಂದ್ಯದಲ್ಲಿಯೂ ಸೆಣಸಾಟವನ್ನು ನಡೆಸಿಲ್ಲ.
* ಇನ್ನು ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಇದುವರೆಗೂ ಒಟ್ಟು 2 ಐಸಿಸಿ ಟ್ವೆಂಟಿ ವಿಶ್ವಕಪ್ ಪಂದ್ಯಗಳು ನಡೆದಿದ್ದು ಎರಡೂ ತಂಡಗಳು ತಲಾ ಒಂದೊಂದು ಪಂದ್ಯದಲ್ಲಿ ಜಯವನ್ನು ಸಾಧಿಸಿವೆ.