ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶನಿವಾರ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಿದೆ. ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ನಾಯಕ ಸೂರ್ಯಕುಮಾರ್ ಯಾದವ್ 15 ಸದಸ್ಯರ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಜನವರಿ 22 ರಂದು ಕೋಲ್ಕತ್ತಾದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆನ ಮೊದಲ ಟಿ20 ಪಂದ್ಯ ನಡಯಲಿದೆ. ಬಿಸಿಸಿಐ ಪ್ರಕಟಿಸಿರುವ ಭಾರತ ತಂಡದಲ್ಲಿರುವ ಐವರು ಬಿಗ್ ಮ್ಯಾಚ್ ವಿನ್ನರ್‌ಗಳನ್ನು ನೋಡದ ಅಭಿಮಾನಿಗಳು ಆಶ್ಚರ್ಯಚಕಿತರಾಗಿದ್ದಾರೆ. ಆ 5 ಹೆಸರುಗಳು ಯಾರು ಮತ್ತು ಅವರನ್ನು ಏಕೆ ಆಯ್ಕೆ ಮಾಡಿಲ್ಲ ಎಂಬುದುರ ಬಗ್ಗೆ ಇಲ್ಲಿದೆ ಮಾಹಿತಿ.
ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಬಳಿಕ ಏಕದಿನ ಸರಣಿ ಆರಂಭವಾಗಲಿದೆ. ಇದಾದ ಕೆಲವೇ ದಿನಗಳಲ್ಲಿ ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿ ಕೂಡ ಪ್ರಾರಂಭವಾಗಲಿದೆ. ಇಂತಹ ಸಂದರ್ಭದಲ್ಲಿ ಬಿಸಿಸಿಐ ಅಳೆದು ತೂಗಿ ಬಲಿಷ್ಠ ಟೀಮ್ ಇಂಡಿಯಾವನ್ನು ಪ್ರಕಟಿಸಿದೆ. ಆದರೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಿಂದ ಟೀಮ್ ಇಂಡಿಯಾ ಬಿಗ್ ಮ್ಯಾಚ್ ವಿನ್ನರ್‌ಗಳು ಹೊರಗುಳಿದಿರುವುದು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಬೇಸರ ತರಿಸಿದೆ.

ಯಶಸ್ವಿ ಜೈಸ್ವಾಲ್
ಸ್ಟಾರ್ ಓಪನರ್ ಬ್ಯಾಟರ್ ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿಲ್ಲ. ಅವರು ಇತ್ತೀಚೆಗೆ ಮುಕ್ತಾಯಗೊಂಡ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಟೀಮ್ ಇಂಡಿಯಾದ ಭಾಗವಾಗಿದ್ದರು. ಈ ಟೆಸ್ಟ್ ಸರಣಿಯಲ್ಲಿ ಅವರು ಎಲ್ಲಾ 5 ಪಂದ್ಯಗಳನ್ನು ಆಡಿದ್ದರು. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಿಂದ ಯಶಸ್ವಿಗೆ ವಿಶ್ರಾಂತಿ ನೀಡಲಾಗಿದೆ. ಏಕದಿನ ಸರಣಿ ಹಾಗೂ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಅವರಿಗೆ ಸ್ಥಾನ ಸಿಗಬಹುದು.
ಜಸ್ಪ್ರೀತ್ ಬುಮ್ರಾ
ಟೀಮ್ ಇಂಡಿಯಾದ ಒನ್ ಮ್ಯಾನ್ ಆರ್ಮಿ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕೂಡ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಿಂದ ವಿಶ್ರಾಂತಿ ಪಡೆದಿದ್ದಾರೆ. ಬಾರ್ಡರ್ ಗವಾಸ್ಕರ್ ಟ್ರೋಫಿಯ ಕೊನೆಯ ಟೆಸ್ಟ್‌ನಲ್ಲಿ ಬುಮ್ರಾ ಗಾಯಗೊಂಡಿದ್ದರು. ಇಂತಹ ಸಂದರ್ಭದಲ್ಲಿ ಬುಮ್ರಾ ಅವರಿಗೆ ವಿಶ್ರಾಂತಿ ಮುಖ್ಯವಾಗಿದೆ. ಏಕೆಂದರೆ ಭಾರತ ತಂಡ ಫೆಬ್ರವರಿ 19 ರಿಂದ ಚಾಂಪಿಯನ್ಸ್ ಟ್ರೋಫಿ ಆಡಲಿದೆ. ಹೀಗಾಗಿ ಬಿಸಿಸಿಐ ಆಯ್ಕೆ ಸಮಿತಿ ಬುಮ್ರಾ ಅವರಿಗೆ ವಿಶ್ರಾಂತಿ ನೀಡಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಬುಮ್ರಾ ಸಂಪೂರ್ಣ ಫಿಟ್ ಆಗಿ ಮರಳುವ ನಿರೀಕ್ಷೆಯಿದೆ.
ಶುಭಮನ್ ಗಿಲ್
ಭಾರತದ ಸ್ಟಾರ್ ಬ್ಯಾಟರ್ ಶುಭಮನ್ ಗಿಲ್ ಕೂಡ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ತಂಡದಲ್ಲಿಲ್ಲ. ಆದರೆ, ಮೂರು ಪಂದ್ಯಗಳ ಏಕದಿನ ಸರಣಿಗೆ ಅವರು ತಂಡವನ್ನು ಸೇರಿಕೊಳ್ಳುವ ಎಲ್ಲ ಸಾಧ್ಯತೆಗಳಿವೆ. ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಗಿಲ್ ಸ್ಥಾನ ಬಹುತೇಕ ಖಚಿತವಾಗಿದೆ. ಏಕದಿನ ಮಾದರಿಯಲ್ಲಿ ಗಿಲ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ಆಸ್ಟ್ರೇಲಿಯಾ ವಿರುದ್ದದ ಟೆಸ್ಟ್ ಸರಣಿಯಲ್ಲಿ ಗಿಲ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ.
ರಿಷಬ್ ಪಂತ್
ವಿಕೆಟ್ ಕೀಪರ್-ಬ್ಯಾಟರ್ ರಿಷಬ್ ಪಂತ್ ಅವರಿಗೂ ಟಿ20 ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಅವರ ಫಿಟ್ನೆಸ್ ಮತ್ತು ಕೆಲಸದ ಹೊರೆಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್- ಬ್ಯಾಟರ್ ಆಗಿ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಜೊತೆಗೆ ಧ್ರುವ್ ಜುರೆಲ್ ಕೂಡ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದಾರೆ. ಪಂತ್ ಚಾಂಪಿಯನ್ಸ್ ಟ್ರೋಫಿ ಭಾರತ ತಂಡದ ಭಾಗವಾಗಲಿದ್ದಾರೆ.
ಮೊಹಮ್ಮದ್ ಸಿರಾಜ್
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಪ್ರಕಟಿಸಲಾಗಿರುವ ಭಾರತ ತಂಡದಲ್ಲಿ ವೇಗಿ ಮೊಹಮ್ಮದ್ ಸಿರಾಜ್ ಸ್ಥಾನ ಪಡೆದಿಲ್ಲ. ಅವರ ಫಿಟ್ನೆಸ್ ಅನ್ನು ಗಮನದಲ್ಲಿಟ್ಟುಕೊಂಡು ಆಯ್ಕೆಗಾರರು ಅವರಿಗೆ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ. ಬುಮ್ರಾ ಮತ್ತು ಸಿರಾಜ್ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ತಂಡದ ವೇಗದ ಬೌಲಿಂಗ್‌ನ ಭಾರವನ್ನು ತಮ್ಮ ಹೆಗಲ ಮೇಲೆ ಹೊತ್ತಿದ್ದರು. ಚಾಂಪಿಯನ್ಸ್ ಟ್ರೋಫಿಗಾಗಿ ಯಾವುದೇ ಅಪಾಯವನ್ನು ತೆಗೆದುಕೊಳ್ಳದೆ, ಬಿಸಿಸಿಐ ಅವರಿಗೆ ವಿಶ್ರಾಂತಿ ನೀಡಲು ನಿರ್ಧರಿಸಿದೆ.
ಟಿ20 ಸರಣಿಗೆ ಭಾರತ ತಂಡ
ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉಪನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್ , ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್ (ವಿಕೆಟ್ ಕೀಪರ್).