T20 World Cup 2024 Final: ಕುಸಿದ ಭಾರತಕ್ಕೆ ಕೊಹ್ಲಿ-ಅಕ್ಷರ್ ಆಸರೆ; ದಕ್ಷಿಣ ಆಫ್ರಿಕಾಕ್ಕೆ ಸವಾಲಿನ ಗುರಿ
ಶನಿವಾರ, ಜೂನ್ 29ರಂದು ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆಯುತ್ತಿರುವ 2024ರ ಐಸಿಸಿ ಟಿ20 ವಿಶ್ವಕಪ್‌ನ ಬಹು ನಿರೀಕ್ಷಿತ ಫೈನಲ್ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಸವಾಲಿನ ಮೊತ್ತ ಕಲೆಹಾಕಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ವಿರಾಟ್ ಕೊಹ್ಲಿ ಅವರ ನಿರ್ಣಾಯಕ ಅರ್ಧಶತಕ ಮತ್ತು ಅಕ್ಷರ್ ಪಟೇಲ್ ಅವರ ಅಮೋಘ ಆಟದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿದ್ದು, ದಕ್ಷಿಣ ಆಫ್ರಿಕಾ ತಂಡಕ್ಕೆ 177 ರನ್‌ಗಳ ಗುರಿ ನೀಡಿದೆ.

ಇದೇ ವೇಳೆ ಭಾರತ ತಂಡವು 176 ರನ್ ಗಳಿಸುವ ಮೂಲಕ ಟಿ20 ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ಅತ್ಯಧಿಕ ಮೊತ್ತವನ್ನು ಪೇರಿಸಿತು. ಈ ಮೊದಲು 2021ರ ಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡವು ನ್ಯೂಜಿಲೆಂಡ್ ವಿರುದ್ಧ 173 ರನ್ ಗಳಿಸಿದ್ದು ಅತ್ಯಧಿಕವಾಗಿತ್ತು.
ಫೈನಲ್ ಪಂದ್ಯದಲ್ಲಿ ಭಾರತ ತಂಡದ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ವೈಫಲ್ಯ ಅನುಭವಿಸಿದರೂ, ಕ್ರೀಸ್ ಕಚ್ಚಿಕೊಂಡು ಆಡಿದ ವಿರಾಟ್ ಕೊಹ್ಲಿ ಅವರು ಅಕ್ಷರ್ ಪಟೇಲ್ ಪಟೇಲ್ ಅವರೊಂದಿಗೆ ವಿಕೆಟ್ ಕಾಯ್ದುಕೊಂಡು ರನ್ ಹೆಚ್ಚಿಸಲು ಪ್ರಯತ್ನಿಸಿದರು.
ಭಾರತ ತಂಡದ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಆಕ್ರಮಣಕಾರಿಯಾಗಿಯೇ ಆರಂಭಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 1.4 ಓವರ್‌ಗಳಲ್ಲಿ 23 ರನ್‌ಗಳ ಜೊತೆಯಾಟ ನಿರ್ಮಿಸಿತ್ತು ಈ ವೇಳೆ ರೋಹಿತ್ ಶರ್ಮಾ ಕೇಶವ್ ಮಹಾರಾಜ್ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿದರು.

ನಂತರ ಬಂದ ರಿಷಭ್ ಪಂತ್ ಸೊನ್ನೆಗೆ ಔಟಾಗುವ ಮೂಲಕ ನಿರಾಸೆ ಮೂಡಿಸಿದರೆ, ಸೂರ್ಯಕುಮಾರ್ ಯಾದವ್ ಕೇವಲ 3 ರನ್ ಗಳಿಸಿ ಪೆವಿಲಿಯನ್ ಸೇರಿದರು. ಈ ವೇಳೆ ಭಾರತ ತಂಡ 4.3 ಓವರ್‌ಗಳಲ್ಲಿ 34 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.
ಆಗ ಜೊತೆಯಾದ ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಜೋಡಿ ನಾಲ್ಕನೇ ವಿಕೆಟ್‌ಗೆ 72 ರನ್‌ಗಳ ಜೊತೆಯಾಟ ನೀಡಿದರು. ಅಕ್ಷರ್ ಪಟೇಲ್ 31 ಎಸೆತಗಳಲ್ಲಿ 1 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಮೂಲಕ 47 ರನ್ ಗಳಿಸಿ ಆಡುತ್ತಿದ್ದಾಗ ಇಲ್ಲದ ರನ್ ಕದಿಯಲು ಹೋಗಿ ರನೌಟ್ ಆದರು.
ಇನ್ನು ತಂಡವನ್ನು ಸಂಕಷ್ಟದಿಂದ ಪಾರು ವಿರಾಟ್ ಕೊಹ್ಲಿ ಈ ವಿಶ್ವಕಪ್‌ನಲ್ಲಿ ಮೊದಲ ಅರ್ಧಶತಕ ಗಳಿಸಿದರು. 59 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಮೇತ 76 ರನ್ ಗಳಿಸಿ ಔಟಾದರು.
ಶಿವಂ ದುಬೆ 16 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 27 ರನ್ ಗಳಿಸಿದರೆ, ಹಾರ್ದಿಕ್ ಪಾಂಡ್ಯ 5 ರನ್ ಮತ್ತು ರವೀಂದ್ರ ಜಡೇಜಾ 2 ರನ್ ಗಳಿಸಿ ತಂಡದ ಮೊತ್ತವನ್ನು 170ರ ಗಡಿ ದಾಟಿಸಿದರು.
ಬೌಲಿಂಗ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡದ ಪರ ಕೇಶವ್ ಮಹಾರಾಜ್ 3 ಓವರ್‌ಗಳಲ್ಲಿ 23 ರನ್ ನೀಡಿ 2 ವಿಕೆಟ್ ಪಡೆದರೆ, ಅನ್ರಿಚ್ ನಾರ್ಟ್ಜೆ 4 ಓವರ್‌ಗಳಲ್ಲಿ 26 ರನ್ ನೀಡಿ 2 ವಿಕೆಟ್ ಕಬಳಿಸಿದರು. ಉಳಿದಂತೆ ಮಾರ್ಕೊ ಜಾನ್ಸೆನ್ ಮತ್ತು ಕಗಿಸೊ ರಬಾಡ ತಲಾ ಒಂದೊಂದು ವಿಕೆಟ್ ಪಡದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications